ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಭಾಗವಹಿಸಬೇಕಿದ್ದ ಕಾರ್ಯಕ್ರಮ ದಿಢೀರ್ ರದ್ದು: ಕಾಲೇಜು ಆಡಳಿತ ಮಂಡಳಿ ವಿರುದ್ಧ ಅಭಿಮಾನಿಗಳ ಆಕ್ರೋಶ
ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭಾಗವಹಿಸಬೇಕಿದ್ದ ವಿದ್ಯಾರ್ಥಿಗಳಿಗೆ ನೀರಿನ ಬಾಟಲ್ ವಿತರಣೆ ಕಾರ್ಯಕ್ರಮ ದಿಢೀರ್ ರದ್ದಾಗಿದೆ. ಕಾರ್ಯಕ್ರಮದ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಹೆಚ್.ಡಿ.ಕೆ ಅಭಿಮಾನಿ ಚಂದನ್ ಆರೋಪಿಸಿದ್ದು, ಕಾಲೇಜು ಆಡಳಿತ ಮಂಡಳಿ ವಿರುದ್ಧ
HDK-Programme-Cancelled-in-Mandya-Allegations-of-Political-Conspiracy


ಮಂಡ್ಯ, 14 ನವೆಂಬರ್ (ಹಿ.ಸ.):

ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳಿಗೆ ನೀರಿನ ಬಾಟಲ್ ವಿತರಣೆ ಕಾರ್ಯಕ್ರಮ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಭಾಗವಹಿಸುವಿಕೆಗೆ ಮುನ್ನವೇ ದಿಢೀರ್ ರದ್ದುಗೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ.

ಕಾರ್ಯಕ್ರಮ ರದ್ದತಿಯ ಹಿಂದೆ ರಾಜಕೀಯ ಒತ್ತಡ ಹಾಗೂ ಕಾಣದ ಕೈಗಳ ಹಸ್ತಕ್ಷೇಪವಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿಗಳು ಆರೋಪಿಸಿದ್ದು, ಕಾಲೇಜು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀರಿನ ಬಾಟಲ್ ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಬಾಟಲ್ ವಿತರಿಸಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಕಾಲೇಜು ಆಡಳಿತ ಮಂಡಳಿ ಕಾರ್ಯಕ್ರಮವನ್ನು ರದ್ದುಗೊಳಿಸಿದೆ ಎನ್ನಲಾಗಿದೆ.

ಇದರಿಂದ ಅಸಮಾಧಾನಗೊಂಡ ಅಭಿಮಾನಿಗಳು ಕಾಲೇಜಿಗೆ ತೆರಳಿ ತಾವೇ ವಿದ್ಯಾರ್ಥಿಗಳಿಗೆ ನೀರಿನ ಬಾಟಲ್ ವಿತರಿಸುವ ಮೂಲಕ ಕಾರ್ಯಕ್ರಮವನ್ನು ಮುಂದುವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಡಿ.ಕೆ. ಅಭಿಮಾನಿ ಚಂದನ್, ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಶಾಸಕರು ಪ್ರತಿಯೊಂದು ವಿಚಾರದಲ್ಲೂ ಅಡ್ಡಿ ಹುಡುಕುವ ಕೆಲಸ ಮಾಡಬಾರದು. ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ದೊರೆಯಲು ಸಹಕಾರ ನೀಡಬೇಕು. ಕಾರ್ಯಕ್ರಮ ರದ್ದುಗೊಳಿಸಿದವರು ರಾಜಕೀಯ ಮಾಡುವುದನ್ನು ಬಿಟ್ಟು ಉತ್ತಮ ರಾಜಕಾರಣ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮವನ್ನು ಕೊನೆಯ ಕ್ಷಣದಲ್ಲಿ ಏಕೆ ರದ್ದುಗೊಳಿಸಲಾಯಿತು? ಕಾಲೇಜಿನ ವಿದ್ಯಾರ್ಥಿ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಅಧ್ಯಕ್ಷರು ಯಾರು? ಎಲ್ಲವೂ ತಮ್ಮದೇ ನಡೆಯಬೇಕು ಎಂಬ ಮನೋಭಾವವನ್ನು ಬಿಟ್ಟು ಒಳ್ಳೆಯ ಕೆಲಸಗಳಿಗೆ ಸಹಕಾರ ನೀಡಬೇಕು ಎಂದು ಚಂದನ್ ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande