
ಹುಬ್ಬಳ್ಳಿ, 04 ಅಕ್ಟೋಬರ್ (ಹಿ.ಸ.):
ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಪೂರ್ವಸಿದ್ಧತಾ ಸಭೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಉದ್ಘಾಟಿಸಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಪದವೀಧರರು ಹಾಗೂ ಶಿಕ್ಷಿತ ಯುವಜನರ ಆಶೋತ್ತರಗಳಿಗೆ ಧ್ವನಿಯಾಗುವುದರ ಜೊತೆಗೆ, ಅವರ ಹಕ್ಕು ಮತ್ತು ಹಿತಾಸಕ್ತಿಗಳನ್ನು ಪರಿಣಾಮಕಾರಿಯಾಗಿ ಪ್ರತಿನಿಧಿಸುವ ಜವಾಬ್ದಾರಿ ಪಕ್ಷದ ಮೇಲಿದೆ ಎಂದು ಅವರು ಹೇಳಿದರು.
ಈ ನಿಟ್ಟಿನಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ತಳಮಟ್ಟದಿಂದ ಸಂಘಟಿತರಾಗಿ ಮತದಾರರನ್ನು ತಲುಪಬೇಕು. ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಪಕ್ಷದ ಸಂಘಟನಾ ಶಕ್ತಿ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದರು.
ಸಭೆಯಲ್ಲಿ ಸಚಿವ ಸಂತೋಷ ಲಾಡ್, ಶಾಸಕರಾದ ಎನ್.ಎಚ್. ಕೋನರೆಡ್ಡಿ, ಎಫ್.ಎಚ್. ಜಕ್ಕಪ್ಪಣ್ಣವರ, ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸದಾನಂದ ಡಂಗನವರ, ಧಾರವಾಡ ಗ್ರಾಮೀಣ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಜುಟ್ಟಲ್, ಮಾಜಿ ಸಂಸದ ಐ.ಜಿ. ಸನದಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ಹುಡಾ ಅಧ್ಯಕ್ಷ ರಾಬರ್ಟ್ ದದ್ದಾಪುರಿ, ನಾಗರಾಜ್ ಗೌರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.