ಕನ್ನಡ ಭಾಷಾಭಿಮಾನ ನಿತ್ಯದ ಉಸಿರಾಗಲಿ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕರೆ
ದಾವಣಗೆರೆ, 01 ನವೆಂಬರ್ (ಹಿ.ಸ.): ಕನ್ನಡ ಭಾಷಾಭಿಮಾನ ಕೇವಲ ನವೆಂಬರ್ ತಿಂಗಳ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬರ ನಿತ್ಯದ ಉಸಿರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕರೆ ನೀಡಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ 71ನೇ ಕರ್ನಾಟಕ ರಾಜ್ಯೋತ್ಸ
ದಾವಣಗೆರೆ ರಾಜ್ಯೋತ್ಸವ ಸಮಾರಂಭ


ದಾವಣಗೆರೆ, 01 ನವೆಂಬರ್ (ಹಿ.ಸ.):

ಕನ್ನಡ ಭಾಷಾಭಿಮಾನ ಕೇವಲ ನವೆಂಬರ್ ತಿಂಗಳ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬರ ನಿತ್ಯದ ಉಸಿರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕರೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

1956ರ ನವೆಂಬರ್ 1ರಂದು ಮುಂಬೈ, ಮದ್ರಾಸ್, ಹೈದರಾಬಾದ್ ಹಾಗೂ ಮೈಸೂರು ಪ್ರಾಂತ್ಯಗಳಲ್ಲಿ ಹಂಚಿಹೋಗಿದ್ದ ಕನ್ನಡ ಭಾಷಿಕ ಪ್ರದೇಶಗಳು ಒಂದಾಗಿ ಕರ್ನಾಟಕ ಏಕೀಕರಣಗೊಂಡ ಐತಿಹಾಸಿಕ ಕ್ಷಣವನ್ನು ಸ್ಮರಿಸಿದರು. ಈ ಏಕೀಕರಣಕ್ಕಾಗಿ ಹೋರಾಡಿದ ಆಲೂರು ವೆಂಕಟರಾಯರು, ಕೆಂಗಲ್ ಹನುಮಂತಯ್ಯ, ಎಸ್. ನಿಜಲಿಂಗಪ್ಪ ಸೇರಿದಂತೆ ಹಲವು ಮಹನೀಯರ ಕೊಡುಗೆಯನ್ನು ಸ್ಮರಿಸಿದರು.

ನಮ್ಮ ನಾಡು ಎರಡು ಸಾವಿರ ವರ್ಷಗಳ ಸಾಹಿತ್ಯಿಕ, ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಈ ಶ್ರೀಮಂತ ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ ಎಂದರು.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೇಯದೊಂದಿಗೆ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ಸಾಮಾಜಿಕ ಮತ್ತು ಆರ್ಥಿಕ ಬಲ ತುಂಬುತ್ತಿವೆ. ಪ್ರಸ್ತುತ ಬರಗಾಲದ ಸಂದರ್ಭದಲ್ಲಿಯೂ ರೈತರ ನೆರವಿಗೆ ರಾಜ್ಯ ಸರ್ಕಾರ ಸದಾ ಸಿದ್ಧವಿದೆ ಎಂದು ಭರವಸೆ ನೀಡಿದರು.

ಕನ್ನಡ ನಾಮಫಲಕ ನಿಯಮ ಉಲ್ಲಂಘನೆಗೆ ದಂಡ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022ರ ಪ್ರಕಾರ ಜಿಲ್ಲೆಯಲ್ಲಿ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯ ನಿಯಮ ಪಾಲಿಸದ 32 ಸಂಸ್ಥೆಗಳಿಂದ 48 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ. ಈ ಮೂಲಕ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕೈಗಾರಿಕೆಗಳ ವಿಕೇಂದ್ರೀಕರಣದ ಮೂಲಕ ದಾವಣಗೆರೆಗೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸೇರಿದಂತೆ ವಿವಿಧ ಉದ್ಯಮಗಳನ್ನು ತಂದು ಸ್ಥಳೀಯ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದರು.

ಡಾ. ಎಸ್.ಎಂ. ಎಲಿಗೆ ಅಭಿನಂದನೆ

ಸಮಾಜ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ದಾವಣಗೆರೆಯ ಹೆಸರಾಂತ ವೈದ್ಯ ಡಾ. ಎಸ್.ಎಂ. ಎಲಿ ಅವರಿಗೆ ಸಚಿವರು ಜಿಲ್ಲೆಯ ನಾಗರಿಕರ ಪರವಾಗಿ ಹಾಗೂ ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸಿದರು.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande