
ಬೆಳಗಾವಿ, 10 ನವೆಂಬರ್ (ಹಿ.ಸ.):
ಮಾರ್ಚ್ ತಿಂಗಳಲ್ಲಿ ಬೆಳಗಾವಿ ಜಿಲ್ಲೆಯ ಮಾರಿಹಾಳ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದ ಸಿದ್ಧತೆಗಳ ಕುರಿತು ಕ್ಷೇತ್ರದ ಶಾಸಕಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಜಾತ್ರಾ ಸಮಿತಿ, ಗ್ರಾಮದ ಹಿರಿಯರು ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಿದರು.
ಮಂಗಳವಾರ ಮಾರಿಹಾಳ ಗ್ರಾಮಕ್ಕೆ ಭೇಟಿ ನೀಡಿದ ಅವರು, ಶ್ರೀ ಮಹಾಲಕ್ಷ್ಮಿ ದೇವಿಯನ್ನು ಬಣ್ಣಕ್ಕೆ ಬೀಳ್ಕೊಡುವ ಧಾರ್ಮಿಕ ಸಂಪ್ರದಾಯದಲ್ಲಿ ಪಾಲ್ಗೊಂಡು ದೇವಿಗೆ ಭಕ್ತಿಯಿಂದ ಉಡಿ ತುಂಬಿ ವಿಶೇಷ ಪೂಜೆ ಸಲ್ಲಿಸಿದರು. ದೇವಿಯ ಕೃಪೆಯಿಂದ ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯ ಲಭಿಸಲಿ. ಕ್ಷೇತ್ರದಲ್ಲಿ ಅಭಿವೃದ್ಧಿ ಮತ್ತು ಸೌಹಾರ್ದತೆ ನೆಲೆಸಲಿ ಎಂದು ಪ್ರಾರ್ಥಿಸಿದರು.
ಧಾರ್ಮಿಕ ಕಾರ್ಯಕ್ರಮದ ಬಳಿಕ ಜಾತ್ರಾ ಸಮಿತಿಯ ಸದಸ್ಯರು, ಗ್ರಾಮದ ಹಿರಿಯರು ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಿದ ಅವರು, ಜಾತ್ರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ಮತ್ತು ಶಿಸ್ತುಬದ್ಧವಾಗಿ ಆಯೋಜಿಸುವ ಕುರಿತು ಚರ್ಚಿಸಿದರು.
ಜಾತ್ರೆಗೆ ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಯಾವುದೇ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಮುಂಚಿತವಾಗಿಯೇ ಕಲ್ಪಿಸಬೇಕು ಎಂದು ತಿಳಿಸಿದರು.
ಭಕ್ತರಿಗೆ ಕುಡಿಯುವ ನೀರು, ಸ್ವಚ್ಛತೆ, ತಾತ್ಕಾಲಿಕ ಶೌಚಾಲಯ, ವಿದ್ಯುತ್ ದೀಪಗಳು, ಸುಗಮ ಸಂಚಾರ, ವಾಹನಗಳ ನಿಲುಗಡೆ ವ್ಯವಸ್ಥೆ ಹಾಗೂ ರಸ್ತೆ ಸೌಲಭ್ಯ ಕಲ್ಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಜನದಟ್ಟಣೆ ನಿಯಂತ್ರಣ, ಭದ್ರತೆ ಮತ್ತು ತುರ್ತು ವೈದ್ಯಕೀಯ ನೆರವಿನ ವ್ಯವಸ್ಥೆಗೂ ಆದ್ಯತೆ ನೀಡುವ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಜಾತ್ರಾ ಮಹೋತ್ಸವವು ಧಾರ್ಮಿಕ ಆಚರಣೆಯ ಜತೆಗೆ ಗ್ರಾಮದ ಒಗ್ಗಟ್ಟು, ಪರಂಪರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಉತ್ಸವವಾಗಿದೆ. ಹೀಗಾಗಿ ಗ್ರಾಮದ ಪ್ರತಿಯೊಬ್ಬರೂ ಪರಸ್ಪರ ಸಹಕಾರ ಮತ್ತು ಸಮನ್ವಯದಿಂದ ಕಾರ್ಯನಿರ್ವಹಿಸಿ ಜಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಆಶಿಸಿದರು.
ಜಾತ್ರಾ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಹಿರಿಯರು ನೀಡಿದ ಸಲಹೆಗಳನ್ನು ಆಲಿಸಿದ ಅವರು, ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸಲು ಅಗತ್ಯ ಸಹಕಾರ ಮತ್ತು ಸಮನ್ವಯಕ್ಕೆ ಆದ್ಯತೆ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮಸ್ಥರು, ಭಕ್ತರು, ಜಾತ್ರಾ ಸಮಿತಿಯ ಪದಾಧಿಕಾರಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.