
ಬೆಂಗಳೂರು, 05 ಅಕ್ಟೋಬರ್ (ಹಿ.ಸ.):
ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಎದುರಾಗಿದೆ.
ಕರ್ನಾಟಕದ ನಾಲ್ಕು ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆ ಕುರಿತು ಸರ್ಕಾರ ಈ ವಾರವೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಡೀಸೆಲ್ ಬೆಲೆ ಏರಿಕೆ ಹಾಗೂ ಸಾರಿಗೆ ನಿಗಮಗಳ ಆರ್ಥಿಕ ಹೊರೆಯ ಹಿನ್ನೆಲೆಯಲ್ಲಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಿದ್ಧವಾಗುತ್ತಿದೆ.
ಸಾರಿಗೆ ನಿಗಮಗಳಾದ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಪ್ರಕ್ರಿಯೆಯಲ್ಲಿವೆ.
ದರ ಎಷ್ಟು ಪ್ರಮಾಣದಲ್ಲಿ ಹೆಚ್ಚಿಸಬೇಕು ಎಂಬುದು ನಿಗಮಗಳಿಂದ ಬಂದ ವರದಿ ಹಾಗೂ ಸರ್ಕಾರದ ಪರಿಶೀಲನೆಯ ಬಳಿಕ ಅಂತಿಮವಾಗಲಿದೆ.
ಸಾರಿಗೆ ಸಚಿವ ಬೈರತಿ ಸುರೇಶ್ ಅವರು, ಕಳೆದ ಡಿಸೆಂಬರ್ನಲ್ಲಿ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡಲಾಗಿತ್ತು. ಅದರ ಬಳಿಕ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ ಸುಮಾರು ₹15–₹16ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
ನಾಲ್ಕೂ ಸಾರಿಗೆ ನಿಗಮಗಳಿಂದ ವಿವರವಾದ ಪ್ರಸ್ತಾವನೆಗಳನ್ನು ಕೇಳಲಾಗಿದ್ದು, ವರದಿ ಬಂದ ಬಳಿಕ ದರ ಏರಿಕೆಯ ಪ್ರಮಾಣವನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ಒಂದೇ ಪ್ರಮಾಣದಲ್ಲಿ ದರ ಹೆಚ್ಚಳ ಮಾಡುವ ಬದಲು, ವಿವಿಧ ಪ್ರದೇಶಗಳಲ್ಲಿ ಸಾರಿಗೆ ಕಾರ್ಯಾಚರಣೆಯ ವೆಚ್ಚ ಹಾಗೂ ಮಾರ್ಗಗಳ ಸ್ವರೂಪವನ್ನು ಪರಿಗಣಿಸಿ ಬೇರೆಬೇರೆ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡುವ ಸಾಧ್ಯತೆಯೂ ಇದೆ ಎಂದು ಸಚಿವರು ತಿಳಿಸಿದ್ದಾರೆ. ಅಂತಿಮ ನಿರ್ಧಾರಕ್ಕೆ ಸಚಿವ ಸಂಪುಟದ ಅನುಮೋದನೆ ಅಗತ್ಯವಾಗಲಿದೆ.
ಸಾರಿಗೆ ನಿಗಮಗಳ ಮೇಲೆ ಹೆಚ್ಚುತ್ತಿರುವ ಆರ್ಥಿಕ ಒತ್ತಡವೂ ದರ ಏರಿಕೆಗೆ ಪ್ರಮುಖ ಕಾರಣವಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಒಟ್ಟು ಬಾಧ್ಯತೆ ₹8,095 ಕೋಟಿಗೆ ತಲುಪಿದ್ದು, ಶಕ್ತಿ ಯೋಜನೆಯಡಿ ಸರ್ಕಾರದಿಂದ ಬರಬೇಕಿರುವ ಬಾಕಿ ಮೊತ್ತವೂ ಸಾವಿರಾರು ಕೋಟಿ ರೂಪಾಯಿಗಳಷ್ಟಿದೆ. ಹೀಗಾಗಿ, ಸರ್ಕಾರದ ಅಂತಿಮ ನಿರ್ಧಾರದ ಬಳಿಕ ಬಸ್ ಪ್ರಯಾಣ ದರ ಏರಿಕೆ ಕುರಿತು ಮಾಹಿತಿ ಲಭ್ಯವಾಗಲಿದೆ.
--------------
ಹಿಂದೂಸ್ತಾನ್ ಸಮಾಚಾರ್ / BHARGAVI G R