
ವಿಜಯಪುರ, 14 ನವೆಂಬರ್ (ಹಿ.ಸ.)
ಸರ್ಕಾರಿ ಶಾಲೆಗಳನ್ನು ಬಲಪಡಿಸುವುದು ಹಾಗೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ನಗರದ ಗಾಂಧಿ ಚೌಕ್ ಸಮೀಪದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಿವಂಗತ ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಗ್ರಾಮೀಣ ಕೃಪಾಂಕದ ಯೋಜನೆಯಿಂದ ಗ್ರಾಮೀಣ ಭಾಗದ ಅನೇಕ ಯುವಕರಿಗೆ ಸರ್ಕಾರಿ ಉದ್ಯೋಗ ಪಡೆಯಲು ಅವಕಾಶ ದೊರೆತಿದೆ. ಅದೇ ರೀತಿ ನಮ್ಮ ಸರ್ಕಾರವೂ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಹಾಗೂ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಬದ್ಧವಾಗಿದೆ ಎಂದರು.
ರಾಜ್ಯಾದ್ಯಂತ ಆಯೋಜಿಸಿದ್ದ ಬೃಹತ್ ಪೋಷಕ-ಶಿಕ್ಷಕರ ಸಭೆಯ ಮೂಲಕ ಸುಮಾರು 42 ಸಾವಿರ ಸರ್ಕಾರಿ ಶಾಲೆಗಳನ್ನು ಆನ್ಲೈನ್ ವ್ಯವಸ್ಥೆಗೆ ತರಲಾಗಿದೆ. ಪೋಷಕರ ಸಭೆಗಳ ಮೂಲಕ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಶೈಕ್ಷಣಿಕ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಮಕ್ಕಳ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಾತನಾಡಿ, ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಪುಟಾಣಿ ಮಕ್ಕಳೊಂದಿಗೆ ಸಂಭ್ರಮ ಹಂಚಿಕೊಳ್ಳುತ್ತಿರುವುದು ಸಂತಸ ತಂದಿದೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ದೊರೆಯುವ ಪ್ರಾಥಮಿಕ ಶಿಕ್ಷಣ ಅವರ ಭವಿಷ್ಯದ ಬದುಕಿಗೆ ಭದ್ರ ಬುನಾದಿಯಾಗಿದೆ. ಮಕ್ಕಳಲ್ಲಿರುವ ಜ್ಞಾನ, ಪ್ರತಿಭೆ ಮತ್ತು ಸಾಮರ್ಥ್ಯ ಅನಾವರಣಗೊಳ್ಳಲು ಸೂಕ್ತ ವೇದಿಕೆ ಹಾಗೂ ಅವಕಾಶಗಳನ್ನು ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಶಿಕ್ಷಕರು ಶಾಲೆಯ ಹೃದಯವಿದ್ದಂತೆ. ಉತ್ತಮ ಶಿಕ್ಷಕರಿಂದಲೇ ಶಾಲೆಗೆ ನಿಜವಾದ ಶೋಭೆ ಬರುತ್ತದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರವನ್ನೂ ನೀಡಿದಾಗ ಅವರ ಉಜ್ವಲ ಭವಿಷ್ಯ ರೂಪುಗೊಳ್ಳುವುದರೊಂದಿಗೆ ಇಡೀ ಸಮಾಜದ ಒಳಿತಿಗೂ ಸಹಕಾರಿಯಾಗುತ್ತದೆ ಎಂದು ಶಿಕ್ಷಕರ ಜವಾಬ್ದಾರಿಯನ್ನು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ಆನಂದ್, ವಿಡಿಎ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಉಪ್ಪಾರ್, ಪ್ರಮುಖ ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಅನಿಸಾ ಮುಜಾವರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಭಾಗವಹಿಸಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande