ಕಬ್ಬಿಗೆ ₹3,600 ಬೆಂಬಲ ಬೆಲೆಗೆ ಆಗ್ರಹಿಸಿ ಕಲಬುರಗಿಯಲ್ಲಿ ರೈತರ ಪ್ರತಿಭಟನೆ; ಡಿಸಿ ಕಚೇರಿಗೆ ಮುತ್ತಿಗೆ ಯತ್ನ
ಕಬ್ಬಿಗೆ ಪ್ರತಿ ಟನ್ಗೆ ₹3,600 ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಕಬ್ಬು ಬೆಳೆಗಾರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಚುನ್ನಪ್ಪ ಪೂಜಾರಿ ಹಾಗೂ ಶಶಿಕಾಂತ ಗುರೂಜಿ ನೇತೃತ್ವದಲ್ಲಿ ನಡೆದ ಹೋರಾಟದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ 20 ರೈತರೊಂದಿಗೆ ಸಭೆ ನಡೆಸಲು ಮುಂದಾಗಿದೆ
Kalaburagi-Sugarcane-Farmers-Protest-Demanding-Rs-3600-Support-Price


ಕಲಬುರಗಿ, 14 ನವೆಂಬರ್ (ಹಿ.ಸ.):

ಕಬ್ಬಿಗೆ ಪ್ರತಿ ಟನ್ಗೆ ₹3,600 ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಶನಿವಾರ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ದ್ವಿಚಕ್ರ ವಾಹನ, ಕಾರು ಹಾಗೂ ಗೂಡ್ಸ್ ವಾಹನಗಳಲ್ಲಿ ರೈತರು ಕಲಬುರಗಿ ನಗರಕ್ಕೆ ಆಗಮಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯತ್ತ ಮೆರವಣಿಗೆಯಲ್ಲಿ ತೆರಳಿ ಧರಣಿ ಕುಳಿತರು. ರೈತ ಮುಖಂಡರಾದ ಚುನ್ನಪ್ಪ ಪೂಜಾರಿ ಹಾಗೂ ಶಶಿಕಾಂತ ಗುರೂಜಿ ಪ್ರತಿಭಟನೆಗೆ ನೇತೃತ್ವ ವಹಿಸಿದ್ದರು.

ಈಗಾಗಲೇ ಜಿಲ್ಲಾಡಳಿತವು ಪ್ರತಿ ಟನ್ ಕಬ್ಬಿಗೆ ₹3,450 ನೀಡಲು ನಿರ್ಧರಿಸಿದೆ ಎನ್ನಲಾಗಿದ್ದು, ಇದಕ್ಕೆ ರೈತರು ತೃಪ್ತರಾಗಿಲ್ಲ. ₹3,600 ಬೆಂಬಲ ಬೆಲೆ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ರೈತರು-ಅಧಿಕಾರಿಗಳ ನಡುವೆ ಸಭೆ

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಜಿಲ್ಲಾಡಳಿತವು ರೈತರೊಂದಿಗೆ ಮಾತುಕತೆಗೆ ಮುಂದಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ರೈತರ ನಡುವೆ ಸಭೆ ನಡೆಸಲು ನಿರ್ಧರಿಸಲಾಗಿದ್ದು,

ರೈತ ಹೋರಾಟದ ಮುಖಂಡರಾದ ಚುನ್ನಪ್ಪ ಪೂಜಾರಿ ಮತ್ತು ಶಶಿಕಾಂತ ಗುರೂಜಿ ನೇತೃತ್ವದಲ್ಲಿ 20 ಜನ ರೈತರ ನಿಯೋಗದೊಂದಿಗೆ ಸಭೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande