
ಮೈಸೂರು, 01 ನವೆಂಬರ್ (ಹಿ.ಸ.):
ಕನ್ನಡವನ್ನು ಕೇವಲ ಭಾವನೆಯ ಭಾಷೆಯನ್ನಾಗಿ ನೋಡದೆ ಜ್ಞಾನ, ಉದ್ಯೋಗ, ವಿಜ್ಞಾನ ಮತ್ತು ಆಡಳಿತದ ಭಾಷೆಯನ್ನಾಗಿ ಬೆಳೆಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು.
ಮೈಸೂರಿನ ಐತಿಹಾಸಿಕ ಓವಲ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕನ್ನಡದಲ್ಲಿ ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಕಾನೂನು ಮತ್ತು ಆಡಳಿತಕ್ಕೆ ಸಂಬಂಧಿಸಿದ ಗುಣಮಟ್ಟದ ಮಾಹಿತಿ ಲಭ್ಯವಾಗಬೇಕು. ಕನ್ನಡದಲ್ಲಿ ಡಿಜಿಟಲ್ ಪುಸ್ತಕಗಳು, ಶೈಕ್ಷಣಿಕ ವಿಡಿಯೊಗಳು, ಅಂತರ್ಜಾಲ ಪಾಠಗಳು ಹಾಗೂ ತಂತ್ರಜ್ಞಾನ ಆಧಾರಿತ ಕಲಿಕಾ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸಬೇಕು. ಯುವಜನರು ಕನ್ನಡ ಭಾಷೆಯಲ್ಲಿ ಹೊಸ ಆವಿಷ್ಕಾರಗಳನ್ನು ಕೈಗೊಳ್ಳುವ ಮೂಲಕ ಉದ್ಯಮಶೀಲತೆ, ಸಂಶೋಧನೆ ಮತ್ತು ಸೃಜನಶೀಲತೆಗೆ ಹೊಸ ದಾರಿಗಳನ್ನು ತೆರೆಯಬೇಕು ಎಂದರು.
ಕನ್ನಡ ನಾಡಿನ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವುದು, ಭಾಷೆಯ ಗೌರವ ಹೆಚ್ಚಿಸುವುದು ಹಾಗೂ ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತ ಪರಂಪರೆಯನ್ನು ಪರಿಚಯಿಸುವುದು ಎಲ್ಲರ ಕರ್ತವ್ಯವಾಗಿದೆ. ನವೆಂಬರ್ 1 ಕನ್ನಡಿಗರ ಪಾಲಿಗೆ ಕೇವಲ ಹಬ್ಬವಲ್ಲ. ಇದು ಭಾಷೆಯ ಮೇಲಿನ ಅಭಿಮಾನ ವ್ಯಕ್ತಪಡಿಸುವ ಮತ್ತು ನಾಡಿನ ಇತಿಹಾಸವನ್ನು ಸ್ಮರಿಸುವ ದಿನವಾಗಿದೆ ಎಂದು ಹೇಳಿದರು.
ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸ ಹಾಗೂ ಶ್ರೀಮಂತ ಸಾಹಿತ್ಯ ಪರಂಪರೆಯನ್ನು ಹೊಂದಿದೆ. ಪಂಪ, ರನ್ನ, ಪೊನ್ನ, ಬಸವಣ್ಣ, ಅಕ್ಕಮಹಾದೇವಿ, ಸರ್ವಜ್ಞ, ಕನಕದಾಸ, ಪುರಂದರದಾಸ, ಕುವೆಂಪು, ದ.ರಾ. ಬೇಂದ್ರೆ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಹಾಗೂ ಶಿವರಾಮ ಕಾರಂತ ಸೇರಿದಂತೆ ಅನೇಕ ಮಹನೀಯರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಸ್ಮರಿಸಿದರು.
ವಚನ ಸಾಹಿತ್ಯವು ಸಮಾನತೆ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶ ಸಾರಿದರೆ, ದಾಸ ಸಾಹಿತ್ಯವು ಭಕ್ತಿ, ನೈತಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸಿದೆ. ನವೋದಯ, ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ ಚಳವಳಿಗಳು ಕನ್ನಡದ ಚಿಂತನಾ ಲೋಕವನ್ನು ವಿಸ್ತರಿಸಿವೆ ಎಂದರು.
ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ನಮ್ಮ ಸಾಹಿತ್ಯ ಪರಂಪರೆಯ ಹೆಗ್ಗಳಿಕೆಯಾಗಿದೆ. ಆದರೆ ಭಾಷೆಯ ಶ್ರೀಮಂತಿಕೆ ಕೇವಲ ಇತಿಹಾಸದಲ್ಲಿರುವುದಿಲ್ಲ. ದೈನಂದಿನ ಬದುಕಿನಲ್ಲಿ ಭಾಷೆಯನ್ನು ಎಷ್ಟು ಪ್ರೀತಿಯಿಂದ ಬಳಸುತ್ತೇವೆ, ಮಕ್ಕಳಿಗೆ ಎಷ್ಟು ಪರಿಣಾಮಕಾರಿಯಾಗಿ ಕಲಿಸುತ್ತೇವೆ ಮತ್ತು ಬೆಳೆಸುತ್ತೇವೆ ಎಂಬುದರಲ್ಲಿದೆ ಎಂದು ಅಭಿಪ್ರಾಯಪಟ್ಟರು.
ಮನೆಯಲ್ಲಿಯೇ ಮಕ್ಕಳೊಂದಿಗೆ ಕನ್ನಡದಲ್ಲಿ ಮಾತನಾಡುವುದು, ಕನ್ನಡ ಪುಸ್ತಕಗಳನ್ನು ಓದುವುದು, ಕನ್ನಡ ಸಾಹಿತ್ಯ ಮತ್ತು ಕಲೆಗಳನ್ನು ಪ್ರೋತ್ಸಾಹಿಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಇತರ ಭಾಷೆಗಳನ್ನು ಕಲಿಯುವುದರಿಂದ ಜ್ಞಾನ ವಿಸ್ತಾರವಾಗುತ್ತದೆ. ಆದರೆ ಅದಕ್ಕಾಗಿ ಮಾತೃಭಾಷೆಯನ್ನು ಕಡೆಗಣಿಸಬೇಕಾಗಿಲ್ಲ ಎಂದು ತಿಳಿಸಿದರು.
ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣಪತ್ರ
ಇದೇ ಸಂದರ್ಭದಲ್ಲಿ ಮೈಸೂರು ಮಹಾನಗರ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ಜನನ ಮತ್ತು ಮರಣ ಪ್ರಮಾಣಪತ್ರಗಳನ್ನು ಅಂಚೆ ಮೂಲಕ ಮನೆ ಬಾಗಿಲಿಗೆ ತಲುಪಿಸುವ ಸೇವೆಗೆ ಚಾಲನೆ ನೀಡಲಾಯಿತು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳ ಸಾಧಕರನ್ನು ಹಾಗೂ ಕನ್ನಡ ವಿಷಯದಲ್ಲಿ ಹೆಚ್ಚಿನ ಅಂಕ ಗಳಿಸಿದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.