ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಶಾಸಕ ಡಾ. ಚಂದ್ರು ಲಮಾಣಿ
ಗದಗ, 14 ನವೆಂಬರ್ (ಹಿ.ಸ.) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಅರಾಜಕತೆ ಸೃಷ್ಟಿಯಾಗಿದ್ದು, ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ಪೂರೈಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಆರೋಪಿಸಿದರು. ಗದಗ ನಗರದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯ
ಫೋಟೋ


ಗದಗ, 14 ನವೆಂಬರ್ (ಹಿ.ಸ.)

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಅರಾಜಕತೆ ಸೃಷ್ಟಿಯಾಗಿದ್ದು, ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ಪೂರೈಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಆರೋಪಿಸಿದರು.

ಗದಗ ನಗರದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಮಾಡಿರುವ ಫೋನ್ ಟ್ರ್ಯಾಪ್ ಆರೋಪವನ್ನು ಸಾಬೀತುಪಡಿಸಲಿ. ರಾಜ್ಯದಲ್ಲಿ ಫೋನ್ ಟ್ರ್ಯಾಪ್ ಹಾಗೂ ಸ್ಟಿಂಗ್ ಆಪರೇಷನ್ಗಳ ಹಿಂದೆ ಯಾರಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಸ್ಟಿಂಗ್ ಆಪರೇಷನ್ ಮಾಡುವುದು ಕಾಂಗ್ರೆಸ್ ಸರ್ಕಾರದ ಪ್ರವೃತ್ತಿಯಾಗಿದೆ ಎಂದು ಟೀಕಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಮಟ್ಟದಲ್ಲಿ ದೂರು ನೀಡಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳು ಹಾಗೂ ಸ್ಟಿಂಗ್ ಆಪರೇಷನ್ ವಿಚಾರವಾಗಿ ದೂರು ಸಲ್ಲಿಸಿರುವ ಬೆಳವಣಿಗೆಗಳ ಬಗ್ಗೆ ಕಾದು ನೋಡಬೇಕಿದೆ. ಮುಂದಿನ ದಿನಗಳಲ್ಲಿ ಯಾರು ಮುಖ್ಯಮಂತ್ರಿಯಾಗುತ್ತಾರೆ, ನಾಯಕತ್ವ ಬದಲಾವಣೆಯಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಶಾಸಕರ ಸಹಿ ಸಂಗ್ರಹದ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸುವರ್ಣಸೌಧಕ್ಕೂ ವಿದ್ಯುತ್ ಕಡಿತದ ಭೀತಿ

ಸುವರ್ಣಸೌಧಕ್ಕೆ ವಿದ್ಯುತ್ ಕಡಿತವಾಗುವ ಭೀತಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸುವರ್ಣಸೌಧ ಮಾತ್ರವಲ್ಲದೆ ರಾಜ್ಯದ ಬಹುತೇಕ ಸರ್ಕಾರಿ ಕಚೇರಿಗಳಲ್ಲಿಯೂ ಇದೇ ಪರಿಸ್ಥಿತಿ ಇದೆ. ನಮ್ಮ ಕ್ಷೇತ್ರದಲ್ಲಿಯೂ ಸರ್ಕಾರಿ ಕಚೇರಿಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಘಟನೆ ನಡೆದಿದೆ. ಮುಂದಿನ ದಿನಗಳಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ಕಚೇರಿಗಳಿಗೂ ವಿದ್ಯುತ್ ಕಡಿತ ಮಾಡುವ ಪರಿಸ್ಥಿತಿ ಎದುರಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ವಿಧಾನಮಂಡಲ ಅಧಿವೇಶನ ನಡೆಯುವುದರಿಂದ ಸುವರ್ಣಸೌಧಕ್ಕೆ ವಿದ್ಯುತ್ ವ್ಯವಸ್ಥೆ ಕಲ್ಪಿಸಬಹುದು. ಆದರೆ ಇಡೀ ರಾಜ್ಯದಲ್ಲಿ ಕತ್ತಲು ಆವರಿಸುವಂತಹ ಪರಿಸ್ಥಿತಿಯನ್ನು ಸರ್ಕಾರ ನಿರ್ಮಿಸಿದೆ. ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್ಡಿಎ ಗೆಲುವು ಸಾಧಿಸಿರುವುದು ಮತದಾರರು ಕಾಂಗ್ರೆಸ್ ವಿರುದ್ಧ ಅಲೆ ಎದ್ದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande