
ಕಲಬುರಗಿ, 14 ನವೆಂಬರ್ (ಹಿ.ಸ.):
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಚಾಕು ಮತ್ತು ಚೂರಿಗಳನ್ನು ಪಾರ್ಸಲ್ ಮೂಲಕ ಕಳುಹಿಸಿದ ಪ್ರಕರಣವನ್ನು ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಚಾಕು ಮತ್ತು ಚೂರಿಗಳನ್ನು ಪಾರ್ಸಲ್ ಕಳುಹಿಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಚಾಕು ಮತ್ತು ಚೂರಿಗಳನ್ನು ಪಾರ್ಸಲ್ ಕಳುಹಿಸಿರುವ ಘಟನೆ ಖಂಡನೀಯ.
ಇಂತಹ ಕೃತ್ಯಗಳ ಮೂಲಕ ಬೆದರಿಕೆ ಹಾಕುವ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮಾಜಿ ಶಾಸಕರು, ಸಂಸದರು, ಜಿಲ್ಲಾ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R