
ಹುಬ್ಬಳ್ಳಿ, 13 ನವೆಂಬರ್ (ಹಿ.ಸ.):
ಕರ್ನಾಟಕದಲ್ಲಿ ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಡಿಸೆಂಬರ್ 4ರಿಂದ ಚಿಕ್ಕೋಡಿಯಿಂದ ಪಾದಯಾತ್ರೆ ಆರಂಭಿಸಿ, ಬೆಳಗಾವಿಯ ಸುವರ್ಣಸೌಧದ ಎದುರು ಸತ್ಯಾಗ್ರಹ ನಡೆಸುವುದಾಗಿ ವರೂರು ನವಗ್ರಹ ತೀರ್ಥಕ್ಷೇತ್ರದ ರಾಷ್ಟ್ರಸಂತ ಆಚಾರ್ಯ ಶ್ರೀ ಗುಣಧರನಂದಿ ಮಹಾರಾಜರು ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೈನ ಸಮಾಜದ ಬಡ ಕುಟುಂಬಗಳ ಮಕ್ಕಳ ಶಿಕ್ಷಣ ಹಾಗೂ ಅಭಿವೃದ್ಧಿಗೆ ನೆರವಾಗಲು ನಿಗಮ ಸ್ಥಾಪನೆ ಅಗತ್ಯವಾಗಿದೆ. ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಗಡುವು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನವೆಂಬರ್ 19ರಂದು ಜಮಖಂಡಿ ತಾಲೂಕಿನ ತೇರದಾಳದಲ್ಲಿ ಸಮಾಜದ ಮುಖಂಡರ ಸಭೆ ನಡೆಸಿ, ಬಳಿಕ ಕಾಗವಾಡ ಮತ್ತು ಅಥಣಿ ಕ್ಷೇತ್ರಗಳ ಶಾಸಕರಿಗೆ ಮನವಿ ಸಲ್ಲಿಸಲಾಗುವುದು. ಡಿಸೆಂಬರ್ 4ರಂದು ಚಿಕ್ಕೋಡಿಯಿಂದ ಆರಂಭವಾಗುವ ಪಾದಯಾತ್ರೆ ಮೂರು ದಿನಗಳಲ್ಲಿ ಬೆಳಗಾವಿ ತಲುಪಲಿದೆ. ಬೇಡಿಕೆ ಈಡೇರದಿದ್ದರೆ ದೇಹತ್ಯಾಗ ಮಾಡುವುದಾಗಿ ಎಚ್ಚರಿಸಿದರು.
ಶಿಕ್ಷಣ ಸಚಿವರ ವಜಾಕ್ಕೂ ಆಗ್ರಹ
ಜೈನ ಸನ್ಯಾಸಿಗಳು ವಿಹಾರ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದ್ದರೂ ಸ್ಪಂದನೆ ದೊರೆತಿಲ್ಲ. ಇದು ಸನ್ಯಾಸಿಗಳಿಗೆ ಮಾಡಿದ ಅವಮಾನ ಎಂದು ಆರೋಪಿಸಿದ ಅವರು, ಸಚಿವರನ್ನು ತಕ್ಷಣ ವಜಾಗೊಳಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದರು.
ಜೈನ ಸನ್ಯಾಸಿಗಳ ವಿಹಾರದ ಸಂದರ್ಭದಲ್ಲಿ ಸೂಕ್ತ ಭದ್ರತೆ ಒದಗಿಸಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.