ವಿಶ್ವ ಶೂಟಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ದಿವ್ಯಾ ಟಿ.ಎಸ್.; ಡಿಸಿಎಂ ಪರಮೇಶ್ವರ್ ಅಭಿನಂದನೆ
ದೋಹಾದಲ್ಲಿ ನಡೆದ ಐಎಸ್ಎಸ್ಎಫ್ ವಿಶ್ವ ಶೂಟಿಂಗ್ ಚಾಂಪಿಯನ್ಶಿಪ್ನ 25 ಮೀಟರ್ ಪಿಸ್ತೂಲ್ ತಂಡ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ದಿವ್ಯಾ ಟಿ.ಎಸ್. ಅವರನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅಭಿನಂದಿಸಿ, ಯುವ ಕ್ರೀಡಾಪಟುಗಳಿಗೆ ಅವರ ಸಾಧನೆ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.
Divya TS Wins Gold at ISSF World Shooting Championship, DCM Parameshwara Felicitates Her


ಬೆಂಗಳೂರು, 14 ನವೆಂಬರ್ (ಹಿ.ಸ.):

ದೋಹಾದಲ್ಲಿ ಇತ್ತೀಚೆಗೆ ನಡೆದ ಐಎಸ್ಎಸ್ಎಫ್ ವಿಶ್ವ ಶೂಟಿಂಗ್ ಚಾಂಪಿಯನ್ಶಿಪ್ನ 25 ಮೀಟರ್ ಪಿಸ್ತೂಲ್ ತಂಡ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಕರ್ನಾಟಕದ ಕ್ರೀಡಾಪಟು ದಿವ್ಯಾ ಟಿ.ಎಸ್. ಅವರನ್ನು ಉಪಮುಖ್ಯಮಂತ್ರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ಅಭಿನಂದಿಸಿ ಶುಭ ಹಾರೈಸಿದರು.

ಶನಿವಾರ ಸದಾಶಿವನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ದಿವ್ಯಾ ಅವರನ್ನು ಭೇಟಿಯಾದ ಪರಮೇಶ್ವರ್, ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಜಿ. ಪರಮೇಶ್ವರ್, ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವುದು ಸುಲಭದ ಸಾಧನೆಯಲ್ಲ. ದಿವ್ಯಾ ಅವರು ತಮ್ಮ ನಿರಂತರ ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸದ ಮೂಲಕ ಈ ಸಾಧನೆ ಮಾಡಿದ್ದಾರೆ.

ವಿಶ್ವಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟಿರುವುದು ಸಂತಸದ ಸಂಗತಿ. ಇದು ಕನ್ನಡಿಗರಿಗೆ ಹೆಮ್ಮೆ ತಂದಿದೆ ಎಂದು ಹೇಳಿದರು.

ದಿವ್ಯಾ ಅವರ ಸಾಧನೆ ರಾಜ್ಯದ ಯುವ ಕ್ರೀಡಾಪಟುಗಳಿಗೆ, ವಿಶೇಷವಾಗಿ ಶೂಟಿಂಗ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವವರಿಗೆ ಸ್ಫೂರ್ತಿಯಾಗಲಿ.

ಪ್ರತಿಭೆಯ ಜೊತೆಗೆ ನಿರಂತರ ಅಭ್ಯಾಸ, ಕಠಿಣ ಪರಿಶ್ರಮ ಮತ್ತು ಸಾಧಿಸುವ ಛಲವಿದ್ದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಯಶಸ್ಸು ಗಳಿಸಬಹುದು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿಯೂ ದಿವ್ಯಾ ಅವರು ಇನ್ನಷ್ಟು ಉತ್ತಮ ಪ್ರದರ್ಶನ ನೀಡಿ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪದಕಗಳನ್ನು ಗೆಲ್ಲಲಿ.

ಅವರ ಕ್ರೀಡಾ ಸಾಧನೆಯ ಪಯಣ ಹೀಗೆಯೇ ಮುಂದುವರಿದು ದೇಶ ಮತ್ತು ರಾಜ್ಯಕ್ಕೆ ಮತ್ತಷ್ಟು ಕೀರ್ತಿ ತರಲಿ ಎಂದು ಡಾ. ಜಿ. ಪರಮೇಶ್ವರ್ ಹಾರೈಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande