
ಕಲಬುರಗಿ, 01 ನವೆಂಬರ್ (ಹಿ.ಸ.):
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಯಾದಗಿರಿಯಿಂದ ಕಲಬುರಗಿ ನಗರದತ್ತ ನಾಲ್ವರು ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಕಾರಿನಲ್ಲಿ ತಾಂತ್ರಿಕ ದೋಷದ ಕಾರಣ ಹೊಗೆ ಕಾಣಿಸಿಕೊಂಡಿದೆ. ಕಾರಿನ ಹಿಂಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ಕೂಡಲೇ ಸಮಯಪ್ರಜ್ಞೆ ಮೆರೆದು ಕಾರನ್ನು ನಿಲ್ಲಿಸಿದ್ದಾರೆ.
ಇದರಿಂದ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ನೋಡನೋಡುತ್ತಿದ್ದಂತೆಯೇ ಕಾರಿಗೆ ಬೆಂಕಿ ವ್ಯಾಪಿಸಿದ್ದು, ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.
ಬೆಂಕಿಯ ಕೆನ್ನಾಲಿಗೆಗೆ ಕಾರು ಸುಟ್ಟು ಕರಕಲಾಗಿದೆ.ಘಟನೆಯ ಮಾಹಿತಿ ತಿಳಿದು ವಾಡಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ತಾಂತ್ರಿಕ ದೋಷವೇ ಕಾರಣ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R