
ಬೆಂಗಳೂರು, 06 ಅಕ್ಟೋಬರ್ (ಹಿ.ಸ.):
ಪ್ರಜಾಪ್ರಭುತ್ವದ ಪಾವಿತ್ರ್ಯವನ್ನು ರಕ್ಷಿಸಲು ಇಂದು ಒಗ್ಗಟ್ಟಾಗಿ ನಿಂತಿರುವ ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇಂಡಿಯಾ ಕೂಟದ ಎಲ್ಲ ನಾಯಕರ ಪರವಾಗಿ ತಾನು ದೃಢವಾಗಿ ನಿಲ್ಲುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸುವುದು, ಹೊಣೆಗಾರಿಕೆಯನ್ನು ಖಚಿತಪಡಿಸುವುದು ಹಾಗೂ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಇಂಡಿಯಾ ಕೂಟದ ನಾಯಕರ ಒಗ್ಗಟ್ಟಿನ ಸಂಕಲ್ಪವು ಭಾರತದ ಜನತೆ ಹಾಗೂ ಸಂವಿಧಾನದ ಮೌಲ್ಯಗಳ ಬಗೆಗಿನ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಇರಬೇಕು. ಅರ್ಹ ಯಾವುದೇ ಮತದಾರನಿಗೂ ಮತದಾನದ ಹಕ್ಕು ನಿರಾಕರಿಸಬಾರದು ಎಂದು ಅವರು ಆಗ್ರಹಿಸಿದ್ದಾರೆ.
ಗಂಭೀರ ಕಳವಳಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಿ ಹೊಣೆಗಾರಿಕೆ ವಹಿಸಬೇಕು ಎಂದು ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.
ಪ್ರತಿಯೊಬ್ಬ ಮತದಾರ, ಪ್ರತಿಯೊಂದು ಮತ ಹಾಗೂ ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಸಮಗ್ರತೆಯನ್ನು ಚುನಾವಣಾ ಆಯೋಗ ಕಾಪಾಡಬೇಕು. ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಒಗ್ಗಟ್ಟಿನಿಂದ ಹೋರಾಟ ಮುಂದುವರಿಸುವುದಾಗಿ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.