
ಬೆಂಗಳೂರು, 07 ಅಕ್ಟೋಬರ್ (ಹಿ.ಸ.):
ರೈತರ ಹೆಸರಿನಲ್ಲಿ ಹಾಲಿನ ದರ ಹಾಗೂ ಬಸ್ ಪ್ರಯಾಣ ದರ ಏರಿಕೆ ಮಾಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಒಬ್ಬರಿಂದ ಕಿತ್ತುಕೊಂಡು ಮತ್ತೊಬ್ಬರಿಗೆ ನೀಡುವ ತುಘಲಕ್ ತೀರ್ಮಾನಗಳು ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ದಿವಾಳಿತನಕ್ಕೆ ಸಾಕ್ಷಿಯಾಗಿವೆ ಎಂದು ಟೀಕಿಸಿದ್ದಾರೆ. ಹಾಲು ಉತ್ಪಾದಕರನ್ನು ಸಂಕಷ್ಟಕ್ಕೆ ತಳ್ಳುವುದರ ಜತೆಗೆ ಸಾಮಾನ್ಯ ಜನರ ಜೇಬಿಗೂ ಕನ್ನ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹಿಂಡಿ, ಮೇವು ಹಾಗೂ ಪಶುವೈದ್ಯಕೀಯ ವೆಚ್ಚಗಳು ಹೆಚ್ಚಾಗಿರುವುದರಿಂದ ಹಾಲಿನ ಉತ್ಪಾದನಾ ವೆಚ್ಚ ಶೇ.40ರಷ್ಟು ಏರಿಕೆಯಾಗಿದೆ ಎಂದು ಸರ್ಕಾರವೇ ಹೇಳಿದೆ. ಹಲವು ತಿಂಗಳುಗಳಿಂದ ರೈತರಿಗೆ ನೀಡಬೇಕಾದ ಹಾಲಿನ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿರುವ ಸರ್ಕಾರ, ಇದೀಗ ಒಂದೇ ಬಾರಿಗೆ ಪ್ರತಿ ಲೀಟರ್‌ಗೆ ₹8ರಷ್ಟು ಹಾಲಿನ ದರ ಹೆಚ್ಚಿಸಲು ಸಚಿವ ಸಂಪುಟದ ಅನುಮೋದನೆ ಪಡೆದಿರುವುದು ರೈತರ ಹೆಸರಿನಲ್ಲಿ ಜನರಿಗೆ ಮಾಡುತ್ತಿರುವ ದ್ರೋಹ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಬಾರಿ ಹಾಲಿನ ದರ ಏರಿಕೆ ಮಾಡಿದೆ ಎಂದು ಹೇಳಿರುವ ಅವರು, ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮತ್ತೊಮ್ಮೆ ಜನಸಾಮಾನ್ಯರ ಮೇಲೆ ಹೊರೆ ಹಾಕಲಾಗುತ್ತಿದೆ ಎಂದು ಟೀಕಿಸಿದ್ದಾರೆ.
ಬಸ್ ಪ್ರಯಾಣ ದರ ಏರಿಕೆಗೂ ಸಚಿವ ಸಂಪುಟ ಅನುಮೋದನೆ ನೀಡಿರುವುದನ್ನು ವಿರೋಧಿಸಿರುವ ವಿಜಯೇಂದ್ರ, ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ಸಾರಿಗೆ ಸಂಸ್ಥೆಗಳನ್ನು ದಿವಾಳಿಯ ಅಂಚಿಗೆ ತಳ್ಳಿರುವ ಸರ್ಕಾರ, ತನ್ನ ವೈಫಲ್ಯದ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.
ವಿದ್ಯುತ್, ಆಸ್ತಿ ನೋಂದಣಿ ಶುಲ್ಕ, ಬಸ್ ದರ ಹಾಗೂ ಹಾಲಿನ ದರ ಸೇರಿದಂತೆ ವಿವಿಧ ದರಗಳನ್ನು ಏರಿಕೆ ಮಾಡುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲಿನ ಸಂಕಷ್ಟದ ಹೊರೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಮಾತನಾಡಿರುವ ವಿಜಯೇಂದ್ರ, ಬಸ್ ಮತ್ತು ಹಾಲಿನ ದರ ಏರಿಕೆಯ ಹೊರೆ ಹಾಕುವ ಮೊದಲು ಸರ್ಕಾರ ತನ್ನ ವೈಫಲ್ಯಗಳನ್ನು ಸರಿಪಡಿಸಿಕೊಳ್ಳಬೇಕಿತ್ತು ಎಂದು ಹೇಳಿದ್ದಾರೆ. ರೈತರಿಗೆ ನೀಡಬೇಕಾದ ಕೋಟ್ಯಂತರ ರೂಪಾಯಿ ಬಾಕಿ ಹಾಲಿನ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಜನಸ್ನೇಹಿ ಹಾಗೂ ರೈತಸ್ನೇಹಿ ನೀತಿಗಳನ್ನು ರೂಪಿಸುವ ಬದಲು ಸಾರ್ವಜನಿಕರನ್ನು ಸಂಕಷ್ಟಕ್ಕೆ ಸಿಲುಕಿಸುವ ದರ ಏರಿಕೆ ಪ್ರಸ್ತಾವನೆಯನ್ನು ಸರ್ಕಾರ ತಕ್ಷಣ ಕೈಬಿಡಬೇಕು. ಇಲ್ಲವಾದರೆ ಕೃಷಿಕರು ಮತ್ತು ಸಾರ್ವಜನಿಕರ ಪರವಾಗಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.