
ಬಾಗಲಕೋಟೆ, 01 ನವೆಂಬರ್ (ಹಿ.ಸ.)
ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಮಾತೃಭಾಷೆಯಾದ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಎಲ್ಲ ಹಂತಗಳಲ್ಲೂ ಕನ್ನಡದ ಅನುಷ್ಠಾನಕ್ಕೆ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.
ನಗರದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ, ಕನ್ನಡಾಂಬೆಯ ನಾಡಹಬ್ಬದ ಸಂಭ್ರಮದಲ್ಲಿ ಜಿಲ್ಲೆಯ ಜನತೆಗೆ ರಾಜ್ಯೋತ್ಸವದ ಸಂದೇಶ ನೀಡಿದ ಅವರು, ಕರ್ನಾಟಕದ ವೈಭವಯುತ ಇತಿಹಾಸ, ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆ ಹಾಗೂ ಸರ್ಕಾರದ ವಿವಿಧ ಅಭಿವೃದ್ಧಿ ಮತ್ತು ಜನಕಲ್ಯಾಣ ಯೋಜನೆಗಳ ಕುರಿತು ವಿವರಿಸಿದರು.
ಮೌರ್ಯರು, ಕದಂಬರು, ಗಂಗರು, ಹೊಯ್ಸಳರು, ವಿಜಯನಗರದ ಅರಸರು, ಚಾಲುಕ್ಯರು, ರಾಷ್ಟ್ರಕೂಟರು ಹಾಗೂ ಮೈಸೂರಿನ ಒಡೆಯರು ಕನ್ನಡ ನಾಡಿನ ಇತಿಹಾಸ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಕನಕದಾಸರು, ಪುರಂದರದಾಸರು, ಸರ್ವಜ್ಞ, ಶಿಶುನಾಳ ಷರೀಫರು ಹಾಗೂ ಜಗಜ್ಯೋತಿ ಬಸವಣ್ಣನಂತಹ ಮಹನೀಯರು ಈ ನೆಲದಲ್ಲಿ ಬದುಕಿ, ಸಮಾಜಕ್ಕೆ ಸಮಾನತೆ, ಮಾನವೀಯತೆ ಮತ್ತು ಸೌಹಾರ್ದತೆಯ ಸಂದೇಶ ನೀಡಿದ್ದಾರೆ. ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ನೆಲ ಸರ್ವಧರ್ಮ ಸಮನ್ವಯತೆ ಹಾಗೂ ಸಹಬಾಳ್ವೆಯ ಪರಂಪರೆಗೆ ಹೆಸರುವಾಸಿಯಾಗಿದೆ ಎಂದು ಹೇಳಿದರು.
229 ಎಕರೆ ಪ್ರದೇಶದಲ್ಲಿ ಬೃಹತ್ ಮಾರುಕಟ್ಟೆ ನಿರ್ಮಾಣ
ಬಾಗಲಕೋಟೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಜಿಲ್ಲೆಯ ವ್ಯಾಪಾರಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸುವ ನಿಟ್ಟಿನಲ್ಲಿ ಮಹತ್ವದ ಯೋಜನೆ ರೂಪಿಸಲಾಗಿದೆ. ಬಾಗಲಕೋಟೆ ಯುನಿಟ್-3ರಲ್ಲಿ 229 ಎಕರೆ ವಿಶಾಲ ಪ್ರದೇಶದಲ್ಲಿ ಅತ್ಯಾಧುನಿಕ ಕೇಂದ್ರೀಕೃತ ಬೃಹತ್ ಮಾರುಕಟ್ಟೆ ಹಾಗೂ ವಾಣಿಜ್ಯ ಕೇಂದ್ರ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಈ ಯೋಜನೆಗೆ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಅನುಮತಿ ದೊರೆತಿದ್ದು, ಮುಂದಿನ ಹಂತಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಈ ಯೋಜನೆ ಜಾರಿಯಾದಲ್ಲಿ ಬಾಗಲಕೋಟೆ ಜಿಲ್ಲೆಯ ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ದೊರೆಯಲಿದ್ದು, ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ಹಾಗೂ ಆರ್ಥಿಕ ಕೇಂದ್ರವಾಗಿ ಬಾಗಲಕೋಟೆಯ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಹಳೆಯ ನಗರದ ಕಟ್ಟಡಗಳ ಪುನರ್ವಸತಿಗೆ ಕ್ರಮ
ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ರಸ್ತೆ ಸಂಪರ್ಕ ಕಳೆದುಕೊಳ್ಳುವ ಸಾಧ್ಯತೆ ಇರುವ ಬಾಗಲಕೋಟೆ ಹಳೆಯ ನಗರದ 1, 2, 3, 6 ಮತ್ತು 7ನೇ ವಾರ್ಡ್ಗಳಲ್ಲಿನ ಕಟ್ಟಡಗಳ ಸ್ಥಳಾಂತರ ಹಾಗೂ ಪುನರ್ವಸತಿ ಕಾರ್ಯಕ್ಕೂ ಸರ್ಕಾರ ಬದ್ಧವಾಗಿದೆ. ಒಟ್ಟು 1,057 ಕಟ್ಟಡಗಳ ಭೂಸ್ವಾಧೀನಕ್ಕಾಗಿ ಅಂದಾಜು 52.16 ಕೋಟಿ ರೂ. ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ. ಈಗಾಗಲೇ 11(1) ಅಧಿಸೂಚನೆ ಹಾಗೂ ಜಂಟಿ ಮಾಪನ ಕಾರ್ಯ ಪೂರ್ಣಗೊಂಡಿದ್ದು, ಪರಿಹಾರ ಮತ್ತು ಪುನರ್ವಸತಿ ಪ್ರಕ್ರಿಯೆ ಮುಂದುವರಿದಿದೆ ಎಂದು ವಿವರಿಸಿದರು.
ರೈತರ ನೆರವಿಗೆ 420.66 ಕೋಟಿ ರೂ. ಪ್ರಸ್ತಾವನೆ
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಎಲ್ಲ 10 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಒಟ್ಟು 3.06 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಪ್ರದೇಶದ ಬೆಳೆ ಹಾನಿಯ ಮೆಮೋರಾಂಡಂ ಸಲ್ಲಿಸಲಾಗಿದೆ. ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಅಡಿಯಲ್ಲಿ 420.66 ಕೋಟಿ ರೂ.ಗಳ ನೆರವಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಎಫ್ಆರ್ಯುಐಟಿಎಸ್ ತಂತ್ರಾಂಶದಲ್ಲಿ ನೋಂದಣಿಯಾದ ರೈತರಿಗೆ ಮೊದಲನೇ ಕಂತಿನ ಇನ್ಪುಟ್ ಸಬ್ಸಿಡಿಯಾಗಿ 2,500 ರೂ.ಗಳನ್ನು ಡಿಬಿಟಿ ಮೂಲಕ ಪಾವತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಮುಖ್ಯಮಂತ್ರಿ ನೇಗಿಲ ಯೋಗಿ ಯೋಜನೆಯಡಿ ಮೂರು ಎಕರೆ ಅಥವಾ ಅದಕ್ಕಿಂತ ಕಡಿಮೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರ್ಷದಲ್ಲಿ ಗರಿಷ್ಠ ಮೂರು ಕೃಷಿ ಚಟುವಟಿಕೆಗಳಿಗೆ ತಲಾ 4,500 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ಮತ್ತು ಬೀಳಗಿ ತಾಲೂಕುಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಯುವಕರಿಗೆ ಉದ್ಯೋಗ ಮತ್ತು ಕೌಶಲ್ಯಕ್ಕೆ ಆದ್ಯತೆ
ಯುವ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿದ 28,066 ಅಭ್ಯರ್ಥಿಗಳ ಪೈಕಿ 24,452 ಯುವಕರು ಪ್ರಯೋಜನ ಪಡೆಯುತ್ತಿದ್ದಾರೆ. ಉದ್ಯೋಗನಿಧಿ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯಲ್ಲಿ 4,550 ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.
ಯುವಕರಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಸಾಮಾಜಿಕ ಸಾಮರಸ್ಯ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಲು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಒಟ್ಟು 312 ಭಾರತ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಈಗಾಗಲೇ 50 ಸಾವಿರಕ್ಕೂ ಹೆಚ್ಚು ಸದಸ್ಯರು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ ಎಂದರು.
ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ
ಪ್ರಜಾಸೇವಾ ಆಂದೋಲನದಡಿ ಜಿಲ್ಲೆಯಲ್ಲಿ ಈವರೆಗೆ ಸ್ವೀಕರಿಸಿದ 6,069 ಅರ್ಜಿಗಳ ಪೈಕಿ 5,238 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ. ಇನ್ನೂ 671 ಅರ್ಜಿಗಳು ಬಾಕಿ ಉಳಿದಿದ್ದು, ಅವುಗಳನ್ನೂ ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಶಕ್ತಿ ಯೋಜನೆಯಡಿ ಜಿಲ್ಲೆಯ ಮಹಿಳೆಯರು ಈವರೆಗೆ 23.73 ಕೋಟಿ ಉಚಿತ ಪ್ರಯಾಣ ಕೈಗೊಂಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಒಟ್ಟು 10 ಕೆ.ಜಿ. ಆಹಾರ ಧಾನ್ಯ ಉಚಿತವಾಗಿ ವಿತರಿಸಲಾಗುತ್ತಿದೆ.
ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯ 4.43 ಲಕ್ಷ ಗೃಹಬಳಕೆ ವಿದ್ಯುತ್ ಸಂಪರ್ಕಗಳ ಪೈಕಿ 4.36 ಲಕ್ಷ ಜನ ನೋಂದಣಿ ಮಾಡಿಕೊಂಡಿದ್ದು, 2023ರ ಆಗಸ್ಟ್ನಿಂದ 2026ರ ಸೆಪ್ಟೆಂಬರ್ವರೆಗೆ ಯೋಜನೆಗೆ 598.80 ಕೋಟಿ ರೂ.ಗಳ ಅನುದಾನ ಅಂದಾಜಿಸಲಾಗಿದೆ ಎಂದು ತಿಳಿಸಿದರು.
ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ಆರ್ಥಿಕ ನೆರವು ನೀಡಲಾಗುತ್ತಿದ್ದು, ಈ ಹಣವನ್ನು ಮಹಿಳೆಯರು ಮಕ್ಕಳ ಶಿಕ್ಷಣ ಹಾಗೂ ಕುಟುಂಬದ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪುತ್ತಿರುವುದಕ್ಕೆ ಇದು ಪ್ರಮುಖ ಉದಾಹರಣೆಯಾಗಿದೆ ಎಂದರು.
ಮೂಲಸೌಕರ್ಯ ಅಭಿವೃದ್ಧಿಗೆ 300 ಕೋಟಿ ರೂ.
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 2025-26ನೇ ಸಾಲಿನಲ್ಲಿ ಬಾಗಲಕೋಟೆ ಜಿಲ್ಲೆಗೆ 300 ಕೋಟಿ ರೂ. ಅನುದಾನ ಅನುಮೋದನೆಯಾಗಿದ್ದು, ಒಟ್ಟು 277 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
2026-27ನೇ ಸಾಲಿನಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೈರ್ಮಲ್ಯ, ಕೈಗಾರಿಕೆ, ಕೃಷಿ ಹಾಗೂ ಸೇವಾ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.
ಹುನಗುಂದ ತಾಲೂಕಿನ ಅಮರಾವತಿ ಗ್ರಾಮದಲ್ಲಿ 147 ಕೋಟಿ ರೂ. ವೆಚ್ಚದ 220/110 ಕೆ.ವಿ. ವಿದ್ಯುತ್ ಉಪಕೇಂದ್ರ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಇದರಿಂದ ಮರೋಳ, ಕೊಪ್ಪಳ ಹಾಗೂ ನಂದವಾಡಗಿ ಏತ ನೀರಾವರಿ ಯೋಜನೆಗಳ ಜೊತೆಗೆ ವಾಣಿಜ್ಯ ಮತ್ತು ಕೃಷಿ ಕ್ಷೇತ್ರಕ್ಕೂ ಅನುಕೂಲವಾಗಲಿದೆ ಎಂದು ವಿವರಿಸಿದರು.
19,655 ಫಲಾನುಭವಿಗಳಿಗೆ ನಿವೇಶನ
ಬಡ ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಯೋಜನೆಯಡಿ ಜಿಲ್ಲೆಯ 9 ತಾಲೂಕುಗಳಲ್ಲಿ 19,655 ಫಲಾನುಭವಿಗಳಿಗೆ 1,072 ಎಕರೆ ಪ್ರದೇಶವನ್ನು ಗುರುತಿಸಿ ಕಾಯ್ದಿರಿಸಲಾಗಿದೆ.
ಭೂ ಗ್ಯಾರಂಟಿ ಯೋಜನೆಯಡಿ ಗ್ರಾಮೀಣ ಭಾಗದ ಆಸ್ತಿಗಳಿಗೆ 11ಎ ಮತ್ತು 11ಬಿ ಇ-ಸ್ವತ್ತು ದಾಖಲೆಗಳನ್ನು ವಿತರಿಸುವ ಪ್ರಕ್ರಿಯೆ ನವೆಂಬರ್ 2ರಿಂದ ಆರಂಭವಾಗಲಿದ್ದು, ಸುಮಾರು 2.72 ಲಕ್ಷ ಆಸ್ತಿ ಮಾಲೀಕರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದರು.
ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವಿನ ಅಂತರ ಕಡಿಮೆ ಮಾಡುವ ಜೊತೆಗೆ ವಿದ್ಯಾರ್ಥಿಗಳಿಗೆ ಕೃಷಿ, ರೈತರ ಬದುಕು, ಗ್ರಾಮೀಣ ಸಂಸ್ಕೃತಿ ಮತ್ತು ಪರಂಪರೆಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಗ್ರಾಮಾನುಭವ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದರು.
ಬಾಗಲಕೋಟೆ ಜಿಲ್ಲೆಯ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
ಪ್ರಸಕ್ತ ಸಾಲಿನ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಕೀರ್ಣ ಕ್ಷೇತ್ರದಲ್ಲಿ ಇಳಕಲ್ಲ ತಾಲೂಕಿನ ಕೋಡಿಹಾಳ ಗ್ರಾಮದ ರುಕ್ಷ್ಮೀಣಿಬಾಯಿ ನಾಗಪ್ಪ ವಾಷ್ಠರ ಹಾಗೂ ಸಮಾಜಸೇವೆ ಕ್ಷೇತ್ರದಲ್ಲಿ ಬಾಗಲಕೋಟೆ ತಾಲೂಕಿನ ಶಿರೂರ ಪಟ್ಟಣದ ಗುರಮ್ಮ ಹಂಪಯ್ಯ ಸಂಕಿನಮಠ ಆಯ್ಕೆಯಾಗಿರುವುದು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ವಿಜಯಾನಂದ ಕಾಶಪ್ಪನವರ ಹರ್ಷ ವ್ಯಕ್ತಪಡಿಸಿದರು.
ಇಳಕಲ್ಲಿನ ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನಮಠದ ಲಿಂ. ಡಾ. ಮಹಾಂತ ಸ್ವಾಮೀಜಿಯವರ ನೇತೃತ್ವದಲ್ಲಿ ಆರಂಭಗೊಂಡ ವ್ಯಸನಮುಕ್ತ ಸಮಾಜ ನಿರ್ಮಾಣದ ‘ಮಹಾಂತ ಜೋಳಿಗೆ’ ಅಭಿಯಾನದ ಸಂದೇಶ ಸಾರುವ ಸ್ತಬ್ಧಚಿತ್ರ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನಗೊಂಡು, ಬೆಳಗಾವಿ ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವುದನ್ನು ಸಚಿವರು ಸ್ಮರಿಸಿದರು.
ಕನ್ನಡದ ಅಸ್ಮಿತೆ ಉಳಿಸುವುದು ಎಲ್ಲರ ಹೊಣೆ
ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡುವ ಮೂಲಕ ಎಲ್ಲ ಹಂತಗಳಲ್ಲೂ ಕನ್ನಡದ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ. ಜಿಲ್ಲೆಯ ಜನರು ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಆರಾಧಿಸುತ್ತಿದ್ದಾರೆ. ಕನ್ನಡದ ಅಸ್ಮಿತೆಗೆ ಯಾವುದೇ ಧಕ್ಕೆಯಾಗದಂತೆ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ ಎಂದು ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.
ಕನ್ನಡ ಕೇವಲ ಸಂವಹನದ ಭಾಷೆಯಲ್ಲ; ಅದು ನಮ್ಮ ನಾಡಿನ ಇತಿಹಾಸ, ಸಂಸ್ಕೃತಿ, ಪರಂಪರೆ ಮತ್ತು ಬದುಕಿನ ಅವಿಭಾಜ್ಯ ಭಾಗವಾಗಿದೆ. ಯುವ ಪೀಳಿಗೆಯಲ್ಲೂ ಕನ್ನಡದ ಬಗ್ಗೆ ಅಭಿಮಾನ ಮತ್ತು ಜವಾಬ್ದಾರಿ ಬೆಳೆಸುವ ಅಗತ್ಯವಿದೆ. ಮನೆ, ಶಾಲೆ, ಕಚೇರಿ ಹಾಗೂ ಸಾರ್ವಜನಿಕ ಜೀವನದಲ್ಲಿ ಕನ್ನಡ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಕರೆ ನೀಡಿದರು.
ಕೊನೆಯಲ್ಲಿ “ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ, ಜೈ ಹಿಂದ್, ಜೈ ಕರ್ನಾಟಕ” ಎಂಬ ಘೋಷಣೆಯೊಂದಿಗೆ ಜಿಲ್ಲೆಯ ಸಮಸ್ತ ಜನತೆಗೆ 71ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande