
ಬೆಂಗಳೂರು, 13 ನವೆಂಬರ್ (ಹಿ.ಸ.):
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಸಲು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೂ ಮುನ್ನ ಪ್ರಕಟಿಸಲಾಗಿದ್ದ ಹಳೆಯ ಮತದಾರರ ಪಟ್ಟಿಯನ್ನೇ ಬಳಸಲು ಅನುಮತಿ ನೀಡುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.
ಎಸ್ಐಆರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕದ ಪರಿಷ್ಕೃತ ಮತದಾರರ ಪಟ್ಟಿಯ ಸಂಪೂರ್ಣ ದತ್ತಾಂಶ ಇನ್ನೂ ಲಭ್ಯವಾಗದ ಹಿನ್ನೆಲೆಯಲ್ಲಿ, 2026ರ ಏಪ್ರಿಲ್ 18ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯ ಆಧಾರದಲ್ಲಿ ಚುನಾವಣೆ ನಡೆಸಲು ಅವಕಾಶ ನೀಡುವಂತೆ ಆಯೋಗ ಗುರುವಾರ ಅರ್ಜಿ ಸಲ್ಲಿಸಿದೆ.
ಕೇಂದ್ರ ಚುನಾವಣಾ ಆಯೋಗದಿಂದ (ಇಸಿಐ) ಎಸ್ಐಆರ್ ನಂತರದ ಮತದಾರರ ದತ್ತಾಂಶವನ್ನು ಪಡೆಯುವಲ್ಲಿ ಉಂಟಾಗಿರುವ ವಿಳಂಬವೇ ಈ ನಿರ್ಧಾರಕ್ಕೆ ಪ್ರಮುಖ ಕಾರಣವಾಗಿದೆ.
ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಹಲವು ಬಾರಿ ಪತ್ರ ಬರೆದಿದ್ದರೂ, ಖುದ್ದಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ತನ್ನ ಅರ್ಜಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದೆ.
ಹೊಸ ಹಾಗೂ ನಿಖರವಾದ ಮತದಾರರ ದತ್ತಾಂಶ ಲಭ್ಯವಾಗದ ಹಿನ್ನೆಲೆಯಲ್ಲಿ, ಅನಿವಾರ್ಯವಾಗಿ ಹಿಂದಿನ ವಾರ್ಡ್ವಾರು ಮತದಾರರ ಪಟ್ಟಿಗಳ ಆಧಾರದಲ್ಲಿಯೇ ಜಿಬಿಎ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಆಯೋಗ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ನೀಡಲಾಗಿರುವ ಕಾಲಾವಕಾಶವನ್ನು 2027ರ ಜನವರಿ 31ರವರೆಗೆ ವಿಸ್ತರಿಸುವಂತೆಯೂ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.
ಹಳೆಯ ಪಟ್ಟಿಗೆ ಒಪ್ಪಿಗೆ ಸಿಕ್ಕರೆ ತಕ್ಷಣ ಪ್ರಕ್ರಿಯೆ
ಹಳೆಯ ಮತದಾರರ ಪಟ್ಟಿಯನ್ನು ಬಳಸಲು ನ್ಯಾಯಾಲಯ ಅನುಮತಿ ನೀಡಿದರೆ, 2027ರ ಜನವರಿ 31ರೊಳಗೆ ಐದೂ ನಗರ ಪಾಲಿಕೆಗಳ ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳುವುದಾಗಿ ರಾಜ್ಯ ಚುನಾವಣಾ ಆಯೋಗ ಭರವಸೆ ನೀಡಿದೆ.
ಇದೇ ಸಮಸ್ಯೆ ರಾಜ್ಯದ ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಮೇಲೂ ಪರಿಣಾಮ ಬೀರಿದೆ. ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು 2025ರ ಅಕ್ಟೋಬರ್ 1ರಂದು ಅಸ್ತಿತ್ವದಲ್ಲಿದ್ದ ಮತದಾರರ ಪಟ್ಟಿಯ ಆಧಾರದಲ್ಲಿ ನಡೆಸಲು ಅನುಮತಿ ನೀಡುವಂತೆಯೂ ಆಯೋಗ ಕೋರಿದೆ.
ಈ ಎಲ್ಲ ಚುನಾವಣೆಗಳಿಗೆ ಅನುಕೂಲವಾಗುವಂತೆ ಅಗತ್ಯ ಮತದಾರರ ದತ್ತಾಂಶವನ್ನು ಶೀಘ್ರ ಒದಗಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದೆ.
ಡಿಸೆಂಬರ್ 31ರ ಗಡುವು ವಿಸ್ತರಣೆಗೆ ಮನವಿ
ಈ ಹಿಂದೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಯನ್ನು ಇದೇ ಡಿಸೆಂಬರ್ 31ರೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿತ್ತು.
ಆದರೆ, ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿರುವುದರಿಂದ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲ.
ಹೀಗಾಗಿ ಹೆಚ್ಚುವರಿ ಕಾಲಾವಕಾಶ ನೀಡುವಂತೆ ರಾಜ್ಯ ಚುನಾವಣಾ ಆಯೋಗ ಈ ಹಿಂದೆಯೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
ಇದೀಗ ಮತದಾರರ ಪಟ್ಟಿಯ ದತ್ತಾಂಶ ಲಭ್ಯತೆಯ ಸಮಸ್ಯೆಯನ್ನು ಮುಂದಿಟ್ಟುಕೊಂಡು ಹಳೆಯ ಪಟ್ಟಿಯನ್ನೇ ಬಳಸಲು ಅನುಮತಿ ಹಾಗೂ ಚುನಾವಣೆಗೆ ಹೆಚ್ಚುವರಿ ಕಾಲಾವಕಾಶ ಕೋರುವ ಮೂಲಕ ಜಿಬಿಎ ಚುನಾವಣೆ ಪ್ರಕ್ರಿಯೆ ಮತ್ತೊಮ್ಮೆ ನ್ಯಾಯಾಲಯದ ಮುಂದಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R