
ಬೆಂಗಳೂರು, 10 ನವೆಂಬರ್ (ಹಿ.ಸ.):
ರಾಜ್ಯದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸಿಹಿಸುದ್ದಿ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಉಳಿಸಿಕೊಂಡಿರುವ ದಂಡದ ಮೊತ್ತವನ್ನು ಶೇ.50ರಷ್ಟು ರಿಯಾಯಿತಿಯೊಂದಿಗೆ ಪಾವತಿಸಲು ಸರ್ಕಾರ ಅವಕಾಶ ಕಲ್ಪಿಸಿದೆ.
ಈ ರಿಯಾಯಿತಿ ಸೌಲಭ್ಯವು ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಅನ್ವಯವಾಗಲಿದೆ.
ರಾಜ್ಯಾದ್ಯಂತ ಸಂಚಾರ ನಿಯಮ ಉಲ್ಲಂಘನೆಗಾಗಿ ವಿಧಿಸಲಾಗಿರುವ ಬಾಕಿ ದಂಡದ ಮೊತ್ತವನ್ನು ಕಡಿಮೆ ಅವಧಿಯಲ್ಲಿ ಇತ್ಯರ್ಥಪಡಿಸುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಈ ಹಿಂದೆ ನೀಡಲಾಗಿದ್ದ ಶೇ.50ರಷ್ಟು ರಿಯಾಯಿತಿ ಸೌಲಭ್ಯವನ್ನು ಮತ್ತೊಮ್ಮೆ ಜಾರಿಗೊಳಿಸುವಂತೆ ಸಾರ್ವಜನಿಕರಿಂದ ಮನವಿ ಸಲ್ಲಿಕೆಯಾಗಿತ್ತು. ಈ ಮನವಿಯನ್ನು ಪರಿಗಣಿಸಿರುವ ಸರ್ಕಾರ, ಮತ್ತೆ ರಿಯಾಯಿತಿ ನೀಡುವಂತೆ ಆದೇಶ ಹೊರಡಿಸಿದೆ.
ಸರ್ಕಾರದ ಈ ನಿರ್ಧಾರದಿಂದ ದೀರ್ಘಕಾಲದಿಂದ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಅನುಕೂಲವಾಗಲಿದೆ.
ನಿಗದಿತ ಅವಧಿಯಲ್ಲಿ ಬಾಕಿ ದಂಡದ ಶೇ.50ರಷ್ಟು ಮೊತ್ತವನ್ನು ಪಾವತಿಸುವ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ಹೀಗಾಗಿ, ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಲಭ್ಯವಿರುವ ಈ ರಿಯಾಯಿತಿ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ.
ಕೊನೆಯ ಕ್ಷಣದವರೆಗೆ ಕಾಯದೆ ನಿಗದಿತ ಅವಧಿಯೊಳಗೆ ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ವಾಹನ ಸವಾರರಿಗೆ ಸೂಚಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R