
ಬೆಂಗಳೂರು, 14 ನವೆಂಬರ್ (ಹಿ.ಸ.):
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳದ ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸುವಂತೆ ಕೋರಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ. ವೀರೇಂದ್ರ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿರುವ ಕಾಯ್ದೆಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸುಮಾರು ಏಳು ದಶಕಗಳಿಂದ ಈ ಸಮುದಾಯಗಳ ಮೀಸಲಾತಿ ಪ್ರಮಾಣದಲ್ಲಿ ಬದಲಾವಣೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಪರಿಗಣಿಸಿ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗವು ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಜನಸಂಖ್ಯೆ ಶೇ.17.15 ಹಾಗೂ ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇ.6.95ರಷ್ಟಿದೆ. ಮೀಸಲಾತಿ ಹೆಚ್ಚಳದ ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ನೀಡಲು 9ನೇ ಅನುಸೂಚಿಗೆ ಸೇರಿಸುವಂತೆಯೂ ಆಯೋಗ ಸಲಹೆ ನೀಡಿತ್ತು.
ಈ ಶಿಫಾರಸಿನ ಆಧಾರದ ಮೇಲೆ ರಾಜ್ಯ ಸರ್ಕಾರ 2022ರಲ್ಲಿ ಕಾಯ್ದೆ ರೂಪಿಸಿತ್ತು. 2023ರ ಜನವರಿ 11ರಂದು ರಾಜ್ಯಪಾಲರ ಅಂಕಿತ ಪಡೆದ ಕಾಯ್ದೆಯು 2022ರ ನವೆಂಬರ್ 1ರಿಂದ ಅನ್ವಯವಾಗುವಂತೆ ಜಾರಿಗೊಂಡಿತ್ತು.
ಆದರೆ, ಒಟ್ಟು ಮೀಸಲಾತಿ ಪ್ರಮಾಣ ಶೇ.56ಕ್ಕೆ ಏರಿಕೆಯಾಗುವುದರಿಂದ ಶೇ.50ರ ಮಿತಿಯನ್ನು ಮೀರಿದಂತಾಗುತ್ತದೆ ಎಂಬ ಕಾರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯ 2026ರ ಅಕ್ಟೋಬರ್ 12ರಂದು ಮೀಸಲಾತಿ ಹೆಚ್ಚಳದ ನಿಬಂಧನೆಗಳನ್ನು ರದ್ದುಗೊಳಿಸಿದೆ. ಈ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಉಚ್ಚತಮ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದೆ.
ತಮಿಳುನಾಡಿನಲ್ಲಿ ಶೇ.69ರ ಮೀಸಲಾತಿಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸಲು 1994ರಲ್ಲಿ ಸಂವಿಧಾನದ 76ನೇ ತಿದ್ದುಪಡಿ ಮೂಲಕ ಅಲ್ಲಿನ ಮೀಸಲಾತಿ ಕಾಯ್ದೆಯನ್ನು 9ನೇ ಅನುಸೂಚಿಗೆ ಸೇರಿಸಲಾಗಿತ್ತು. ಇದೇ ಮಾದರಿಯಲ್ಲಿ ಕರ್ನಾಟಕದ ಶೇ.56ರ ಮೀಸಲಾತಿಗೂ ರಕ್ಷಣೆ ಒದಗಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪರಮೇಶ್ವರ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರ 2023ರ ಮಾರ್ಚ್ 23ರಂದೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 2025ರ ಡಿಸೆಂಬರ್ 18ರಂದು ರಾಜ್ಯ ವಿಧಾನಸಭೆಯಲ್ಲಿಯೂ ನಿರ್ಣಯ ಅಂಗೀಕರಿಸಲಾಗಿತ್ತು. 2026ರ ಏಪ್ರಿಲ್ 16ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಗೆ ಪತ್ರ ಬರೆದಿದ್ದರು. ಆದರೂ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿರುವ ಕಾರಣ ನೀಡಿ ಕೇಂದ್ರ ಸರ್ಕಾರ ಈ ವಿಷಯವನ್ನು ಮುಂದೂಡಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿದೆ ಎಂಬ ಕಾರಣಕ್ಕೆ ಸಾಮಾಜಿಕ ನ್ಯಾಯದ ಉದ್ದೇಶವನ್ನು ಅನಿರ್ದಿಷ್ಟಾವಧಿಗೆ ಮುಂದೂಡಬಾರದು. ಸಂವಿಧಾನಾತ್ಮಕ ಸಮಸ್ಯೆಗಳನ್ನು ಪರಿಹರಿಸುವುದರ ಜತೆಗೆ ಹಿಂದುಳಿದ ಸಮುದಾಯಗಳ ಶೈಕ್ಷಣಿಕ ಮತ್ತು ಉದ್ಯೋಗಾವಕಾಶಗಳನ್ನು ರಕ್ಷಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಜವಾಬ್ದಾರಿಯಾಗಿದೆ ಎಂದು ಪರಮೇಶ್ವರ ಪ್ರತಿಪಾದಿಸಿದ್ದಾರೆ.
ಪ್ರಧಾನಮಂತ್ರಿಗಳು ಖುದ್ದು ಮಧ್ಯಪ್ರವೇಶಿಸಿ, ಕರ್ನಾಟಕದ ಮೀಸಲಾತಿ ಹೆಚ್ಚಳದ ಕಾಯ್ದೆಯನ್ನು 9ನೇ ಅನುಸೂಚಿಗೆ ಸೇರಿಸಲು ಅಗತ್ಯವಾದ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇದರ ಜತೆಗೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಮತ್ತು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗಗಳೊಂದಿಗೆ ಸಮಾಲೋಚನೆ ನಡೆಸಬೇಕು. ಕೇಂದ್ರದ ಕಾನೂನು ಮತ್ತು ನ್ಯಾಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಬುಡಕಟ್ಟು ವ್ಯವಹಾರಗಳು ಹಾಗೂ ಗೃಹ ಸಚಿವಾಲಯಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾಲಮಿತಿಯೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಕೋರಿದ್ದಾರೆ.
ದೇಶದ ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿಗೆ ಅನುಗುಣವಾಗಿ ಶೇ.50ರ ಮೀಸಲಾತಿ ಮಿತಿಯ ಪ್ರಸ್ತುತತೆಯ ಕುರಿತು ರಾಷ್ಟ್ರಮಟ್ಟದಲ್ಲಿ ಮರುಪರಿಶೀಲನೆ ಮತ್ತು ವ್ಯಾಪಕ ಚರ್ಚೆ ನಡೆಸುವ ಅಗತ್ಯವಿದೆ ಎಂದೂ ಪತ್ರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಪತ್ರದ ಪ್ರಮುಖ ಬೇಡಿಕೆಗಳು
* ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಿರುವ ಕಾಯ್ದೆಯನ್ನು 9ನೇ ಅನುಸೂಚಿಗೆ ಸೇರಿಸಬೇಕು.
* ಅಗತ್ಯ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ತುರ್ತು ಕ್ರಮ ಕೈಗೊಳ್ಳಬೇಕು.
* ರಾಷ್ಟ್ರೀಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಗಳೊಂದಿಗೆ ಸಮಾಲೋಚನೆ ನಡೆಸಬೇಕು.
* ಸಂಬಂಧಪಟ್ಟ ಕೇಂದ್ರ ಸಚಿವಾಲಯಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾಲಮಿತಿಯೊಳಗೆ ನಿರ್ಧಾರ ಕೈಗೊಳ್ಳಬೇಕು.
* ಶೇ.50ರ ಮೀಸಲಾತಿ ಮಿತಿಯ ಕುರಿತು ರಾಷ್ಟ್ರಮಟ್ಟದಲ್ಲಿ ಮರುಪರಿಶೀಲನೆ ನಡೆಸಬೇಕು.
ಸಾಮಾಜಿಕ ನ್ಯಾಯದ ವಿಚಾರ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿದ್ದಾಗಿದೆ. ಶತಮಾನಗಳಿಂದ ಅವಕಾಶವಂಚಿತರಾದ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮಾನ ಅವಕಾಶ ಕಲ್ಪಿಸುವುದು ರಾಷ್ಟ್ರದ ಸಾಮೂಹಿಕ ಕರ್ತವ್ಯವಾಗಿದೆ. ಹೀಗಾಗಿ ಕರ್ನಾಟಕದ ದೀರ್ಘಕಾಲದ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ನಿಗದಿತ ಅವಧಿಯೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಡಾ. ಜಿ. ಪರಮೇಶ್ವರ ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.