
ಬೆಂಗಳೂರು, 05 ಅಕ್ಟೋಬರ್ (ಹಿ.ಸ.):
ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕರಡು ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅರ್ಹ ಮತದಾರರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸುವ ಕ್ರಮಕ್ಕೆ ಚುನಾವಣಾ ಆಯೋಗ ಮುಂದಾಗಿದೆ.
ಎಸ್ಐಆರ್ ಪ್ರಕ್ರಿಯೆಯಲ್ಲಿ ಗೈರುಹಾಜರಿ, ಸ್ಥಳಾಂತರ, ಮೃತಪಟ್ಟವರು, ದ್ವಂದ್ವ ನೋಂದಣಿ ಸೇರಿದಂತೆ ವಿವಿಧ ಕಾರಣಗಳಡಿ ಹಲವು ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಹೊರಗಿಡಲಾಗಿದೆ.
ಇಂತಹ ಸಂದರ್ಭಗಳಲ್ಲಿ ನಿಜವಾದ ಅರ್ಹ ಮತದಾರರು ತಮ್ಮ ಹೆಸರು ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗುವಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಚುನಾವಣಾ ಆಯೋಗದ ಪ್ರಕಾರ, ಕರಡು ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹರು ಫಾರ್ಮ್-6 ಮೂಲಕ ನೋಂದಣಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈಗಾಗಲೇ ಕರಡು ಪಟ್ಟಿಯಲ್ಲಿ ಹೆಸರು ಹೊಂದಿರುವ ಮತದಾರರು ಹೆಸರು, ವಿಳಾಸ ಸೇರಿದಂತೆ ವಿವರಗಳಲ್ಲಿ ತಿದ್ದುಪಡಿ ಅಗತ್ಯವಿದ್ದರೆ ಫಾರ್ಮ್-8 ಸಲ್ಲಿಸಬಹುದು.
ಎಸ್ಐಆರ್ ಪ್ರಕ್ರಿಯೆಯ ಉದ್ದೇಶ ಅರ್ಹ ಮತದಾರರ ಹೆಸರುಗಳನ್ನು ಕೈಬಿಡುವುದಲ್ಲ.
ಮತದಾರರ ಪಟ್ಟಿಯನ್ನು ನಿಖರಗೊಳಿಸುವುದರ ಜೊತೆಗೆ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಪರಿಶೀಲನೆ ಹಾಗೂ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ.
ಮತದಾರರು ತಮ್ಮ ಹೆಸರು ಕರಡು ಪಟ್ಟಿಯಲ್ಲಿ ಇದೆಯೇ, ಯಾವುದೇ ನೋಟಿಸ್ ನೀಡಲಾಗಿದೆಯೇ ಎಂಬುದನ್ನು ಚುನಾವಣಾ ಆಯೋಗದ ಅಧಿಕೃತ ಮತದಾರರ ಸೇವಾ ಪೋರ್ಟಲ್ನಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R