
ಬೆಂಗಳೂರು, 06 ಅಕ್ಟೋಬರ್ (ಹಿ.ಸ.):
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ಮತ್ತಷ್ಟು ಚುರುಕುಗೊಳಿಸಿದ್ದು, ಕೆಪಿಎಸ್ಸಿಯ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಹಾಲಿ ಸದಸ್ಯೆ ಬಿ.ವಿ. ಗೀತಾ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದೆ.
ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಅಭ್ಯರ್ಥಿಗಳಿಂದ ಹಣ ಪಡೆಯುವುದು ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇಡಿ ತನಿಖೆ ನಡೆಸುತ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಪಿಎಸ್ಸಿಯ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಇಡಿ ಶೋಧ ನಡೆಸಿತ್ತು.
ತನಿಖೆ ವೇಳೆ ಕೆಪಿಎಸ್ಸಿ ಪರೀಕ್ಷೆಗಳ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲ ಅಧಿಕಾರಿಗಳು ಹಾಗೂ ಸದಸ್ಯರ ಹೆಸರುಗಳು ಪ್ರಸ್ತಾಪವಾಗಿವೆ ಎಂದು ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿದೆ. ಹಾಲಿ ಸದಸ್ಯೆ ಬಿ.ವಿ. ಗೀತಾ ಅವರ ಹೆಸರೂ ವಿಚಾರಣೆಯಲ್ಲಿ ಕೇಳಿಬಂದಿದೆ ಎನ್ನಲಾಗಿದೆ.
ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ್ ಗಂಗ್ವಾರ್ ಅವರನ್ನು ಈ ಪ್ರಕರಣದಲ್ಲಿ ಸಿಐಡಿ ಬಂಧಿಸಿದ್ದು, ಬಳಿಕ ಇಡಿಯೂ ಬಂಧಿಸಿತ್ತು.
ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕರಣದ ಜೊತೆಗೆ ಅವರ ಅಧಿಕಾರಾವಧಿಯಲ್ಲಿ ನಡೆದ ಇತರ ಕೆಪಿಎಸ್ಸಿ ಪರೀಕ್ಷೆಗಳಲ್ಲೂ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ಇಡಿ ತನಿಖೆ ಮುಂದುವರಿಸಿದೆ.
ನೇಮಕಾತಿ ಅಕ್ರಮದ ಮೂಲಕ ಸಂಗ್ರಹಿಸಲಾಗಿದೆ ಎನ್ನಲಾದ ಹಣದ ಜಾಡು ಪತ್ತೆಹಚ್ಚಲು ಆಸ್ತಿಗಳು, ಬ್ಯಾಂಕ್ ಖಾತೆಗಳು ಹಾಗೂ ಆಭರಣಗಳ ಖರೀದಿ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R