
ಶಿವಮೊಗ್ಗ, 15 ನವೆಂಬರ್ (ಹಿ.ಸ.):
ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜನ್ಮದಿನದ ಅಂಗವಾಗಿ ಶಿಕಾರಿಪುರದಲ್ಲಿ ಇಂದು ಆಯೋಜಿಸಿದ್ದ ಜನಜಾತೀಯ ಗೌರವ ದಿವಸ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸಿ, ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರಿಗೆ ಗೌರವ ನಮನ ಸಲ್ಲಿಸಿದರು.
ಮಾತೃಭೂಮಿ ಹಾಗೂ ಜಲ, ಅರಣ್ಯ ಮತ್ತು ಭೂಮಿಯ ಹಕ್ಕುಗಳ ರಕ್ಷಣೆಗಾಗಿ ಹೋರಾಡಿದ ಬಿರ್ಸಾ ಮುಂಡಾ ಅವರ ತ್ಯಾಗ, ಹೋರಾಟ ಮತ್ತು ದೇಶಪ್ರೇಮವನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬುಡಕಟ್ಟು ಹಾಗೂ ಪರಿಶಿಷ್ಟ ಸಮುದಾಯಗಳ ಸಬಲೀಕರಣಕ್ಕೆ ಹೊಸ ಶಕ್ತಿ ಮತ್ತು ವೇಗ ದೊರೆತಿದೆ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಶಿಕಾರಿಪುರ ಕ್ಷೇತ್ರದ ಎಲ್ಲರಿಗೂ ಜನಜಾತೀಯ ಗೌರವ ದಿವಸದ ಶುಭಾಶಯಗಳನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಸಿದ್ದಲಿಂಗಪ್ಪ ನಿಂಬೆಗೊಂದಿ, ಯುವ ಮೋರ್ಚಾ ಅಧ್ಯಕ್ಷ ವೀರಣ್ಣಗೌಡ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಬೆಣ್ಣೆ ಪ್ರವೀಣ್, ಮುಖಂಡ ಸುಧೀರ್ ಸೇರಿದಂತೆ ಹಲವು ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.