ಬಿಸಿಯೂಟ ಸಿಬ್ಬಂದಿ ವೇತನಕ್ಕೆ ಆಗ್ರಹಿಸಿ ದಾವಣಗೆರೆಯಲ್ಲಿ ಪ್ರತಿಭಟನೆ
ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಎಸಿ ಕಚೇರಿ ಮುಂದೆ ಧರಣಿ
Davanagere-Midday-Meal-Workers-Protest-For-Pending-Salaries


ದಾವಣಗೆರೆ, 14 ನವೆಂಬರ್ (ಹಿ.ಸ.):

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸಿ ಬಡಿಸುವ ಮೂಲಕ ಅವರ ಹಸಿವು ನೀಗಿಸುವ ಕಾರ್ಯದಲ್ಲಿ ತೊಡಗಿರುವ ಅಕ್ಷರ ದಾಸೋಹ ಬಿಸಿಯೂಟ ಸಿಬ್ಬಂದಿಯೇ ಇದೀಗ ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕಳೆದ ನಾಲ್ಕೈದು ತಿಂಗಳಿಂದ ಬಿಸಿಯೂಟ ತಯಾರಿಸುವ ಮಹಿಳಾ ಸಿಬ್ಬಂದಿಗೆ ವೇತನ ಪಾವತಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಿಕಾ ಸಿಬ್ಬಂದಿ ದಾವಣಗೆರೆ ಸಹಾಯಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ತಿಂಗಳುಗಟ್ಟಲೆ ದುಡಿದರೂ ಕೈಗೆ ಸಂಬಳ ಸಿಗದಿರುವುದರಿಂದ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ದಿನನಿತ್ಯದ ಜೀವನ ನಿರ್ವಹಣೆ, ಮಕ್ಕಳ ಶಿಕ್ಷಣ ಹಾಗೂ ಮನೆಯ ಖರ್ಚುಗಳನ್ನು ನಿಭಾಯಿಸಲು ಪರದಾಡುವಂತಾಗಿದೆ ಎಂದು ಪ್ರತಿಭಟನಾನಿರತ ಮಹಿಳಾ ಸಿಬ್ಬಂದಿ ತಮ್ಮ ಅಳಲು ತೋಡಿಕೊಂಡರು.

ಶಾಲಾ ಮಕ್ಕಳಿಗೆ ಪ್ರತಿದಿನ ಅಡುಗೆ ತಯಾರಿಸಿ ಊಟ ನೀಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇವೆ. ಆದರೆ ನಮ್ಮ ದುಡಿಮೆಗೆ ಸಕಾಲದಲ್ಲಿ ವೇತನ ನೀಡದಿರುವುದು ಅನ್ಯಾಯವಾಗಿದೆ. ತಿಂಗಳುಗಟ್ಟಲೆ ಸಂಬಳವಿಲ್ಲದೆ ಕೆಲಸ ಮಾಡುವುದು ಹೇಗೆ ಸಾಧ್ಯ? ಸರ್ಕಾರ ಕೂಡಲೇ ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande