



ಬಳ್ಳಾರಿ, 12 ನವೆಂಬರ್ (ಹಿ.ಸ.)
ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳಿಯ ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಪ್ರಯಾಣ ದರ ಹೆಚ್ಚಳ ಖಂಡಿಸಿ ಬಳ್ಳಾರಿ ಜಿಲ್ಲಾ ಜನತಾದಳ (ಜಾತ್ಯತೀತ) ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೀನಳ್ಳಿ ತಾಯಣ್ಣ ಮಾತನಾಡಿ, ಬರಗಾಲದ ಸಂಕಷ್ಟದ ನಡುವೆಯೇ ಹಾಲು ಮತ್ತು ಹಾಲಿನ ಉತ್ಪನ್ನಗಳು ಹಾಗೂ ಸಾರಿಗೆ ಪ್ರಯಾಣ ದರ ಹೆಚ್ಚಿಸಿರುವುದು ಜನವಿರೋಧಿ ನೀತಿಯಾಗಿದೆ. ಆರ್ಥಿಕ ಸಂಕಷ್ಟದಲ್ಲಿರುವ ಜನರ ನೆರವಿಗೆ ಬರಬೇಕಾದ ಸರ್ಕಾರವೇ ಜನರನ್ನು ಆರ್ಥಿಕವಾಗಿ ಶೋಷಿಸುತ್ತಿರುವುದು ವಿಷಾದನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮ ಹಾಗೂ ಆಹಾರ ಉತ್ಪನ್ನಗಳ ತಯಾರಿಕೆ ಮೇಲೆ ತೀವ್ರ ಆರ್ಥಿಕ ಹೊರೆ ಬೀಳುತ್ತಿದೆ. ಬೆಲೆ ಹೆಚ್ಚಳದಿಂದ ರೈತರು ಮತ್ತು ಗ್ರಾಮೀಣ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಎದುರಿಸುತ್ತಿರುವ ಜನರಿಗೆ ಬೆಲೆ ಏರಿಕೆ ಮತ್ತಷ್ಟು ಹೊರೆಯಾಗಿದೆ. ಅಕ್ಕಿ, ಸಕ್ಕರೆ, ಬೇಳೆ ಮತ್ತು ಎಣ್ಣೆಯ ಬೆಲೆಗಳೂ ಗಗನಕ್ಕೇರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ಯಲ್ಲನಗೌಡ, ಜಿಲ್ಲಾ ಕಾರ್ಯಾಧ್ಯಕ್ಷರಾದ ಮಧುರೈ ವಿಜಯ್ ಕುಮಾರ್, ಅಶೋಕ್ ಸಂಗನಕಲ್ಲು, ಭಾಷಾ, ಭಾವಿ ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಜೆ. ಪುಷ್ಪ, ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ರವಿಕುಮಾರ್, ಸೋಮಪ್ಪ, ಕಂಪ್ಲಿ ತಾಲೂಕು ಅಧ್ಯಕ್ಷ ಮೇಘರಾಜ್, ಸಂಡೂರು ತಾಲೂಕು ಅಧ್ಯಕ್ಷ ಹೊಸಿಗೇರಪ್ಪ, ಬಳ್ಳಾರಿ ಗ್ರಾಮಾಂತರ ಅಧ್ಯಕ್ಷ ಹೊನ್ನಳ್ಳಿ ರಾಜ, ಜಮೀಲಾ ಬೇಗಂ, ಶಬಾನಾ, ಸ್ವಾತಿ, ಲಕ್ಷ್ಮೀ, ರಾಜೇಶ್ವರಿ, ಶಮೀಮ್ ಭಾನು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್