
ಬೆಂಗಳೂರು, 14 ನವೆಂಬರ್ (ಹಿ.ಸ.):
ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ಮತ್ತು ಪ್ರೀತಿ ನೀಡುವ ಮೂಲಕ ಅವರನ್ನು ಬೆಳೆಸುವುದು ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಕ್ಕಳ ದಿನಾಚರಣೆ ಅಂಗವಾಗಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶುಭಾಶಯ ಕೋರಿರುವ ಅವರು, ಪಂಡಿತ್ ಜವಾಹರಲಾಲ್ ನೆಹರೂ ಅವರ 'ಇಂದಿನ ಮಕ್ಕಳು ನಾಳೆಯ ಭಾರತವನ್ನು ನಿರ್ಮಿಸುತ್ತಾರೆ. ನಾವು ಅವರನ್ನು ಬೆಳೆಸುವ ವಿಧಾನವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ' ಎಂಬ ಮಾತುಗಳನ್ನು ಸ್ಮರಿಸಿದ್ದಾರೆ.
ಚಾಚಾ ನೆಹರೂ ಅವರ ಆಶಯದಂತೆ ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ಮತ್ತು ಪ್ರೀತಿ ನೀಡಿ ಬೆಳೆಸೋಣ. ಮಕ್ಕಳ ಮುಗ್ಧ ನಗು ಎಂದಿಗೂ ಮಾಸದಿರಲಿ ಹಾಗೂ ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿ, ನಾಡಿನ ಎಲ್ಲರಿಗೂ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರನ್ನು ಸ್ಮರಿಸುವುದರೊಂದಿಗೆ ನಾಡಿನ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭಾಶಯ ಕೋರಿದ್ದಾರೆ.
ಇಂದಿನ ಮಕ್ಕಳೇ ದೇಶದ ಭವಿಷ್ಯದ ಹಾಗೂ ವಿಕಸಿತ ಭಾರತದ ನೈಜ ರೂವಾರಿಗಳು. ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ, ಸುರಕ್ಷಿತ ವಾತಾವರಣ ಮತ್ತು ಸುಂದರ ಕನಸುಗಳನ್ನು ಸಾಕಾರಗೊಳಿಸಿಕೊಳ್ಳುವ ಅವಕಾಶಗಳು ದೊರೆಯಬೇಕು. ಮಕ್ಕಳ ಪ್ರತಿಭೆಗಳಿಗೆ ಸೂಕ್ತ ಪ್ರೋತ್ಸಾಹ ನೀಡುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆಶಿಸಿದ್ದಾರೆ.
ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಮಕ್ಕಳಿಗೆ ಜೀವನದ ಮೌಲ್ಯಗಳನ್ನು ಕಲಿಸಿ, ಸಂಸ್ಕಾರವಂತರನ್ನಾಗಿ ಬೆಳೆಸುವುದರ ಜೊತೆಗೆ ಭಾರತದ ಹಿರಿಮೆಯನ್ನು ಪರಿಚಯಿಸುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಹೇಳಿದ್ದಾರೆ.
ಭವಿಷ್ಯದ ನಾಗರಿಕರಾಗಿರುವ ಮಕ್ಕಳಿಗೆ ಉತ್ತಮ ಮೌಲ್ಯಗಳು ಮತ್ತು ಸಂಸ್ಕಾರಗಳನ್ನು ಕಲಿಸುವ ಮೂಲಕ ದೇಶದ ಜವಾಬ್ದಾರಿಯುತ ಪ್ರಜೆಗಳನ್ನಾಗಿ ರೂಪಿಸಬೇಕು. ಈ ಸಂದರ್ಭದಲ್ಲಿ ಎಲ್ಲ ಮುದ್ದು ಮಕ್ಕಳಿಗೂ ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.