
ಕಲಬುರಗಿ, 10 ನವೆಂಬರ್ (ಹಿ.ಸ.):
ಸಾಲಬಾಧೆ ಹಾಗೂ ಬರಗಾಲದಿಂದ ತೊಗರಿ ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ಅನಿಲ್ ಕುಮಾರ್ ಶಿವರಾಯ (38) ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನಿಲ್ ಕುಮಾರ್ ಅವರು ತಮ್ಮ 3 ಎಕರೆ 20 ಗುಂಟೆ ಜಮೀನಿನಲ್ಲಿ ತೊಗರಿ ಬೆಳೆ ಬೆಳೆದಿದ್ದರು. ಆದರೆ ಬರಗಾಲದ ಹಿನ್ನೆಲೆಯಲ್ಲಿ ಬೆಳೆ ಕೈಕೊಟ್ಟಿದ್ದರಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಿಸುವಂತಾಗಿತ್ತು.
ಕೃಷಿ ಚಟುವಟಿಕೆಗಳಿಗಾಗಿ ಸುಮಾರು 5 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಅವರು, ಬೆಳೆ ನಷ್ಟ ಹಾಗೂ ಸಾಲದ ಹೊರೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R