
ಬೆಂಗಳೂರು, 06 ಅಕ್ಟೋಬರ್ (ಹಿ.ಸ.):
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಹಾಗೂ ಅಧಿಕಾರ ದುರುಪಯೋಗ ಮಾಡಿಕೊಂಡು ಪರಿಷ್ಕರಣೆ ಪ್ರಕ್ರಿಯೆಯನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ–ಜೆಡಿಎಸ್ ಒಳಗೊಂಡ ಎನ್ ಡಿ ಎ ನಿಯೋಗ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಅವರಿಗೆ ದೂರು ಸಲ್ಲಿಸಿದೆ.
ರಾಜ್ಯ ಸರ್ಕಾರವು ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಪಾರದರ್ಶಕವಾಗಿ ನಡೆಯಬೇಕಾದ ಎಸ್ಐಆರ್ ಪ್ರಕ್ರಿಯೆಯನ್ನು ದಾರಿ ತಪ್ಪಿಸುತ್ತಿದೆ ಎಂದು ನಿಯೋಗ ಆರೋಪಿಸಿದೆ.
ಅಲ್ಲದೆ, ರಾಜ್ಯದ ಪ್ರಜೆಗಳಲ್ಲದ ವ್ಯಕ್ತಿಗಳನ್ನು ಮತದಾರರ ಪಟ್ಟಿಯಲ್ಲಿ ಉಳಿಸುವ ಅಥವಾ ಹೊಸದಾಗಿ ಸೇರಿಸುವ ಪ್ರಯತ್ನ ನಡೆಯುತ್ತಿದೆ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡಲಾಗಿದೆ.
ಈ ಕುರಿತು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ನಿಯೋಗದ ಅಹವಾಲುಗಳನ್ನು ರಾಜ್ಯಪಾಲರು ಆಲಿಸಿದ್ದಕ್ಕಾಗಿ ಎನ್ಡಿಎ ನಾಯಕರು ಕೃತಜ್ಞತೆ ಸಲ್ಲಿಸಿದ್ದಾರೆ.
ನಿಯೋಗದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಸಂಸದರಾದ ಪಿ.ಸಿ. ಮೋಹನ್ ಹಾಗೂ ಮಲ್ಲೇಶ್ ಬಾಬು, ಶಾಸಕರಾದ ಎಸ್.ಎಲ್. ಭೋಜೇಗೌಡ, ಟಿ.ಎ. ಶರವಣ, ಶ್ರೀವತ್ಸ, ಮುನಿರಾಜು, ಮಂಜುಳಾ ಅರವಿಂದ ಲಿಂಬಾವಳಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ನ ಹಲವು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.
“ಪಾರದರ್ಶಕವಾಗಿ ನಡೆಯಬೇಕಿದ್ದ ಎಸ್ಐಆರ್ ಪ್ರಕ್ರಿಯೆಯನ್ನು ಸರ್ಕಾರ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ದಾರಿ ತಪ್ಪಿಸುತ್ತಿದೆ.
ರಾಜ್ಯದ ಪ್ರಜೆಗಳಲ್ಲದ ವ್ಯಕ್ತಿಗಳನ್ನು ಮತದಾರರ ಪಟ್ಟಿಯಲ್ಲಿ ಉಳಿಸುವ ಹಾಗೂ ಸೇರಿಸುವ ಹುನ್ನಾರ ನಡೆಯುತ್ತಿದೆ. ಈ ಕುರಿತು ರಾಜ್ಯಪಾಲರಿಗೆ ದೂರು ಸಲ್ಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R