
ಮಂಗಳೂರು, 05 ಅಕ್ಟೋಬರ್ (ಹಿ.ಸ.):
ಸದೃಢ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಸಾರ್ವಜನಿಕರು ತಮ್ಮ ಆಹಾರ ಪದ್ಧತಿ ಮತ್ತು ಜೀವನಶೈಲಿಯಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಯುಷ್ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಧುನಿಕ ಜೀವನಶೈಲಿಯಲ್ಲಿ ಜನರು ನಾಲಿಗೆಯ ರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.
ಆದರೆ, ಆಹಾರವು ಕೇವಲ ರುಚಿಗಾಗಿ ಮಾತ್ರವಲ್ಲದೆ ದೇಹದ ಆರೋಗ್ಯವನ್ನು ಕಾಪಾಡುವ ಪ್ರಮುಖ ಸಾಧನವಾಗಿದೆ ಎಂದು ಹೇಳಿದರು.
“ರುಚಿಗಿಂತ ಆರೋಗ್ಯಕ್ಕೆ ಆದ್ಯತೆ ನೀಡಿ”ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುವ ಆರೋಗ್ಯಕರ ಹಾಗೂ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಸೇವನೆಗೆ ಸಾರ್ವಜನಿಕರು ಹೆಚ್ಚಿನ ಆದ್ಯತೆ ನೀಡಬೇಕು.
ರುಚಿಗೆ ಮಾರುಹೋಗದೆ ದೇಹದ ಆರೋಗ್ಯಕ್ಕೆ ಪೂರಕವಾದ ಆಹಾರವನ್ನು ಆಯ್ಕೆ ಮಾಡಿಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಯು.ಟಿ. ಖಾದರ್ ಸಲಹೆ ನೀಡಿದರು.
ಬಾಲ್ಯದಿಂದಲೇ ಪೌಷ್ಟಿಕ ಆಹಾರದ ಅಭ್ಯಾಸಮಕ್ಕಳ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಯ ಹಂತದಲ್ಲಿ ಅಪೌಷ್ಟಿಕತೆ ಉಂಟಾಗದಂತೆ ಪೋಷಕರು, ವಿಶೇಷವಾಗಿ ತಾಯಂದಿರು, ಬಾಲ್ಯದಿಂದಲೇ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಅಭ್ಯಾಸ ಬೆಳೆಸಬೇಕು.
ಆರೋಗ್ಯಕರ ಆಹಾರ ಪದ್ಧತಿಯೇ ಸದೃಢ ಕುಟುಂಬ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಅಡಿಪಾಯವಾಗಿದೆ ಎಂದು ಅವರು ತಿಳಿಸಿದರು.ಕಾರ್ಯಕ್ರಮದ ಅಂಗವಾಗಿ ಸಾಂಪ್ರದಾಯಿಕ ಸೀಮಂತ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಅನ್ನಪ್ರಾಶನ ನೆರವೇರಿಸಲಾಯಿತು.
ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಚ್ಯವನಪ್ರಾಶ ವಿತರಿಸಲಾಯಿತು.ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R