
ಬಾಗಲಕೋಟೆ, 14 ನವೆಂಬರ್ (ಹಿ.ಸ.)
ಸರ್ಕಾರದ ಸೌಲಭ್ಯಗಳು ಹಾಗೂ ಆಡಳಿತವನ್ನು ನೇರವಾಗಿ ಸಾರ್ವಜನಿಕರ ಮನೆಬಾಗಿಲಿಗೆ ಕೊಂಡೊಯ್ಯುವ ಮತ್ತು ಜನರ ಕುಂದುಕೊರತೆಗಳನ್ನು ಸ್ಥಳದಲ್ಲೇ ಬಗೆಹರಿಸುವ ಮಹತ್ವಾಕಾಂಕ್ಷೆಯ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮವು ಇಂದು ಮುಧೋಳ ತಾಲೂಕಿನ ಐತಿಹಾಸಿಕ ಮೆಳ್ಳಿಗೇರಿ ಗ್ರಾಮದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.
ಈ ಕಾರ್ಯಕ್ರಮದಲ್ಲಿ ಖುದ್ದಾಗಿ ಪಾಲ್ಗೊಂಡ ಮುಧೋಳ ಕ್ಷೇತ್ರದ ಶಾಸಕರಾದ ಆರ್.ಬಿ. ತಿಮ್ಮಾಪುರ ಅವರು ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು. ಮೆಳ್ಳಿಗೇರಿ ಗ್ರಾಮ ಹಾಗೂ ಸುತ್ತಮುತ್ತಲಿನ ಭಾಗಗಳಿಂದ ಆಗಮಿಸಿದ್ದ ನೂರಾರು ಸಾರ್ವಜನಿಕರು ತಮ್ಮ ವೈಯಕ್ತಿಕ ಸಮಸ್ಯೆಗಳು ಹಾಗೂ ಗ್ರಾಮದ ಅಭಿವೃದ್ಧಿ ಕುರಿತ ಮನವಿಗಳನ್ನು ಸಲ್ಲಿಸಿದರು.
ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಆರ್.ಬಿ. ತಿಮ್ಮಾಪುರ ಅವರು, ಜನರ ಸಮಸ್ಯೆಗಳಿಗೆ ಯಾವುದೇ ವಿಳಂಬವಿಲ್ಲದೆ ತಕ್ಷಣವೇ ಸ್ಪಂದಿಸಬೇಕು ಎಂದು ಸ್ಥಳದಲ್ಲಿದ್ದ ವಿವಿಧ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜನರ ಕಷ್ಟಗಳಿಗೆ ಸ್ಪಂದಿಸುವುದು ಮತ್ತು ಅವರ ಕಲ್ಯಾಣಕ್ಕಾಗಿ ಶ್ರಮಿಸುವುದು ನಮ್ಮ ಸರ್ಕಾರದ ಪ್ರಥಮ ಹಾಗೂ ಮುಖ್ಯ ಆದ್ಯತೆಯಾಗಿದೆ. ಸಾರ್ವಜನಿಕರು ಸರ್ಕಾರದ ಯೋಜನೆಗಳ ಲಾಘವ ಪಡೆದುಕೊಳ್ಳಲು ಹಾಗೂ ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಈ ಆಂದೋಲನ ಸಹಕಾರಿಯಾಗಿದೆ ಎಂದು ಅವರು ತಿಳಿಸಿದರು.
ಈ ಜನಸಂಪರ್ಕ ಕಾರ್ಯಕ್ರಮದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದುಗೌಡ ಪಾಟೀಲ್, ಮುಧೋಳ ಎಪಿಎಂಸಿ ಉಪಾಧ್ಯಕ್ಷರಾದ ಭೀಮಶಿ ಮೆಟಗುಡ್ಡ, ಹಾಗೂ ಪಕ್ಷದ ಪ್ರಮುಖ ಮುಖಂಡರು, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು ಹಾಗೂ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande