
ಗದಗ, 13 ನವೆಂಬರ್ (ಹಿ.ಸ.)
ಗದಗ ನಗರದ ನಂದೀಶ್ವರ ಬಡಾವಣೆಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಹಾವಳಿಯಿಂದ ಸ್ಥಳೀಯ ನಿವಾಸಿಗಳ ನೆಮ್ಮದಿ ಹಾಳಾಗಿದೆ. ರಾತ್ರಿ ವೇಳೆ ಮದ್ಯ ಸೇವಿಸಿ ಬರುವ ಕೆಲವರು ಗಲಾಟೆ, ಕಲ್ಲು ತೂರಾಟ, ಹಲ್ಲೆ ಹಾಗೂ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಬಡಾವಣೆಯ ಮಹಿಳೆಯರು, ಮಕ್ಕಳು ಹಾಗೂ ವಿದ್ಯಾರ್ಥಿಗಳು ಆತಂಕದಲ್ಲಿ ಬದುಕುವಂತಾಗಿದೆ.
ಗದಗ ನಗರದ ಕಳಸಾಪುರ ರಸ್ತೆಯಲ್ಲಿರುವ ಒಳಾಂಗಣ ಕ್ರೀಡಾಂಗಣದ ಸಮೀಪದ ನಂದೀಶ್ವರ ನಗರದಲ್ಲಿ ಈ ಸಮಸ್ಯೆ ತೀವ್ರಗೊಂಡಿದೆ. ಬಡಾವಣೆಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ಗೆ ಅಬಕಾರಿ ಇಲಾಖೆ ಅನುಮತಿ ನೀಡಿರುವುದೇ ಈ ಅವ್ಯವಸ್ಥೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾರ್ನ ಪಕ್ಕದಲ್ಲೇ ಪಿಯು ಕಾಲೇಜು ಹಾಗೂ ನರ್ಸಿಂಗ್ ಕಾಲೇಜು ಇದ್ದು, ಸುತ್ತಮುತ್ತ ಜನವಸತಿ ಪ್ರದೇಶಗಳು ಮತ್ತು ಎರಡು ಉದ್ಯಾನವನಗಳಿವೆ. ವಿದ್ಯಾರ್ಥಿಗಳು ಪ್ರತಿನಿತ್ಯ ಇದೇ ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ಇಂತಹ ಸೂಕ್ಷ್ಮ ಪ್ರದೇಶದಲ್ಲಿ ಮದ್ಯದಂಗಡಿ ನಡೆಸಲು ಅನುಮತಿ ನೀಡಿರುವುದಕ್ಕೆ ಅಧಿಕಾರಿಗಳ ವಿರುದ್ಧ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾತ್ರಿ ವೇಳೆ ಮದ್ಯ ಸೇವಿಸಿ ಬರುವ ಕೆಲವರು ಮನೆಗಳ ಮುಂದೆ ಗಲಾಟೆ ಮಾಡುವುದು, ಕಲ್ಲು ತೂರಾಟ ನಡೆಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡುವುದು ಹಾಗೂ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸುವುದು ನಿತ್ಯದ ಸಮಸ್ಯೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪ್ರಶ್ನಿಸಲು ಮುಂದಾದರೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು ಹಾಗೂ ಹಲ್ಲೆಗೆ ಯತ್ನಿಸುವ ಘಟನೆಗಳೂ ನಡೆಯುತ್ತಿವೆ ಎನ್ನಲಾಗಿದೆ. ಕುಡುಕರ ಗಲಾಟೆ ಹಾಗೂ ಅಸಭ್ಯ ವರ್ತನೆಯ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾಗಳಲ್ಲಿಯೂ ಸೆರೆಯಾಗಿವೆ.
ಹಲ್ಲೆ ಪ್ರಕರಣ ಬಡಾವಣೆಯ ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿ ಸ್ಥಳೀಯ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯ ತಲೆಗೆ ಗಂಭೀರ ಗಾಯವಾಗಿದ್ದು, ಐದು ಹೊಲಿಗೆ ಹಾಕಲಾಗಿದೆ. ಹಬ್ಬದ ದಿನವೂ ನೆಮ್ಮದಿಯಿಂದ ಇರಲು ಬಿಡದ ಕುಡುಕರ ವರ್ತನೆಗೆ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರ ಕ್ರಮಕ್ಕೆ ನಿವಾಸಿಗಳ ಆಗ್ರಹ
ಘಟನೆ ನಡೆದು ಮೂರು ದಿನ ಕಳೆದರೂ ಪೊಲೀಸರು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಡಾವಣೆಯಲ್ಲಿ ರಾತ್ರಿ ಗಸ್ತು ಹೆಚ್ಚಿಸುವುದು ಸೇರಿದಂತೆ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಮಹಿಳೆಯರು ಹಾಗೂ ಮಕ್ಕಳು ರಾತ್ರಿ ವೇಳೆ ಮನೆಯಿಂದ ಹೊರಬರಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯ ನಿವಾಸಿ ಸರಸ್ವತಿ ಆತಂಕ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿನಿಯರ ಸುರಕ್ಷತೆಗೆ ಆತಂಕ
ಬಾರ್ ಪಕ್ಕದಲ್ಲೇ ಪಿಯುಸಿ ಹಾಗೂ ನರ್ಸಿಂಗ್ ಕಾಲೇಜುಗಳಿರುವುದರಿಂದ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಮದ್ಯದಂಗಡಿಗೆ ಬರುವವರ ಅಸಭ್ಯ ವರ್ತನೆಯಿಂದ ವಿದ್ಯಾರ್ಥಿನಿಯರು ಆತಂಕದಲ್ಲೇ ಓಡಾಡುವಂತಾಗಿದೆ. ಶಾಲಾ-ಕಾಲೇಜುಗಳು ಹಾಗೂ ಜನವಸತಿ ಪ್ರದೇಶಗಳ ಸಮೀಪ ಬಾರ್ಗೆ ಅನುಮತಿ ನೀಡುವಾಗ ನಿಯಮಗಳನ್ನು ಸರಿಯಾಗಿ ಪರಿಶೀಲಿಸಲಾಗಿದೆಯೇ? ಸ್ಥಳೀಯರ ಸುರಕ್ಷತೆಯನ್ನು ಪರಿಗಣಿಸಲಾಗಿದೆಯೇ? ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ.
ಬಾರ್ಗೆ ಅನುಮತಿ ನೀಡುವ ಸಂದರ್ಭದಲ್ಲಿ ಅಬಕಾರಿ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ನಿಯಮಗಳನ್ನು ಪಾಲಿಸಿದ್ದಾರೆಯೇ ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ನಿಯಮ ಉಲ್ಲಂಘನೆಯಾಗಿದ್ದರೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿ ರೇಖಾ ಆಗ್ರಹಿಸಿದ್ದಾರೆ.
ನಂದೀಶ್ವರ ನಗರದ ಮಹಿಳೆಯರು ಹಾಗೂ ನಿವಾಸಿಗಳು ಶಾಸಕ ಎಚ್.ಕೆ. ಪಾಟೀಲ ಅವರು ಕೂಡಲೇ ಮಧ್ಯಪ್ರವೇಶಿಸಿ ಬಡಾವಣೆಯ ಜನರಿಗೆ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. ಬಾರ್ ಅನ್ನು ತಕ್ಷಣವೇ ಸ್ಥಳಾಂತರಿಸಬೇಕು. ಇಲ್ಲದಿದ್ದರೆ ಬಡಾವಣೆಯ ಸಮಸ್ತ ನಿವಾಸಿಗಳು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP