ವಿಜಯಪುರ: ಬಾವೂರು ಗ್ರಾಮದಲ್ಲಿ ಪ್ರಜಾಸೇವೆ ಆಂದೋಲನ ಯಶಸ್ವಿ
ವಿಜಯಪುರ, 14 ನವೆಂಬರ್ (ಹಿ.ಸ.) ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಿ, ಆಡಳಿತ ಯಂತ್ರವನ್ನೇ ಜನರ ಮನೆಬಾಗಿಲಿಗೆ ಕೊಂಡೊಯ್ದು ಸ್ಥಳದಲ್ಲೇ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಪ್ರಜಾಸೇವೆ ಆಂದೋಲನ’ ಕಾರ್ಯಕ್ರಮ ತಾಳಿಕೋಟಿ ತಾಲೂಕಿನ ಬಾವೂರು
ಪ್ರಜಾ ಸೇವೆ


ವಿಜಯಪುರ, 14 ನವೆಂಬರ್ (ಹಿ.ಸ.)

ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಿ, ಆಡಳಿತ ಯಂತ್ರವನ್ನೇ ಜನರ ಮನೆಬಾಗಿಲಿಗೆ ಕೊಂಡೊಯ್ದು ಸ್ಥಳದಲ್ಲೇ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಪ್ರಜಾಸೇವೆ ಆಂದೋಲನ’ ಕಾರ್ಯಕ್ರಮ ತಾಳಿಕೋಟಿ ತಾಲೂಕಿನ ಬಾವೂರು ಗ್ರಾಮದಲ್ಲಿ ಯಶಸ್ವಿಯಾಗಿ ನಡೆಯಿತು.

ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್. ಅಪ್ಪಾಜಿ ನಾಡಗೌಡ ಅವರ ನೇತೃತ್ವದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಬಾವೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ಜನರು ಭಾಗವಹಿಸಿ ತಮ್ಮ ವೈಯಕ್ತಿಕ ಸಮಸ್ಯೆಗಳು ಹಾಗೂ ಗ್ರಾಮಗಳ ಮೂಲಸೌಕರ್ಯಕ್ಕೆ ಸಂಬಂಧಿಸಿದ ಕುಂದುಕೊರತೆಗಳನ್ನು ಶಾಸಕರ ಗಮನಕ್ಕೆ ತಂದರು.

ಸಾರ್ವಜನಿಕರ ಪ್ರತಿಯೊಂದು ಅಹವಾಲನ್ನೂ ತಾಳ್ಮೆಯಿಂದ ಆಲಿಸಿದ ಶಾಸಕ ನಾಡಗೌಡ ಅವರು, ಸಲ್ಲಿಕೆಯಾದ ದೂರುಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ವಿಳಂಬವಿಲ್ಲದೆ ಪರಿಹರಿಸುವಂತೆ ಸ್ಥಳದಲ್ಲಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಜನರ ಬಳಿಗೇ ತೆರಳಿ ಅವರ ಸಮಸ್ಯೆಗಳನ್ನು ಬಗೆಹರಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಪ್ರಜಾಸೇವೆ ಆಂದೋಲನಕ್ಕೆ ಕ್ಷೇತ್ರದ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿರುವುದು ಸಂತಸ ತಂದಿದೆ. ಜನರ ಆಶೋತ್ತರಗಳಿಗೆ ಸ್ಪಂದಿಸುವುದರ ಜತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸದಾ ಬದ್ಧನಾಗಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಬಾವೂರು ಗ್ರಾಮದ ನೂರಾರು ನಾಗರಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande