ಲಚ್ಯಾಣ ರೈಲು ನಿಲ್ದಾಣದಲ್ಲಿ ಬಸವ, ಗೋಳಗುಂಬಜ್ ಎಕ್ಸ್ಪ್ರೆಸ್ ರೈಲುಗಳಿಗೆ ನಿಲುಗಡೆ
ವಿಜಯಪುರ, 14 ನವೆಂಬರ್ (ಹಿ.ಸ.) ವಿಜಯಪುರ ಜಿಲ್ಲೆಯ ಲಚ್ಯಾಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ರೈಲ್ವೆ ಇಲಾಖೆ, ಪಂಢರಪುರದಿಂದ ಮೈಸೂರಿಗೆ ಸಂಚರಿಸುವ ಗೋಳಗುಂಬಜ್ ಎಕ್ಸ್‌ಪ್ರೆಸ್ ಹಾಗೂ ಬಸವ ಎಕ್ಸ್‌ಪ್ರೆಸ್ ರೈಲುಗಳಿಗೆ ಲಚ್ಯಾಣ ರೈಲು ನಿಲ್ದಾಣದಲ್ಲಿ ನಿಲು
ಹೊಸ ರೈಲು


ವಿಜಯಪುರ, 14 ನವೆಂಬರ್ (ಹಿ.ಸ.)

ವಿಜಯಪುರ ಜಿಲ್ಲೆಯ ಲಚ್ಯಾಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ರೈಲ್ವೆ ಇಲಾಖೆ, ಪಂಢರಪುರದಿಂದ ಮೈಸೂರಿಗೆ ಸಂಚರಿಸುವ ಗೋಳಗುಂಬಜ್ ಎಕ್ಸ್‌ಪ್ರೆಸ್ ಹಾಗೂ ಬಸವ ಎಕ್ಸ್‌ಪ್ರೆಸ್ ರೈಲುಗಳಿಗೆ ಲಚ್ಯಾಣ ರೈಲು ನಿಲ್ದಾಣದಲ್ಲಿ ನಿಲುಗಡೆ ಕಲ್ಪಿಸಲು ಅನುಮೋದನೆ ನೀಡಿದೆ.

ವಿಜಯಪುರ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರ ಸತತ ಪ್ರಯತ್ನ ಮತ್ತು ಮನವಿಗೆ ಸ್ಪಂದಿಸಿರುವ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು 2026ರ ಅಕ್ಟೋಬರ್ 29ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ ಎಂದು ಸಂಸದರ ಪ್ರಕಟಣೆ ತಿಳಿಸಿದೆ.

ಕಳೆದ ಹಲವು ವರ್ಷಗಳಿಂದ ಲಚ್ಯಾಣ ರೈಲು ನಿಲ್ದಾಣದಲ್ಲಿ ಗೋಳಗುಂಬಜ್ ಎಕ್ಸ್‌ಪ್ರೆಸ್ ರೈಲಿಗೆ ನಿಲುಗಡೆ ಕಲ್ಪಿಸಬೇಕೆಂಬ ಬೇಡಿಕೆ ಇತ್ತು. ಶ್ರೀ ಸಿದ್ಧಲಿಂಗ ಮಹಾರಾಜರ ಪುಣ್ಯಕ್ಷೇತ್ರವಾಗಿರುವ ಲಚ್ಯಾಣಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಅಲ್ಲದೆ, ಈ ಭಾಗದ ರೈತರು, ವಿದ್ಯಾರ್ಥಿಗಳು ಮತ್ತು ವ್ಯಾಪಾರಸ್ಥರಿಗೂ ರೈಲು ನಿಲುಗಡೆಯ ಅಗತ್ಯವಿತ್ತು.

ಪ್ರಯಾಣಿಕರ ಸಮಸ್ಯೆಯನ್ನು ಮನಗಂಡ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ, ಲಚ್ಯಾಣ ನಿಲ್ದಾಣದಲ್ಲಿ ರೈಲುಗಳ ನಿಲುಗಡೆ ಕಲ್ಪಿಸುವಂತೆ ಮನವಿ ಸಲ್ಲಿಸಿದ್ದರು.

ನಿಲುಗಡೆಗೆ ಅನುಮೋದನೆ ದೊರೆತಿರುವ ರೈಲುಗಳ ವಿವರ ಹೀಗಿದೆ:

* ಮೈಸೂರು–ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 17307/17308).

* ಮೈಸೂರು–ಪಂಢರಪುರ ಗೋಳಗುಂಬಜ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16535/16536).

ಈ ನಿರ್ಧಾರಕ್ಕೆ ಹರ್ಷ ವ್ಯಕ್ತಪಡಿಸಿರುವ ಸಂಸದ ರಮೇಶ ಜಿಗಜಿಣಗಿ, ಲಚ್ಯಾಣ ರೈಲು ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಅನುಮೋದನೆ ನೀಡುವ ಮೂಲಕ ಕೇಂದ್ರ ಸರ್ಕಾರ ಈ ಭಾಗದ ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದೆ. ಇದರಿಂದ ಲಚ್ಯಾಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು, ವಿದ್ಯಾರ್ಥಿಗಳು, ವ್ಯಾಪಾರಸ್ಥರು ಮತ್ತು ಪಂಢರಪುರ–ಮೈಸೂರು ಮಾರ್ಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಮನವಿಗೆ ಸ್ಪಂದಿಸಿ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ ಹಾಗೂ ಸಚಿವ ವಿ. ಸೋಮಣ್ಣ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande