
ಬೆಂಗಳೂರು, 06 ಅಕ್ಟೋಬರ್ (ಹಿ.ಸ.):
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ರಸ್ತೆ, ಸಂಚಾರ, ಒಳಚರಂಡಿ ಹಾಗೂ ಮೂಲಸೌಕರ್ಯ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ದಿಣ್ಣೂರು ಮುಖ್ಯ ರಸ್ತೆಯಲ್ಲಿ ವಾಹನ ದಟ್ಟಣೆ ಹಾಗೂ ರಸ್ತೆ ಕಿರಿದಾಗಿರುವ ಸಮಸ್ಯೆಯನ್ನು ಪರಿಶೀಲಿಸಿದ ಅವರು, ಸಂಚಾರ ಸುಗಮಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಂಚಾರ ಪೊಲೀಸರೊಂದಿಗೆ ಸಮನ್ವಯ ಸಾಧಿಸಿ ರಸ್ತೆಯಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ದಿಣ್ಣೂರು ಮುಖ್ಯ ರಸ್ತೆಯ ಬಾಟಲ್ನೆಕ್ ಪ್ರದೇಶಗಳಲ್ಲಿ ಅಗತ್ಯವಿದ್ದಲ್ಲಿ ರಸ್ತೆ ಅಗಲೀಕರಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ ಮಹೇಶ್ವರ ರಾವ್, ದೇವೇಗೌಡ ವೃತ್ತದ ಬಳಿ ಫ್ರೀ ಲೆಫ್ಟ್ ನಿರ್ಮಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ತಿಳಿಸಿದರು. ಟ್ಯಾನರಿ ರಸ್ತೆಯಲ್ಲಿಯೂ ರಸ್ತೆ ಅಗಲೀಕರಣದ ಸಾಧ್ಯತೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಮೃತಹಳ್ಳಿ 18ನೇ ಕ್ರಾಸ್ನಲ್ಲಿರುವ ಕಲ್ವರ್ಟ್ ಕಾಮಗಾರಿಯನ್ನು ರಸ್ತೆ ಮಟ್ಟಕ್ಕೆ ನಿರ್ಮಿಸುವಂತೆ ನಿರ್ದೇಶನ ನೀಡಿದ ಅವರು, ರಾಜಕಾಲುವೆಗೆ ಹರಿಯುತ್ತಿರುವ ಕೊಳಚೆ ನೀರಿನ ಮೂಲವನ್ನು ಪತ್ತೆಹಚ್ಚಿ, ಮೂಲದಲ್ಲಿಯೇ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಕ್ಕೂರು ಕೆ.ವಿ. ಜಯರಾಮ್ ರಸ್ತೆಯ ಕೃಷ್ಣ ಸಾಗರ್ ಹೋಟೆಲ್ ಬಳಿ ಫ್ರೀ ಲೆಫ್ಟ್ ನಿರ್ಮಾಣಕ್ಕೆ ತ್ವರಿತ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಸುಗಮಗೊಳಿಸುವುದು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಲಭ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ತ್ವರಿತಗೊಳಿಸಲಾಗುತ್ತಿದೆ.
ಸಮಸ್ಯೆ ಇರುವ ಸ್ಥಳಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಹೇಶ್ವರ ರಾವ್ ತಿಳಿಸಿದ್ದಾರೆ.
ಜಿಬಿಎ ಮುಖ್ಯ ಆಯುಕ್ತರ ಪರಿಶೀಲನೆಯ ಸಂದರ್ಭದಲ್ಲಿ ಬೆಂಗಳೂರು ಉತ್ತರ ನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R