ಕೆಪಿಎಸ್ಸಿ ಪರೀಕ್ಷೆ ಸುಗಮ ನಿರ್ವಹಣೆಗೆ ಬಿಗಿ ಪೊಲೀಸ್ ಬಂದೋಬಸ್ತ್: ಎಸ್ಪಿ ಸಿದ್ಧಾರ್ಥ್ ಗೋಯೆಲ್
ಬಾಗಲಕೋಟೆ, 14 ನವೆಂಬರ್ (ಹಿ.ಸ.) ಬಾಗಲಕೋಟೆ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 15ರಂದು ನಡೆಯಲಿರುವ ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸುಗಮ, ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾ ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ
ಕೆಪಿಎಸ್ಸಿ ಪರೀಕ್ಷೆ ಸಾಧ್ಯತೆ


ಬಾಗಲಕೋಟೆ, 14 ನವೆಂಬರ್ (ಹಿ.ಸ.)

ಬಾಗಲಕೋಟೆ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 15ರಂದು ನಡೆಯಲಿರುವ ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸುಗಮ, ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾ ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯೆಲ್ ಅವರು ಅಗತ್ಯ ಮಾರ್ಗದರ್ಶನ ನೀಡಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಪರೀಕ್ಷಾ ಅಕ್ರಮಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಆಯೋಗದ ಮಾರ್ಗಸೂಚಿಗಳ ಅನ್ವಯ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ನಿಷೇಧಿತ ವಿದ್ಯುನ್ಮಾನ ಉಪಕರಣಗಳು, ಮೊಬೈಲ್ ದೂರವಾಣಿ ಸೇರಿದಂತೆ ಯಾವುದೇ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೊಠಡಿಯೊಳಗೆ ಕೊಂಡೊಯ್ಯಲು ಅವಕಾಶ ನೀಡಬಾರದು ಎಂದು ಸೂಚಿಸಿದರು.

ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿದ್ದು, ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಅನಧಿಕೃತ ವ್ಯಕ್ತಿಗಳು ಗುಂಪುಗೂಡದಂತೆ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರಗಳ ಸಮೀಪದ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿರುವುದನ್ನು ಖಚಿತಪಡಿಸಿಕೊಳ್ಳಬೇಕು. ದೂರದ ಊರುಗಳಿಂದ ಆಗಮಿಸುವ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರಗಳ ಬಳಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಚಾರ ಪೊಲೀಸರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು, ಉಪ ಪೊಲೀಸ್ ವರಿಷ್ಠಾಧಿಕಾರಿಗಳು, ವೃತ್ತ ನಿರೀಕ್ಷಕರು, ಪೊಲೀಸ್ ಉಪನಿರೀಕ್ಷಕರು ಸೇರಿದಂತೆ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾದ ನೂರಾರು ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande