ಬಳ್ಳಾರಿಯಲ್ಲಿ ನ.15ರಂದು ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆ:20 ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ
ಬಳ್ಳಾರಿ, 13 ನವೆಂಬರ್ (ಹಿ.ಸ.) ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯು ನವೆಂಬರ್ 15ರಂದು ಬಳ್ಳಾರಿ ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 12,004 ಅಭ್ಯರ್ಥಿ
ಬಳ್ಳಾರಿ: ನ. 15ರಂದು ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ


ಬಳ್ಳಾರಿ, 13 ನವೆಂಬರ್ (ಹಿ.ಸ.)

ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯು ನವೆಂಬರ್ 15ರಂದು ಬಳ್ಳಾರಿ ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 12,004 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ನ್ಯಾಯಯುತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಗೆ ಹೊರ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ನವೆಂಬರ್ 14ರಂದು ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಮಹಿಳಾ ಅಭ್ಯರ್ಥಿಗಳಿಗೆ ಕೌಲ್ ಬಜಾರ್‌ನ ನಲ್ಲಚೆರವು ಪ್ರದೇಶದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ಈ ವ್ಯವಸ್ಥೆಯ ನೋಡಲ್ ಅಧಿಕಾರಿಯಾಗಿ ಪ್ರಾದೇಶಿಕ ನಿರ್ದೇಶಕ ನಾಗೇಶ್ (ಮೊ. 9986696487) ಅವರನ್ನು ನೇಮಿಸಲಾಗಿದೆ.

ಪುರುಷ ಅಭ್ಯರ್ಥಿಗಳಿಗೆ ಕೌಲ್ ಬಜಾರ್‌ನ ರಂಗಮಂದಿರ ರಸ್ತೆಯಲ್ಲಿರುವ ಬಾಬು ಜಗಜೀವನ್ ರಾಮ್ ಭವನದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಇದರ ನೋಡಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ (ಮೊ. 9480843073) ಕಾರ್ಯನಿರ್ವಹಿಸಲಿದ್ದಾರೆ. ಅಲ್ಲದೆ, ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳನ್ನು ತಲುಪಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ವಿದ್ಯುತ್ ವ್ಯತ್ಯಯವಾಗದಂತೆ ಜನರೇಟರ್ ವ್ಯವಸ್ಥೆಯನ್ನೂ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಈ ವ್ಯಾಪ್ತಿಯಲ್ಲಿನ ನಕಲು ಪ್ರತಿ ಮತ್ತು ಅಂತರ್ಜಾಲ ಕೇಂದ್ರಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಪರೀಕ್ಷೆಯ ಪಾರದರ್ಶಕತೆ ಮತ್ತು ಸುರಕ್ಷತೆಗಾಗಿ ಎಲ್ಲ ಕೇಂದ್ರಗಳಲ್ಲಿ ದೃಶ್ಯಾವಳಿ ದಾಖಲಿಸುವ ಯಂತ್ರಗಳು, ತಪಾಸಣೆ, ಮುಖಚಹರೆ ಗುರುತಿಸುವ ವ್ಯವಸ್ಥೆ ಹಾಗೂ ಸಂಪರ್ಕ ತಡೆ ಸಾಧನಗಳನ್ನು ಅಳವಡಿಸಲಾಗಿದೆ. ಕೇಂದ್ರಗಳ ಒಳಗೆ ಮತ್ತು ಹೊರಗೆ ದಿನದ 24 ಗಂಟೆಯೂ ನಿಗಾ ಇರಿಸಲಾಗುವುದು. ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿರುವ ರಾಷ್ಟ್ರೀಯ ಮಾಹಿತಿ ಕೇಂದ್ರದ ಮೂಲಕ ಅಂತರ್ಜಾಲ ನೇರ ಪ್ರಸಾರ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ನಾಲ್ವರು ನೋಡಲ್ ಅಧಿಕಾರಿಗಳು ಹಾಗೂ ಅಗತ್ಯ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಶ್ರವಣ ದೋಷ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆ ಹೊಂದಿರುವ ಅಭ್ಯರ್ಥಿಗಳಿಗೆ ನೆರವಾಗಲು ಪರೀಕ್ಷಾ ಕೇಂದ್ರಗಳಲ್ಲಿ ಅರೆವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ ಎರಡು ಗಂಟೆ ಮುಂಚಿತವಾಗಿ ಕೇಂದ್ರಗಳಿಗೆ ಹಾಜರಾಗಬೇಕು. ಪ್ರವೇಶ ಪತ್ರದ ಜೊತೆಗೆ ಆಧಾರ್ ಕಾರ್ಡ್ ಅಥವಾ ಚುನಾವಣಾ ಗುರುತಿನ ಚೀಟಿಯಂತಹ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು ಎಂದು ಸೂಚಿಸಿದರು.

ಅಭ್ಯರ್ಥಿಗಳು ಪೂರ್ಣ ತೋಳಿನ ಉಡುಪು ಹಾಗೂ ಹೆಚ್ಚಿನ ಜೇಬುಗಳಿರುವ ಬಟ್ಟೆಗಳನ್ನು ಧರಿಸಿ ಬರುವಂತಿಲ್ಲ. ಶೂ ಧರಿಸಿ ಬಂದರೆ ತಪಾಸಣೆಗಾಗಿ ಅವುಗಳನ್ನು ತೆಗೆಸಲಾಗುವುದು. ಸಾಮಾನ್ಯ ಚಪ್ಪಲಿ ಧರಿಸಲು ಅವಕಾಶವಿದೆ. ಸ್ಮಾರ್ಟ್ ವಾಚ್, ನೀಲದಂತ ಸಂಪರ್ಕ ಸಾಧನಗಳು, ಕಿವಿಯಲ್ಲಿ ಧರಿಸುವ ವಿದ್ಯುನ್ಮಾನ ಸಾಧನಗಳು ಸೇರಿದಂತೆ ಯಾವುದೇ ವಿದ್ಯುತ್ ಅಥವಾ ವಿದ್ಯುನ್ಮಾನ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಮಾತನಾಡಿ, ಪರೀಕ್ಷೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ತಪ್ಪು ಸಂದೇಶಗಳನ್ನು ಹರಡುವುದನ್ನು ತಡೆಯಲು ಜಿಲ್ಲಾದ್ಯಂತ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯಿಂದ ನಿಗಾ ಇರಿಸಲಾಗಿದೆ. ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

20 ಪರೀಕ್ಷಾ ಕೇಂದ್ರಗಳ ಭದ್ರತೆಗಾಗಿ 13 ಪೊಲೀಸ್ ನಿರೀಕ್ಷಕರು, 20 ಪೊಲೀಸ್ ಉಪನಿರೀಕ್ಷಕರು, 250 ಮುಖ್ಯಪೇದೆ ಮತ್ತು ಪೊಲೀಸ್ ಪೇದೆಗಳು ಹಾಗೂ 150 ಗೃಹರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೇಲ್ವಿಚಾರಣೆಗಾಗಿ ಇಬ್ಬರು ಪೊಲೀಸ್ ಉಪಾಧೀಕ್ಷಕರನ್ನು ನೇಮಿಸಲಾಗಿದ್ದು, ಅವರು ಖುದ್ದಾಗಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande