
ಬಾಗಲಕೋಟೆ, 14 ನವೆಂಬರ್ (ಹಿ.ಸ.)
ಕೃಷ್ಣಾ ನದಿಯಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ಬೇಸಿಗೆಯಲ್ಲಿ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುವುದನ್ನು ತಡೆಗಟ್ಟಲು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯ ಜಾಕ್ವೆಲ್ ಸೇರಿದಂತೆ ನದಿಗೆ ಅಳವಡಿಸಿರುವ ಎಲ್ಲ ಜಾಕ್ವೆಲ್ಗಳ ಕಾರ್ಯಾಚರಣೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಧಾರೆಪ್ಪ ಧನಿಗೊಂಡ ಆಗ್ರಹಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ನೀರಾವರಿ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕೃಷ್ಣಾ ನದಿಯಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಕಡಿಮೆಯಾಗಿದ್ದು, ನದಿ ಬರಿದಾಗುವ ಹಂತ ತಲುಪಿದೆ. ಇಂತಹ ಸಂದರ್ಭದಲ್ಲಿ ಬೃಹತ್ ಜಾಕ್ವೆಲ್ಗಳ ಮೂಲಕ ನಿರಂತರವಾಗಿ ನೀರು ಎತ್ತುವುದರಿಂದ ನದಿ ಪಾತ್ರದ ಗ್ರಾಮಗಳು ಮತ್ತು ಪಟ್ಟಣಗಳಲ್ಲಿ ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿಗೂ ತೀವ್ರ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಸೇರಿದಂತೆ ಕೃಷ್ಣಾ ನದಿಗೆ ಅಳವಡಿಸಿರುವ ಎಲ್ಲ ಜಾಕ್ವೆಲ್ಗಳ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು. ಮುಂಬರುವ ಬೇಸಿಗೆ ಮುಗಿದು ಮಳೆಗಾಲ ಆರಂಭವಾಗುವವರೆಗೂ ನದಿಯಿಂದ ನೀರು ಎತ್ತಲು ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಿರುವುದಾಗಿ ತಿಳಿಸಿದರು.
ಕೃಷ್ಣಾ ನದಿಯಲ್ಲಿ ಉಳಿದಿರುವ ಅಲ್ಪ ಪ್ರಮಾಣದ ನೀರನ್ನು ಸಾರ್ವಜನಿಕರ ಕುಡಿಯುವ ಉದ್ದೇಶಕ್ಕೆ ಮಾತ್ರ ಮೀಸಲಿಡಬೇಕು. ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ ಜಾಕ್ವೆಲ್ಗಳ ಕಾರ್ಯಾಚರಣೆ ಮುಂದುವರಿಸಿದರೆ, ನದಿ ತೀರದ ರೈತರು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಧಾರೆಪ್ಪ ಧನಿಗೊಂಡ ಎಚ್ಚರಿಕೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande