ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ; ಡಾ. ಪ್ರವೀಣ್ ಬಾಗೇವಾಡಿ
ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ; ಡಾ. ಪ್ರವೀಣ್ ಬಾಗೇವಾಡಿ
ಕೋಲಾರ ಜಿಲ್ಲಾ ಪಂಚಾಯಿತಿ ಕಛೇರಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪ್ರವೀಣ್ ಬಾಗೇವಾಡಿ ಭುವನೇಶ್ವರಿ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.


ಕೋಲಾರ, 01 ನವೆಂಬರ್ (ಹಿ.ಸ.):

ಕನ್ನಡ ನಾಡು-ನುಡಿ ಕೇವಲ ಒಂದು ಸಂಪರ್ಕ ಭಾಷೆಯಲ್ಲ, ಅದು ನಮ್ಮ ಸಂಸ್ಕೃತಿ, ಅಸ್ಮಿತೆ ಹಾಗೂ ಜೀವನದ ಪ್ರತಿ ಸ್ಪಂದನವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆಯ ಹಿರಿಮೆ, ಇತಿಹಾಸ ಹಾಗೂ ಮಹತ್ವವನ್ನು ಸ್ಮರಿಸಿದರು. ಭಾರತದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಕನ್ನಡವೂ ಒಂದಾಗಿದ್ದು, ದೇಶದಲ್ಲೇ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಭಾಷೆ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ಕನ್ನಡದ ಮಹಾನ್ ಸಾಹಿತಿಗಳು ಹಾಗೂ ಚಿಂತಕರ ಸಾಹಿತ್ಯಿಕ ಕೊಡುಗೆಗಳು ಭಾಷೆಯ ಶ್ರೀಮಂತಿಕೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಿವೆ ಎಂದು ಬಣ್ಣಿಸಿದರು.

ಜ್ಞಾನಾರ್ಜನೆ ಹಾಗೂ ವೃತ್ತಿಜೀವನದ ಅಗತ್ಯಗಳಿಗಾಗಿ ಇತರ ಭಾಷೆಗಳನ್ನು ಕಲಿಯುವುದರಲ್ಲಿ ತಪ್ಪಿಲ್ಲ. ಆದರೆ, ಪ್ರತಿಯೊಬ್ಬರೂ ತಮ್ಮ ನಾಡಿನ ಭಾಷೆಗೆ ಹೆಚ್ಚಿನ ಮಹತ್ವ ನೀಡಬೇಕು. ಕನ್ನಡದ ಬಗ್ಗೆ ಸ್ವಾಭಿಮಾನ ಬೆಳೆಸಿಕೊಂಡು, ದಿನನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುವ ಮೂಲಕ ಭಾಷೆಯ ಬೆಳವಣಿಗೆಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದರು.

ನಾಡಿನ ಅಭಿವೃದ್ಧಿಯೊಂದಿಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಹಾಗೂ ಮುಂದಿನ ಪೀಳಿಗೆಗೆ ತಲುಪಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು ಗೌರವಿಸಿ, ಭಾಷೆಯ ಬಳಕೆಯನ್ನು ಉತ್ತೇಜಿಸುವ ಮೂಲಕ ಕನ್ನಡದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯೋಣ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಟಿ.ಕೆ. ರಮೇಶ್, ಯೋಜನಾ ನಿರ್ದೇಶಕರಾದ ಮಂಜುನಾಥ್ ಸ್ವಾಮಿ ಸೇರಿದಂತೆ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande