
ಬೆಂಗಳೂರು, 13 ನವೆಂಬರ್ (ಹಿ.ಸ.):
ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಮತ್ತಷ್ಟು ಸರಳ, ಪಾರದರ್ಶಕಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು-2026ಕ್ಕೆ ತಿದ್ದುಪಡಿ ತರಲು ಮುಂದಾಗಿರುವ ಸರ್ಕಾರ, ಈ ಸಂಬಂಧ ಕರಡು ಅಧಿಸೂಚನೆ ಹೊರಡಿಸಿದೆ.
ಸಾರ್ವಜನಿಕರು, ಶಿಕ್ಷಕರು ಹಾಗೂ ಸಂಬಂಧಪಟ್ಟವರು ಕರಡು ನಿಯಮಗಳ ಕುರಿತು ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಕರಡು ನಿಯಮಗಳ ಪ್ರಕಾರ, ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್) ಹಾಗೂ ಪ್ರಮುಖ ಶಾಲೆಗಳಲ್ಲಿನ ಖಾಲಿ ಹುದ್ದೆಗಳನ್ನು ನಿರ್ಣಾಯಕ ಹುದ್ದೆಗಳೆಂದು ಪರಿಗಣಿಸಿ, ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲು ಉದ್ದೇಶಿಸಲಾಗಿದೆ.
ಕೆಪಿಎಸ್ನಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಪ್ರೋತ್ಸಾಹಕ ಅಂಕಗಳನ್ನು ನೀಡುವ ಪ್ರಸ್ತಾವನೆಯೂ ಇದೆ. ಅದರಂತೆ ಎ ವಲಯದಲ್ಲಿ ಸೇವೆ ಸಲ್ಲಿಸಿದವರಿಗೆ 2 ಅಂಕ, ಬಿ ವಲಯಕ್ಕೆ 4 ಅಂಕ ಹಾಗೂ ಸಿ ವಲಯಕ್ಕೆ 6 ಅಂಕಗಳನ್ನು ನೀಡಲು ಉದ್ದೇಶಿಸಲಾಗಿದೆ.
ಇನ್ನು ತಾಲ್ಲೂಕು ಮಟ್ಟದಲ್ಲಿ ಶೇ.25ರಷ್ಟು ವರ್ಗಾವಣೆಗೆ ಅವಕಾಶ ಕಲ್ಪಿಸುವ ಪ್ರಸ್ತಾವನೆ ಇದ್ದು, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಹಾಗೂ ವಿಶೇಷ ಚೇತನ ಶಿಕ್ಷಕರಿಗೆ ಈ ನಿಯಮಗಳಿಂದ ವಿನಾಯಿತಿ ನೀಡಲು ಉದ್ದೇಶಿಸಲಾಗಿದೆ.
ಗರ್ಭಿಣಿ ಶಿಕ್ಷಕಿಯರು, ಐದು ವರ್ಷದೊಳಗಿನ ಮಕ್ಕಳನ್ನು ಹೊಂದಿರುವ ತಾಯಂದಿರು, ಪತಿ-ಪತ್ನಿ ಪ್ರಕರಣಗಳು ಹಾಗೂ ಮಕ್ಕಳ ವೈದ್ಯಕೀಯ ಸಮಸ್ಯೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ.
ಇದಲ್ಲದೆ, ಡಯಟ್ ಹಾಗೂ ರಾಜ್ಯಮಟ್ಟದ ಹುದ್ದೆಗಳಿಗೆ ವರ್ಗಾವಣೆ ಬಯಸುವ ಶಿಕ್ಷಕರಿಗೆ ಕನಿಷ್ಠ 12 ವರ್ಷಗಳ ಸೇವಾನುಭವ ಕಡ್ಡಾಯಗೊಳಿಸುವ ಪ್ರಸ್ತಾವನೆ ಇದೆ. ಇಂತಹ ಹುದ್ದೆಗಳಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಬೇಕಾಗುತ್ತದೆ.
ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಕನಿಷ್ಠ ಒಂಬತ್ತು ವರ್ಷ ಸೇವೆ ಸಲ್ಲಿಸುವ ನಿಯಮವನ್ನೂ ಕರಡು ತಿದ್ದುಪಡಿಯಲ್ಲಿ ಪ್ರಸ್ತಾಪಿಸಲಾಗಿದೆ.
ಒಟ್ಟಾರೆ, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು, ಪ್ರಮುಖ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸುವುದು ಹಾಗೂ ವೈದ್ಯಕೀಯ ಮತ್ತು ಕೌಟುಂಬಿಕ ಅಗತ್ಯಗಳಿಗೆ ಆದ್ಯತೆ ನೀಡುವುದು ಈ ತಿದ್ದುಪಡಿಯ ಪ್ರಮುಖ ಉದ್ದೇಶವಾಗಿದೆ.
ಕರಡು ಅಧಿಸೂಚನೆಗೆ ಸಾರ್ವಜನಿಕರಿಂದ ಬರುವ ಸಲಹೆ ಮತ್ತು ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಅಂತಿಮ ನಿಯಮಗಳನ್ನು ಜಾರಿಗೊಳಿಸುವ ನಿರೀಕ್ಷೆಯಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R