
ಗದಗ, 08 ಅಕ್ಟೋಬರ್ (ಹಿ.ಸ.)
ಗದಗ ಜಿಲ್ಲೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮವಹಿಸಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ವಿವಿಧ ಅಧಿಕಾರಿಗಳ ಸಮನ್ವಯದೊಂದಿಗೆ ಎದುರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ಹಿಂಗಾರು ಹಂಗಾಮಿನಲ್ಲಿ ಗ್ರಾಮೀಣ, ನಗರ ಪ್ರದೇಶದಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆಯ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕಾವಾರು ನೀರಿನ ಸಮಸ್ಯೆ ಇರುವ ಗ್ರಾಮಗಳ ಪಟ್ಟಿ ತಯಾರಿಸಿ ಸಲ್ಲಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕ್ರಮವಹಿಸಬೇಕು. ಜಲಾಶಯಗಳಿಂದ ನೀರು ಬಿಡುವ ಮುನ್ನ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜನ ಮತ್ತು ಜಾನುವಾರುಗಳಿಗೆ ಸಾಕಷ್ಟು ಕುಡಿಯುವ ನೀರು ಹಾಗೂ ಅಗತ್ಯ ಮೇವಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಜಲ ಜೀವನ್ ಮಿಷನ್ ಯೋಜನೆಯಡಿ ಕೈಗೆತ್ತಿಕೊಳ್ಳಲಾದ ಜೆಜೆಎಮ್ ಕಾಮಗಾರಿಗಳನ್ನು ತ್ವರಿತವಾಗಿ ಹಾಗೂ ಗುಣಮಟ್ಟದಿಂದ ಪೂರ್ಣಗೊಳಿಸಿ ಪ್ರತಿಯೊಂದು ಮನೆಗೆ ನಲ್ಲಿ ನೀರು ತಲುಪಿಸಬೇಕು ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ವಸತಿ ರಹಿತರಿಗೆ ನಿವೇಷನ ನೀಡಲು ಭೂಮಿ ಲಭ್ಯತೆ ಕುರಿತು ತಹಸೀಲ್ದಾರ್ ಹಾಗೂ ಇಒಗಳು ನೀಡಿದ ವರದಿಗಳನ್ನು ಪರಿಶೀಲಿಸಿ, ಸೂಕ್ತ ಭೂ ಸುಧಾರಣೆ ಹಾಗೂ ಲೆವೆಲಿಂಗ್ ಮಾಡಿ ನಿವೇಷನ ಜಾಗ ಒದಗಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕೆರೆಗಳಲ್ಲಿ ಪ್ರಸ್ತುತ ಸಂಗ್ರಹವಾಗಿರುವ ನೀರಿನ ಪ್ರಮಾಣ ಹಾಗೂ ಜಿಲ್ಲೆಯ ಅಂತರ್ಜಲ ಮಟ್ಟದ ವರದಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ನೀರನ್ನು ಸಮರ್ಪಕವಾಗಿ ಬಳಕೆ ಮಾಡಲು ಸೂಚಿಸಿದರು. ಅಲ್ಲದೆ ಕೆರೆಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ತಪಾಸಣೆ ಮಾಡಲು ನಿರ್ದೇಶಿಸಿದರು. ತೋಟಗಾರಿಕೆ ಇಲಾಖೆ ಕಾರ್ಯಕ್ರಮಗಳು ಹಾಗೂ ವಿಬಿಜಿ ರಾಮ್ ಜಿ ಯೋಜನೆಯ ಪ್ರಗತಿ ವಿವರಗಳನ್ನು ಪರಿಶೀಲಿಸಿ, ನಿಗದಿತ ಅವಧಿಯಲ್ಲಿ ಗುರಿ ತಲುಪಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚಿಸಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ. ಆರ್. ಮುಂಡರಗಿ ಮಾತನಾಡಿ ತಾಲೂಕುವಾರು ಗ್ರಾಮೀಣ ಉದ್ಯೋಗ ಖಾತ್ರಿ ಹಾಗೂ ವಿಬಿಜಿ ರಾಮ್ಜಿ ಕಾಮಗಾರಿಗಳ ಪ್ರಗತಿಯನ್ನು ವಿವರಿಸಿ, ಜಲಮೂಲಗಳ ಪುನಶ್ಚೇತನ ಹಾಗೂ ಕೆರೆ ಹೂಳೆತ್ತುವ ಕಾರ್ಯಗಳು ಪ್ರಗತಿಯಲ್ಲಿವೆ ಎಂದು ಮಾಹಿತಿ ನೀಡಿದರು.
ವಸತಿ ನಿವೇಶನ ಭೂ ಗುರುತಿಸುವಿಕೆ: ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಹಾಗೂ ಇಒಗಳ ಸಮನ್ವಯದೊಂದಿಗೆ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಭೂಮಿ ಗುರುತಿಸುವ ಹಾಗೂ ಸರ್ವೆ ಮಾಡುವ ಪ್ರಕ್ರಿಯೆ ಚುರುಕಿನಿಂದ ನಡೆಯುತ್ತಿದೆ ಎಂದು ಸಭೆಯಲ್ಲಿ ವಿವರಿಸಿದರು.
ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ್ ಮಾತನಾಡಿ ಜಿಲ್ಲೆಯಲ್ಲಿ ಜೋಳದ ಕೊಯ್ಲು ಕಾರ್ಯಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು, ರೈತರಿಗೆ ಸೂಕ್ತ ಮಾಹಿತಿ ಹಾಗೂ ಬೆಂಬಲ ನೀಡಲಾಗುತ್ತಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದ್ದರೂ, ಅಕ್ಟೋಬರ್ನಲ್ಲಿ ಮಳೆಯ ಪ್ರಮಾಣ ಚೇತರಿಸಿಕೊಂಡು ಶೇಕಡಾ 90 ರಷ್ಟು ಪ್ರಗತಿ ಕಂಡಿದೆ ಎಂದರು.
ಜಂಟಿ ಬೆಳೆ ಸಮೀಕ್ಷೆ ಕಾರ್ಯದಲ್ಲಿ ಶೇಕಡಾ 99 ರಷ್ಟು ಸಾಧನೆಯಾಗಿದ್ದು, ಮಿಸ್ಮ್ಯಾಚ್ ಪ್ರಕರಣಗಳು ಹಾಗೂ ಬೆಳೆ ಹಾನಿ ಸಮೀಕ್ಷೆಯನ್ನು ನಿಗದಿತ ದಿನಾಂಕದೊಳಗೆ ಪೂರ್ಣಗೊಳಿಸಿ ಅರ್ಹ ರೈತರಿಗೆ ಪರಿಹಾರ ದೊರಕಿಸಲು ಕ್ರಮವಹಿಸಲಾಗುತ್ತಿದೆ. 'ಪಿಎಂ ಕಿಸಾನ್' ಯೋಜನೆಯಡಿ ಉಳಿದಿರುವ ಅರ್ಹ ರೈತರು ತಕ್ಷಣವೇ ಇ-ಕೆವೈಸಿ ಪೂರ್ಣಗೊಳಿಸುವಂತೆ ಮನವಿ ಮಾಡಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಉಪ ವಿಭಾಗಾಧಿಕಾರಿ ಗಂಗಪ್ಪ ಎಮ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರು, ಎಲ್ಲಾ ತಾಲೂಕಿನ ತಹಸೀಲ್ದಾರರು, ಕಾರ್ಯನಿರ್ವಾಹಣಾ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP