ಮಂಡ್ಯ: ಕಬ್ಬಿಗೆ ಟನ್ಗೆ ₹5,500 ದರ ನಿಗದಿ ಪಡಿಸಲು ಆಗ್ರಹ; ರೈತರಿಂದ ಪತ್ರ ಚಳವಳಿ
ಕಬ್ಬಿಗೆ ಪ್ರತಿ ಟನ್ಗೆ ₹5,500 ದರ ನಿಗದಿ ಪಡಿಸುವಂತೆ ಆಗ್ರಹಿಸಿ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಭೂಮಿತಾಯಿ ಹೋರಾಟ ಸಮಿತಿಯಿಂದ ಪತ್ರ ಚಳವಳಿ ನಡೆಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ರವಾನಿಸಿದ ರೈತರು, ತಕ್ಷಣ ಸಭೆ ಕರೆದು ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿದರು.
Mandya Farmers Launch Letter Campaign Demanding Rs 5500 Per Tonne Sugarcane Price


ಮಂಡ್ಯ, 13 ನವೆಂಬರ್ (ಹಿ.ಸ.):

ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಭೂಮಿತಾಯಿ ಹೋರಾಟ ಸಮಿತಿಯ ನೇತೃತ್ವದಲ್ಲಿ ರೈತರು ಪತ್ರ ಚಳವಳಿ ನಡೆಸಿದರು.

ಜಿಲ್ಲೆಯ ಶ್ರೀರಂಗಪಟ್ಟಣದ ಅಂಚೆ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ, ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿ ಪಡಿಸಬೇಕು ಎಂದು ರೈತರು ಒತ್ತಾಯಿಸಿದರು.

ಈ ಸಂಬಂಧ ಉಸ್ತುವಾರಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಸರ್ಕಾರಕ್ಕೆ ಅಂಚೆ ಮೂಲಕ ಪತ್ರಗಳನ್ನು ರವಾನಿಸಿದರು.

ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಳಂಬ ಧೋರಣೆ ಅನುಸರಿಸುತ್ತಿವೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಕಬ್ಬಿನಿಂದ ಸರ್ಕಾರಕ್ಕೆ ಸಾಕಷ್ಟು ಆದಾಯ ಬರುತ್ತಿದ್ದರೂ, ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಲು ಹಿಂದೇಟು ಹಾಕಲಾಗುತ್ತಿದೆ. ಇದರಿಂದ ರೈತರು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ರೈತರು, ಬೆಳಗಾವಿ ಜಿಲ್ಲೆಗೆ ಕಬ್ಬಿನ ದರ ನಿಗದಿ ಮಾಡಲಾಗಿದೆ. ಆದರೆ ಮಂಡ್ಯ ಜಿಲ್ಲೆಯ ರೈತರ ವಿಚಾರದಲ್ಲಿ ಸಚಿವರು, ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಏನು ಮಾಡುತ್ತಿದ್ದಾರೆ?

ನಮ್ಮ ರೈತರಿಗೆ ಯಾಕೆ ಸೂಕ್ತ ಬೆಲೆ ನೀಡುತ್ತಿಲ್ಲ? ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೆ, ಜನಪ್ರತಿನಿಧಿಗಳು ಮಾತ್ರ ಆಸ್ತಿ ಸಂಪಾದನೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ಕೂಡಲೇ ಸಭೆ ಕರೆದು ಮಂಡ್ಯ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡಬೇಕು. ರೈತರ ಸಂಕಷ್ಟಕ್ಕೆ ಸ್ಪಂದಿಸದೆ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಲಾಗುತ್ತಿದೆ.

ಕಬ್ಬು ಬೆಳೆಗಾರರಿಗೆ ವಿಷ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಕಿಡಿಕಾರಿದ ಪ್ರತಿಭಟನಾಕಾರರು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ಆಗ್ರಹಿಸಿದರು.

ತಕ್ಷಣವೇ ರೈತರ ಸಭೆ ಕರೆದು ಕಬ್ಬಿನ ಬೆಲೆ ನಿಗದಿ ಸಂಬಂಧ ಸೂಕ್ತ ನಿರ್ಧಾರ ಕೈಗೊಂಡು ಬೆಳೆಗಾರರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುವ ಅನಿವಾರ್ಯತೆ ಎದುರಾಗಲಿದೆ ಎಂದು ರೈತರು ಎಚ್ಚರಿಕೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande