ದಸರಾ ರಜೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ಕೆರೆಗೆ ಬಿದ್ದು ಸಾವು
ದಸರಾ ರಜೆ ಹಿನ್ನೆಲೆಯಲ್ಲಿ ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೂವರು ಬಾಲಕರ ಸಾವಿನಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಶೋಕ ಆವರಿಸಿದೆ.
chikkamagaluru-dasara-holiday-three-boys-drown-in-lake-and-die


ಚಿಕ್ಕಮಗಳೂರು, 06 ಅಕ್ಟೋಬರ್ (ಹಿ.ಸ.):

ದಸರಾ ರಜೆ ಹಿನ್ನೆಲೆಯಲ್ಲಿ ಕೆರೆಗೆ ಈಜಲು ತೆರಳಿದ್ದ ಮೂವರು 12 ವರ್ಷದ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಮೃತರನ್ನು ತರುಣ್, ಭುವನ್ ಹಾಗೂ ಲಿಖಿತ್ ಎಂದು ಗುರುತಿಸಲಾಗಿದೆ. ಮೂವರೂ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಒಂದೇ ಗ್ರಾಮದವರಾಗಿದ್ದರು ಎಂದು ತಿಳಿದುಬಂದಿದೆ.

ರಜೆ ಇದ್ದ ಹಿನ್ನೆಲೆಯಲ್ಲಿ ಸ್ನೇಹಿತರಾದ ಮೂವರು ಗ್ರಾಮದ ಚಿಕ್ಕ ಕೆರೆಗೆ ಈಜಲು ತೆರಳಿದ್ದರು.

ಈ ವೇಳೆ ಕೆರೆಯ ಆಳದ ಅರಿವಿಲ್ಲದೆ ನೀರಿಗೆ ಇಳಿದ ಬಾಲಕರು ಆಳವಾದ ಗುಂಡಿಯೊಂದರಲ್ಲಿ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ.

ಸ್ಥಳೀಯರು ರಕ್ಷಣೆಗೆ ಧಾವಿಸಿದರೂ ಬಾಲಕರನ್ನು ಉಳಿಸಲು ಸಾಧ್ಯವಾಗಲಿಲ್ಲ. ಬಳಿಕ ಮೂವರ ಮೃತದೇಹಗಳನ್ನು ಕೆರೆಯಿಂದ ಹೊರತೆಗೆಯಲಾಗಿದೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಯಲ್ಲಿ ಕಳೆದ ವರ್ಷ ಹೂಳು ತೆರವುಗೊಳಿಸಲಾಗಿದ್ದು, ಇದರಿಂದ ಕೆಲವು ಭಾಗಗಳಲ್ಲಿ ನೀರಿನ ಆಳ ಹೆಚ್ಚಾಗಿತ್ತು ಎನ್ನಲಾಗಿದೆ.

ಈ ಬಗ್ಗೆ ಅರಿವಿಲ್ಲದೆ ಮಕ್ಕಳು ನೀರಿಗೆ ಇಳಿದಿರುವುದು ದುರಂತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರ ತಿಳಿಸಿದ್ದಾರೆ.

ಮೂವರು ಬಾಲಕರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮರ್ಲೆ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande