ಶೀಘ್ರ ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಪ್ರಕಟ: ಸಿಎಂ
ಬೆಂಗಳೂರು, 14 ನವೆಂಬರ್ (ಹಿ.ಸ.): ನಿಗಮ ಮಂಡಳಿಗಳಿಗೆ ಕಾರ್ಯಕರ್ತರ ನೇಮಕಾತಿ ಸಂಬಂಧ ಮೊದಲ ಪಟ್ಟಿ ಪ್ರಕಟವಾಗಿದ್ದು, ಎರಡನೇ ಪಟ್ಟಿಯನ್ನು ಒಂದೆರಡು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ಬಳಿಕ ಉಳಿದಿರುವ ಸ್ಥಾನಗಳಿಗೂ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿ
DK Shivakumar Announces Second List Of Corporation Board Appointments In Two Days


ಬೆಂಗಳೂರು, 14 ನವೆಂಬರ್ (ಹಿ.ಸ.):

ನಿಗಮ ಮಂಡಳಿಗಳಿಗೆ ಕಾರ್ಯಕರ್ತರ ನೇಮಕಾತಿ ಸಂಬಂಧ ಮೊದಲ ಪಟ್ಟಿ ಪ್ರಕಟವಾಗಿದ್ದು, ಎರಡನೇ ಪಟ್ಟಿಯನ್ನು ಒಂದೆರಡು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು.

ಬಳಿಕ ಉಳಿದಿರುವ ಸ್ಥಾನಗಳಿಗೂ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಶನಿವಾರ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರಿಗೆ ಅಧಿಕಾರ ನೀಡುವ ಕುರಿತು ಮಾಹಿತಿ ನೀಡಿದರು.

“ಮುಂದಿನ ದಿನಗಳಲ್ಲಿ ಪಂಚಾಯಿತಿ ಹಾಗೂ ವಾರ್ಡ್ ಮಟ್ಟಗಳಲ್ಲಿ ಭಾರತ ಜೋಡೋ ಸಂಘಗಳಿಗೆ ಸದಸ್ಯರನ್ನು ನೇಮಕ ಮಾಡಬೇಕು. ಗ್ಯಾರಂಟಿ ಸಮಿತಿಗಳಿಗೆ ಈಗಾಗಲೇ 40 ಸಾವಿರ ಜನರನ್ನು ನೇಮಕ ಮಾಡಲಾಗಿದ್ದು, ಇನ್ನೂ 20 ಸಾವಿರ ಸದಸ್ಯರ ನೇಮಕ ಪ್ರಕ್ರಿಯೆ ನಡೆಯುತ್ತಿದೆ.

ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರಮುಖವಾಗಿದ್ದು, ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ಇದೆ. ದೇಶವೇ ನಮ್ಮ ಗ್ಯಾರಂಟಿ ಯೋಜನೆಗಳನ್ನು ಗಮನಿಸುತ್ತಿದೆ” ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ವಿಚಾರವಾಗಿ ಪಕ್ಷದ ವತಿಯಿಂದ ವಿಶೇಷ ಆ್ಯಪ್ ಸಿದ್ಧಪಡಿಸಲಾಗಿದೆ. ಮತಪಟ್ಟಿಯಿಂದ ಕೈಬಿಡಲಾಗಿರುವ ಅರ್ಹ ಮತದಾರರ ಹೆಸರುಗಳನ್ನು ಮತ್ತೆ ಸೇರ್ಪಡೆಗೊಳಿಸಲು ಕಾರ್ಯಕರ್ತರು ಶ್ರಮಿಸಬೇಕು. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ನೆಹರು ಕೊಡುಗೆ ಮರೆಯಲು ಸಾಧ್ಯವಿಲ್ಲ

“ದೇಶದ ಕೈಗಾರಿಕಾ ಕ್ರಾಂತಿ, ಹಸಿರು ಕ್ರಾಂತಿ ಹಾಗೂ ಕ್ಷೀರ ಕ್ರಾಂತಿಗೆ ಪಂಡಿತ್ ಜವಾಹರಲಾಲ್ ನೆಹರು ಅವರು ಬುನಾದಿ ಹಾಕಿದರು. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆ ಅಪಾರ.

ನಮ್ಮ ವಿಧಾನಸೌಧಕ್ಕೂ ಶಂಕುಸ್ಥಾಪನೆ ಮಾಡಿದವರು ನೆಹರು. ಸಂವಿಧಾನ ರಚನೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಕಾಶ ಕಲ್ಪಿಸುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದರು” ಎಂದು ಸ್ಮರಿಸಿದರು.

“ಮಕ್ಕಳೇ ದೇಶದ ನಿಜವಾದ ಸಂಪತ್ತು. ಅವರ ಶಿಕ್ಷಣದ ಮೇಲಿನ ಹೂಡಿಕೆಯೇ ದೇಶದ ಭವಿಷ್ಯಕ್ಕೆ ಮಾಡುವ ದೊಡ್ಡ ಹೂಡಿಕೆ. ಮಕ್ಕಳ ಕನಸುಗಳಲ್ಲಿಯೇ ದೇಶದ ಭವಿಷ್ಯ ಅಡಗಿದೆ. ಪ್ರತಿ ಮನೆಯಲ್ಲೂ ಮಕ್ಕಳಿಗೆ ಪ್ರೋತ್ಸಾಹ ನೀಡಿದಾಗ ಮಾತ್ರ ದೇಶದ ಭವಿಷ್ಯ ಗಟ್ಟಿಯಾಗಲು ಸಾಧ್ಯ. ನೆಹರು ಅವರಿಗೆ ಮಕ್ಕಳ ಮೇಲೆ ಅಪಾರ ಪ್ರೀತಿ ಇತ್ತು. ‘ನಾಳೆ ನಿಮ್ಮದು’ ಎಂಬ ಸಂದೇಶವನ್ನು ಅವರು ಮಕ್ಕಳಿಗೆ ನೀಡಿದ್ದರು” ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನೆಹರು ಅವರು ತಮ್ಮ ಪುತ್ರಿ ಇಂದಿರಾ ಗಾಂಧಿ ಅವರಿಗೆ ಬರೆದ ಪತ್ರಗಳಲ್ಲಿನ ವಿಚಾರಗಳನ್ನು ಎಲ್ಲರೂ ಓದಬೇಕು. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪುಗೊಂಡ ಸಂವಿಧಾನದ ಅಡಿಯಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸುತ್ತಿದ್ದೇವೆ.

ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ನೆಹರು ಅವರು ದೇಶ ಛಿದ್ರವಾಗದಂತೆ 550ಕ್ಕೂ ಹೆಚ್ಚು ರಾಜಸಂಸ್ಥಾನಗಳನ್ನು ಒಗ್ಗೂಡಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬುನಾದಿ ಹಾಕಿದರು ಎಂದು ಹೇಳಿದರು.

ಬೆಂಗಳೂರಿನಿಂದಲೇ ಹಲವು ಸಂಸ್ಥೆಗಳ ಆರಂಭ

“ನೆಹರು ಅವರ ಪಂಚವಾರ್ಷಿಕ ಯೋಜನೆಗಳ ಜತೆಗೆ ಎಚ್ಎಂಟಿ, ಐಟಿಐ, ಇಸ್ರೋ ಸೇರಿದಂತೆ ಹಲವು ಸಾರ್ವಜನಿಕ ಉದ್ದಿಮೆಗಳು ಮತ್ತು ಕೈಗಾರಿಕೆಗಳ ಸ್ಥಾಪನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

ಬೆಂಗಳೂರಿನಿಂದಲೇ ಹಲವು ಸಂಸ್ಥೆಗಳ ಬೆಳವಣಿಗೆಗೆ ಚಾಲನೆ ದೊರೆತಿದ್ದು, ದೇಶದ ಪ್ರಗತಿಗೆ ಅವರು ಹಾಕಿದ ಬುನಾದಿಯನ್ನು ಕರ್ನಾಟಕದ ಜನತೆ ಮರೆಯಲು ಸಾಧ್ಯವಿಲ್ಲ. ಅವರ ದೂರದೃಷ್ಟಿ, ತ್ಯಾಗ ಮತ್ತು ಚಿಂತನೆಗಳು ಇಂದಿಗೂ ನಮಗೆ ಮಾರ್ಗದರ್ಶನ ನೀಡುತ್ತಿವೆ” ಎಂದು ತಿಳಿಸಿದರು.

ನೆಹರು ಕುಟುಂಬ ತಮ್ಮ ಆಸ್ತಿಪಾಸ್ತಿಗಳನ್ನು ದೇಶಕ್ಕಾಗಿ ತ್ಯಾಗ ಮಾಡಿದೆ. ನೆಹರು ಅವರು ಅಲಹಾಬಾದ್ ಪುರಸಭೆಯ ಅಧ್ಯಕ್ಷ ಸ್ಥಾನದಿಂದ ದೇಶದ ಪ್ರಧಾನಮಂತ್ರಿ ಹುದ್ದೆಯವರೆಗೆ ಬೆಳೆದವರು.

ಕೆಂಗಲ್ ಹನುಮಂತಯ್ಯ, ರಾಜಗೋಪಾಲಾಚಾರಿ ಮತ್ತು ಬಿ.ಡಿ. ಜತ್ತಿ ಸೇರಿದಂತೆ ಅನೇಕ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಮೂಲಕ ರಾಜಕೀಯ ಜೀವನ ಆರಂಭಿಸಿ ಉನ್ನತ ಸ್ಥಾನಕ್ಕೇರಿದ್ದಾರೆ ಎಂದರು.

“ಎಲ್ಲರೂ ಶಾಸಕರಾಗಿಯೇ ರಾಜಕೀಯ ಆರಂಭಿಸಬೇಕೆಂದಿಲ್ಲ. ನಾವೆಲ್ಲರೂ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲೂಕು ಬೋರ್ಡ್ ಸದಸ್ಯರಾಗಿದ್ದರು.

ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಒಂದೆರಡಲ್ಲ, ಸಾವಿರಾರು ಕೆಲಸಗಳನ್ನು ಮಾಡಿದ್ದಾರೆ” ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande