
ಕಲಬುರಗಿ, 13 ನವೆಂಬರ್ (ಹಿ.ಸ.):
ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮದ ಮಹಿಳೆಯರು ಹಾಗೂ ಪುರುಷರು ಖಾಲಿ ಕೊಡಗಳನ್ನು ಹಿಡಿದು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಹದನೂರ ತಾಂಡಾದಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಡಬೂಳ ಗ್ರಾಮ ಪಂಚಾಯಿತಿ ಮುಂಭಾಗ ಜಮಾಯಿಸಿದ ಹದನೂರ ತಾಂಡಾದ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿರುದ್ಧ ಮಹಿಳೆಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪಂಚಾಯಿತಿ ಕಚೇರಿಯಲ್ಲಿ ಪಿಡಿಒ ಹಾಜರಿರದ ಹಿನ್ನೆಲೆಯಲ್ಲಿ ಅಲ್ಲಿನ ಸಿಬ್ಬಂದಿಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.
ನಮ್ಮ ತಾಂಡಾದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳಿಗೆ ಸಮಸ್ಯೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.
ಸಮಸ್ಯೆ ಬಗೆಹರಿಸುವವರೆಗೂ ಗ್ರಾಮ ಪಂಚಾಯಿತಿಯಿಂದ ನಾವು ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಆಗ್ರಹ ಕೇಳಿಬಂದಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R