ಮೇಕೆದಾಟು ಯೋಜನೆಗೆ ಅನುಮತಿ ನೀಡಿ, ಕಸ್ತೂರಿರಂಗನ್ ವರದಿ ಹಿಂಪಡೆಯಿರಿ: ಪ್ರಧಾನಿ ಮುಂದೆ ರಾಜ್ಯದ ಬೇಡಿಕೆಗಳನ್ನಿಟ್ಟ ಡಿ.ಕೆ. ಶಿವಕುಮಾರ್
1,000 ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಸಿಎಸ್ಆರ್ ನೆರವು ಕೋರಿಕೆ – ರಾಜ್ಯದ ವಿವಿಧೆಡೆ ವಿಜ್ಞಾನ ಕೇಂದ್ರ, ತಾರಾಲಯ ಸ್ಥಾಪನೆ – ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಉತ್ತೇಜನ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್


ಮೈಸೂರು, 13 ನವೆಂಬರ್ (ಹಿ.ಸ.):

ಮೇಕೆದಾಟು ಜಲಾಶಯ ಯೋಜನೆಗೆ ಅಗತ್ಯ ಅನುಮತಿಗಳನ್ನು ನೀಡಬೇಕು, ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್ ವರದಿಯ ಶಿಫಾರಸುಗಳನ್ನು ಹಿಂಪಡೆಯಬೇಕು ಹಾಗೂ ರಾಜ್ಯದ 1,000 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಬಳಸಲು ಅವಕಾಶ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ರಾಜ್ಯದ ಪ್ರಮುಖ ಬೇಡಿಕೆಗಳನ್ನು ಮಂಡಿಸಿದರು.

ಮೈಸೂರಿನಲ್ಲಿ ಶುಕ್ರವಾರ ನಡೆದ ಕಾಸ್ಮೋಸ್-ಮೈಸೂರು ತಾರಾಲಯ ಮತ್ತು ಭಾರತ ವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಹಾಗೂ ವಿವಿಧ ಸವಾಲುಗಳ ಪರಿಹಾರಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಹಕಾರ ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಮೂರು ಪ್ರಮುಖ ಬೇಡಿಕೆಗಳನ್ನು ಪ್ರಧಾನಿಯವರ ಮುಂದಿಡುತ್ತಿದ್ದು, ಅವುಗಳನ್ನು ಈಡೇರಿಸುವ ವಿಶ್ವಾಸವಿದೆ ಎಂದರು.

ಮೇಕೆದಾಟು ಯೋಜನೆಗೆ ಅನುಮತಿ ನೀಡಿ

ಮೇಕೆದಾಟು ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈಗಾಗಲೇ ಕರ್ನಾಟಕದ ಪರವಾಗಿ ತೀರ್ಪು ನೀಡಿದ್ದು, ಕಾನೂನಾತ್ಮಕವಾಗಿ ಈ ವಿಚಾರ ಇತ್ಯರ್ಥಗೊಂಡಿದೆ. ಕುಡಿಯುವ ನೀರಿನ ದೃಷ್ಟಿಯಿಂದ ಮಹತ್ವದ ಈ ಯೋಜನೆಗೆ ವಿಳಂಬ ಮಾಡದೆ ಕೇಂದ್ರ ಸರ್ಕಾರ ಅಂತಿಮ ಶಾಸನಬದ್ಧ ಅನುಮತಿಗಳನ್ನು ನೀಡಬೇಕು ಎಂದು ಮನವಿ ಮಾಡಿದರು.

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್ ವರದಿಯ ಶಿಫಾರಸುಗಳನ್ನು ವಿರೋಧಿಸಿ ಕರ್ನಾಟಕ ವಿಧಾನಮಂಡಲವು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ. ವರದಿಯಿಂದ ತೊಂದರೆಗೆ ಒಳಗಾಗುವ ಪ್ರದೇಶಗಳಲ್ಲಿ ಜನಾಭಿಪ್ರಾಯ ಸಂಗ್ರಹಿಸಿ, ಸಾರ್ವಜನಿಕರೊಂದಿಗೆ ವ್ಯಾಪಕ ಚರ್ಚೆಯನ್ನೂ ನಡೆಸಲಾಗಿದೆ. ಅಲ್ಲಿನ ಜನರ ಭಾವನೆ ಮತ್ತು ಬದುಕಿನ ವಾಸ್ತವಗಳನ್ನು ಕೇಂದ್ರ ಸರ್ಕಾರ ಗೌರವಿಸಬೇಕು. ಸ್ಥಳೀಯ ಜನರ ಜೀವನೋಪಾಯಕ್ಕೆ ಧಕ್ಕೆಯಾಗದಂತೆ ವರದಿಯ ಶಿಫಾರಸುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

1,000 ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಸಿಎಸ್‌ಆರ್ ನೆರವು

ಪ್ರಾಥಮಿಕ ಶಿಕ್ಷಣದ ಗುಣಮಟ್ಟದ ಕೊರತೆಯಿಂದ ಪೋಷಕರು ಮಕ್ಕಳ ಶಿಕ್ಷಣಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಬರುತ್ತಿದ್ದಾರೆ. ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ನಡೆಯುತ್ತಿರುವ ಆರ್ಥಿಕ ವಲಸೆಯ ಪ್ರಮಾಣ 2002ರಲ್ಲಿ ಶೇ.31ರಷ್ಟಿದ್ದರೆ, 2026ರಲ್ಲಿ ಶೇ.47ಕ್ಕೆ ಏರಿಕೆಯಾಗಿದೆ. ಇದೇ ಪ್ರವೃತ್ತಿ ಮುಂದುವರಿದರೆ ಮುಂದಿನ ಎರಡು ದಶಕಗಳಲ್ಲಿ ಈ ಪ್ರಮಾಣ ಶೇ.70ಕ್ಕೆ ತಲುಪುವ ಸಾಧ್ಯತೆಯಿದೆ ಎಂದು ವಿವರಿಸಿದರು.

ಗ್ರಾಮೀಣ ಮತ್ತು ನಗರ ಪ್ರದೇಶಗಳ ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿಯನ್ನು ತಡೆಯಲು ರಾಜ್ಯದ ಸಿಎಸ್‌ಆರ್ ನೀತಿಯನ್ನು ಕೇಂದ್ರ ಸರ್ಕಾರ ಪರಿಗಣಿಸಬೇಕು. ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಸಿಎಸ್‌ಆರ್ ಯೋಜನೆಗಳನ್ನು ಕರ್ನಾಟಕದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಅನುಷ್ಠಾನಗೊಳಿಸುವಂತೆ ಸಲಹಾ ಸೂಚನೆಗಳನ್ನು ಹೊರಡಿಸಬೇಕು ಎಂದು ಮನವಿ ಮಾಡಿದರು.

ಇದರಿಂದ ರಾಜ್ಯದ 1,000 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು ಹಾಗೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಅನುಕೂಲವಾಗಲಿದೆ ಎಂದರು.

ಕಾಸ್ಮೋಸ್ ಕೇಂದ್ರ ರಾಜ್ಯದ ಹೆಮ್ಮೆಯಾಗಲಿದೆ

ಪರಂಪರೆ, ಜ್ಞಾನ ಮತ್ತು ಸಂಸ್ಕೃತಿಗೆ ಹೆಸರಾದ ಮೈಸೂರಿಗೆ ಕಾಸ್ಮೋಸ್ ತಾರಾಲಯ ಮತ್ತೊಂದು ಮಹತ್ವದ ವೈಜ್ಞಾನಿಕ ಹೆಗ್ಗುರುತಾಗಲಿದೆ. ಇದು ಮೈಸೂರಿನಷ್ಟೇ ಅಲ್ಲದೆ ಇಡೀ ರಾಜ್ಯದ ಹೆಮ್ಮೆಯ ಕೇಂದ್ರವಾಗಿ ಹೊರಹೊಮ್ಮಲಿದೆ. ಈ ಯೋಜನೆಯನ್ನು ಮೈಸೂರಿಗೆ ತರಲು ನೆರವಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.

ಕರ್ನಾಟಕ ವಿಜ್ಞಾನದ ಹೆಗ್ಗುರುತು ಹೊಂದಿರುವ ರಾಜ್ಯ

ಭಾರತದ ಬಾಹ್ಯಾಕಾಶ ಕ್ಷೇತ್ರದ ಸಾಧನೆಗಳ ಇತಿಹಾಸದಲ್ಲಿ ಕರ್ನಾಟಕದ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ. ಭಾರತದ ಮೊದಲ ಉಪಗ್ರಹ ಆರ್ಯಭಟದಿಂದ ಹಿಡಿದು ಚಂದ್ರಯಾನ, ಆದಿತ್ಯ ಎಲ್-1 ಮತ್ತು ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಯವರೆಗೆ ಕರ್ನಾಟಕದ ಪಾತ್ರ ಮಹತ್ವದ್ದಾಗಿದೆ. ಬೆಂಗಳೂರು ಭಾರತದ ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಕೇಂದ್ರವಾಗಿದೆ ಎಂದು ಹೇಳಿದರು.

ಯು.ಆರ್. ರಾವ್ ಉಪಗ್ರಹ ಕೇಂದ್ರ ಮತ್ತು ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಅಂಡ್ ಕಮಾಂಡ್ ನೆಟ್‌ವರ್ಕ್ ಸೇರಿದಂತೆ ಪ್ರಮುಖ ಸಂಸ್ಥೆಗಳು ದೇಶದ ಬಾಹ್ಯಾಕಾಶ ಯೋಜನೆಗಳಿಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.

ರಾಜ್ಯ ಸರ್ಕಾರವು ಶಿವಮೊಗ್ಗ, ರಾಯಚೂರು, ಯಾದಗಿರಿ ಮತ್ತು ಚಿಕ್ಕಮಗಳೂರಿನಲ್ಲಿ ಒಟ್ಟು ಸುಮಾರು 59 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಶಿವಮೊಗ್ಗ ವಿಜ್ಞಾನ ಕೇಂದ್ರದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ರಾಯಚೂರಿನಲ್ಲಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಯಾದಗಿರಿ ಮತ್ತು ಚಿಕ್ಕಮಗಳೂರಿನಲ್ಲಿಯೂ ವಿಜ್ಞಾನ ಕೇಂದ್ರಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

2024-25ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವ ಬೆಂಗಳೂರು ವಿಜ್ಞಾನ ನಗರವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ 230 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಬೆಂಗಳೂರು, ಮಂಗಳೂರು ಮತ್ತು ಗದಗದಲ್ಲಿ ಈಗಾಗಲೇ ತಾರಾಲಯಗಳು ಕಾರ್ಯನಿರ್ವಹಿಸುತ್ತಿವೆ. ಚಿತ್ತಾಪುರದ ತಾರಾಲಯ ಉದ್ಘಾಟನೆಗೆ ಸಿದ್ಧವಾಗಿದೆ ಎಂದರು.

ರಾಜ್ಯದ ವಿವಿಧೆಡೆ ತಾರಾಲಯಗಳ ನಿರ್ಮಾಣ

ಧಾರವಾಡ, ಮಡಿಕೇರಿ, ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿಯೂ ತಾರಾಲಯಗಳನ್ನು ನಿರ್ಮಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಇನ್ನಷ್ಟು ಪ್ರದೇಶಗಳಿಗೆ ಇಂತಹ ಸೌಲಭ್ಯಗಳನ್ನು ವಿಸ್ತರಿಸಲಾಗುವುದು. ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೂ ಕಾಸ್ಮೋಸ್ ಮಾದರಿಯ ಅತ್ಯಾಧುನಿಕ ವಿಜ್ಞಾನ ಮತ್ತು ತಾರಾಲಯ ಸೌಲಭ್ಯ ದೊರೆಯಬೇಕು. ಈ ಸಾಧ್ಯತೆಗಳನ್ನು ಪರಿಶೀಲಿಸುವಂತೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಸೂಚಿಸಲಾಗುವುದು ಎಂದು ಹೇಳಿದರು.

ಸರ್ಕಾರದ ಸಂಚಾರಿ ಡಿಜಿಟಲ್ ತಾರಾಲಯ ಯೋಜನೆಯಡಿ ಈಗಾಗಲೇ 19.21 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತಮ್ಮ ಶಾಲೆಗಳಲ್ಲಿಯೇ ಕುಳಿತು ಬಾಹ್ಯಾಕಾಶದ ವಿಸ್ಮಯಗಳನ್ನು ವೀಕ್ಷಿಸಿದ್ದಾರೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 833 ಶಾಲೆಗಳು ಮತ್ತು ಕಾಲೇಜುಗಳಿಗೆ ದೂರದರ್ಶಕಗಳನ್ನು ವಿತರಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಗ್ರಹಗಳು, ನಕ್ಷತ್ರಗಳು ಮತ್ತು ಇತರ ಆಕಾಶಕಾಯಗಳನ್ನು ನೇರವಾಗಿ ವೀಕ್ಷಿಸಿ ಅಧ್ಯಯನ ಮಾಡಲು ಸಾಧ್ಯವಾಗಿದೆ ಎಂದರು.

ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ ಮತ್ತು ಜವಾಹರಲಾಲ್ ನೆಹರು ತಾರಾಲಯದ ಸಹಯೋಗದಲ್ಲಿ ವಿಜ್ಞಾನ ಶಿಕ್ಷಕರಿಗೆ ವಿಶೇಷ ತರಬೇತಿಯನ್ನೂ ನೀಡಲಾಗಿದೆ ಎಂದು ತಿಳಿಸಿದರು.

ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಉತ್ತೇಜನ

ಕರ್ನಾಟಕ ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-30ರ ಮೂಲಕ ನವೋದ್ಯಮಗಳಿಗೆ ಉತ್ತೇಜನ ನೀಡುವುದು, ಸಂಶೋಧನೆಯನ್ನು ಬಲಪಡಿಸುವುದು, ನುರಿತ ಮಾನವ ಸಂಪನ್ಮೂಲ ಸೃಷ್ಟಿಸುವುದು ಹಾಗೂ ಕೈಗಾರಿಕೆ ಮತ್ತು ಶೈಕ್ಷಣಿಕ ಸಂಸ್ಥೆಗಳ ನಡುವೆ ಸಂಪರ್ಕ ಬೆಸೆಯುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ನಾವೀನ್ಯತೆ, ನವೋದ್ಯಮಗಳು ಮತ್ತು ವಾಣಿಜ್ಯ ಅವಕಾಶಗಳನ್ನು ಉತ್ತೇಜಿಸುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರದ ನೇತೃತ್ವದಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರವನ್ನು ಕರ್ನಾಟಕ ಸ್ಥಾಪಿಸಿದೆ ಎಂದರು.

ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯು ಖಗೋಳ ವಿಜ್ಞಾನ ಮತ್ತು ಸೌರ ವಿಜ್ಞಾನ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೊಡುಗೆ ನೀಡುತ್ತಿದೆ. ಆದಿತ್ಯ ಎಲ್-1 ಯೋಜನೆಗೆ ಪ್ರಮುಖ ಉಪಕರಣ ಅಭಿವೃದ್ಧಿಪಡಿಸುವಲ್ಲಿಯೂ ಸಂಸ್ಥೆ ಮಹತ್ವದ ಪಾತ್ರ ವಹಿಸಿದೆ. ಬಾಹ್ಯಾಕಾಶ ವಿಜ್ಞಾನದ ಹೊಸ ಆಯಾಮಗಳ ಅಧ್ಯಯನಕ್ಕೆ ಕರ್ನಾಟಕ ಪ್ರಮುಖ ನೆಲೆಯಾಗಿದೆ ಎಂದು ತಿಳಿಸಿದರು.

ಮಾಜಿ ರಾಷ್ಟ್ರಪತಿ ಹಾಗೂ ಖ್ಯಾತ ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಕನಸು ಕಾಣುವ ಕುರಿತ ಸಂದೇಶವನ್ನು ಉಲ್ಲೇಖಿಸಿದ ಅವರು, ಕನಸುಗಳು ಆಲೋಚನೆಗಳಾಗಿ, ಆಲೋಚನೆಗಳು ಕಾರ್ಯರೂಪಕ್ಕೆ ಪರಿವರ್ತನೆಯಾಗುತ್ತವೆ ಎಂಬ ಅವರ ಮಾತು ಯುವಜನರಿಗೆ ಸದಾ ಸ್ಫೂರ್ತಿಯಾಗಿದೆ ಎಂದರು.

ಭಾರತ ವನದಿಂದ ಪರಿಸರ ಸಂರಕ್ಷಣೆಗೆ ಕೊಡುಗೆ

ಪ್ರಧಾನಿಯವರ ಆಶಯದಂತೆ ಮಿಯಾವಾಕಿ ಪದ್ಧತಿಯಲ್ಲಿ ಅಭಿವೃದ್ಧಿಪಡಿಸಿರುವ ಭಾರತ ವನವು ಮೈಸೂರನ್ನು ಹಸಿರುಮಯ, ಆರೋಗ್ಯಕರ ಮತ್ತು ಸುಸ್ಥಿರ ನಗರವನ್ನಾಗಿ ರೂಪಿಸಲು ನೆರವಾಗಲಿದೆ. ಭಾರತ ವನವು ಭೂಮಿಯ ಭವಿಷ್ಯವನ್ನು ಪೋಷಿಸಿದರೆ, ಯುವ ಪೀಳಿಗೆಯ ಜ್ಞಾನ ಮತ್ತು ಆಲೋಚನೆಗಳ ಭವಿಷ್ಯವನ್ನು ಕಾಸ್ಮೋಸ್ ತಾರಾಲಯ ರೂಪಿಸಲಿದೆ ಎಂದು ಹೇಳಿದರು.

ಮರಗಿಡಗಳು ಮನುಷ್ಯನನ್ನು ಪ್ರಕೃತಿಯೊಂದಿಗೆ ಬೆಸೆಯುತ್ತವೆ. ತಾರಾಲಯವು ನಮ್ಮ ಕಲ್ಪನೆ ಮತ್ತು ಚಿಂತನೆಗಳನ್ನು ವಿಸ್ತರಿಸುತ್ತದೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣವಾಗಬೇಕಾದರೆ ಹಸಿರುಮಯ ಭೂಮಿಯೂ ಬೇಕು, ವೈಜ್ಞಾನಿಕ ಚಿಂತನೆ ಹೊಂದಿರುವ ಯುವ ಪೀಳಿಗೆಯೂ ಬೇಕು. ಈ ಎರಡರ ಸಮನ್ವಯಕ್ಕಾಗಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande