
ದೇವನಹಳ್ಳಿ, 09 ಅಕ್ಟೋಬರ್ (ಹಿ.ಸ.):
ಸರ್ಕಾರಿ ಗೋಮಾಳ ಜಮೀನುಗಳನ್ನು ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಂಡು ಒತ್ತುವರಿ ತೆರವುಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ.
ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೂಮಿಯ ಮೌಲ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಕಲಿ ದಾಖಲೆಗಳ ಸೃಷ್ಟಿ, ಮತ್ತೊಬ್ಬರ ಹೆಸರಿನಲ್ಲಿ ಅರ್ಜಿ ಸಲ್ಲಿಕೆ ಹಾಗೂ ಅಕ್ರಮವಾಗಿ ಖಾತೆ ಬದಲಾವಣೆ ಮಾಡುತ್ತಿರುವ ಆರೋಪಗಳ ಕುರಿತು ಪ್ರತಿಕ್ರಿಯಿಸಿದರು.
ನಕಲಿ ಭೂದಾಖಲೆಗಳ ಸೃಷ್ಟಿ, ಮತ್ತೊಬ್ಬರ ಹೆಸರಿನಲ್ಲಿ ವಂಚನೆ ಹಾಗೂ ಅಕ್ರಮ ಖಾತೆ ಬದಲಾವಣೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ಗಳೊಂದಿಗೆ ಚರ್ಚಿಸಲಾಗಿದೆ. ತಂತ್ರಜ್ಞಾನದ ನೆರವಿನಿಂದ ಇಂತಹ ಅಕ್ರಮಗಳನ್ನು ತಡೆಯಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಬಾಕಿ ಇರುವ ಅನುಮಾನಾಸ್ಪದ ಪ್ರಕರಣಗಳನ್ನು ಪರಿಶೀಲಿಸಿ, ಅಕ್ರಮ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಬಿಲ್ಡರ್ಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳು ಸರ್ಕಾರಿ ಗೋಮಾಳ ಜಮೀನುಗಳನ್ನು ಒತ್ತುವರಿ ಮಾಡಿಕೊಂಡಿರುವ ಕುರಿತು ದೂರುಗಳು ಕೇಳಿಬಂದಿವೆ.
ಬೆಂಗಳೂರು ಸುತ್ತಮುತ್ತ ಮಾತ್ರವಲ್ಲದೆ ತುಮಕೂರು, ಮೈಸೂರು ಹಾಗೂ ಬೆಳಗಾವಿಯಂತಹ ಬೆಳೆಯುತ್ತಿರುವ ನಗರ ಪ್ರದೇಶಗಳಲ್ಲಿಯೂ ಇಂತಹ ಸಮಸ್ಯೆಗಳಿವೆ ಎಂದು ಹೇಳಿದರು.
ಸರ್ಕಾರಿ ಜಮೀನುಗಳನ್ನು ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ನಿಯಮಾನುಸಾರ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ.
ಸರ್ಕಾರಿ ಜಮೀನನ್ನು ಅಕ್ರಮವಾಗಿ ಬಿಟ್ಟುಕೊಡುವ ಅಥವಾ ಒತ್ತುವರಿಗೆ ಸಹಕರಿಸುವ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಗರ್ ಹುಕುಂ ಜಮೀನುಗಳಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿಯಲ್ಲಿನ ಸಮಸ್ಯೆಗಳ ಬಗ್ಗೆಯೂ ಪ್ರಸ್ತಾಪಿಸಿದ ಅವರು, 18 ಕಿಲೋಮೀಟರ್ ವ್ಯಾಪ್ತಿಯ ನಿಯಮ ಜಾರಿಗೆ ಬರುವುದಕ್ಕೂ ಮುನ್ನ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಗಣಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಬಗರ್ ಹುಕುಂ ಜಮೀನುಗಳಿಗೆ ಸಂಬಂಧಿಸಿದ ನಮೂನೆ 52 ಮತ್ತು 53ರ ಅರ್ಜಿಗಳು ಸೇರಿದಂತೆ ಬಾಕಿ ಇರುವ ಪ್ರಕರಣಗಳನ್ನು ಪರಿಶೀಲಿಸಲಾಗುವುದು.
ನ್ಯಾಯಾಲಯದ ನಿರ್ದೇಶನಗಳಿದ್ದರೆ ಅವುಗಳನ್ನು ಪರಿಗಣಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಪೋಡಿ ಮತ್ತು ದುರಸ್ತಿ ಕಾರ್ಯಗಳಲ್ಲಿ ವಿಳಂಬವಾಗದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಭೂಸುಧಾರಣಾ ಕಾಯ್ದೆಯ 79ಎ ಮತ್ತು 79ಬಿ ಕಲಂಗಳಿಗೆ ಸಂಬಂಧಿಸಿದ ತಿದ್ದುಪಡಿ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಯಾವ ರೀತಿಯ ಬದಲಾವಣೆಗಳನ್ನು ತರಬೇಕು ಎಂಬುದರ ಕುರಿತು ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R