ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಅವಕಾಶ: ಆಹಾರ ಮಳಿಗೆ ಆರಂಭಕ್ಕೆ ₹4 ಲಕ್ಷ ಸಹಾಯಧನ
ಮೊಬೈಲ್ ಅಡುಗೆ ಘಟಕ, ಆಹಾರ ಸಾಗಣೆ ವಾಹನ ಸ್ಥಾಪನೆಗೆ ಶೇ.75ರಷ್ಟು ನೆರವು; ಸಚಿವ ಟಿ. ರಘುಮೂರ್ತಿ
ಸಚಿವ ಟಿ.ರಘುಮೂರ್ತಿ


ಬೆಂಗಳೂರು, 15 ನವೆಂಬರ್ (ಹಿ.ಸ.):

ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ವಿಶೇಷ ಯೋಜನೆಯೊಂದನ್ನು ಜಾರಿಗೆ ತರಲು ಮುಂದಾಗಿದೆ. ಇದರಡಿ ವೇಗದ ಆಹಾರ ಮಳಿಗೆ, ಮೊಬೈಲ್ ಅಡುಗೆ ಘಟಕ ಹಾಗೂ ಆಹಾರ ಮಾರಾಟದ ವಾಹನ ಆರಂಭಿಸಲು ಘಟಕ ವೆಚ್ಚದ ಶೇ.75ರಷ್ಟು ಅಥವಾ ಗರಿಷ್ಠ ನಾಲ್ಕು ಲಕ್ಷ ರೂಪಾಯಿಗಳವರೆಗೆ ಸಹಾಯಧನ ನೀಡಲಾಗುತ್ತದೆ.

ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರ ಮುತುವರ್ಜಿಯಿಂದ ಈ ಯೋಜನೆ ಅನುಷ್ಠಾನಕ್ಕೆ ಬರುತ್ತಿದೆ. ಪರಿಶಿಷ್ಟ ಪಂಗಡದ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸಿ, ಅವರ ಆರ್ಥಿಕ ಸಬಲೀಕರಣಕ್ಕೆ ನೆರವಾಗುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಫಾಸ್ಟ್‌ಫುಡ್‌ ಟ್ರಕ್‌, ಟ್ರೈಲರ್‌, ಮೊಬೈಲ್‌ ಅಡುಗೆ ಘಟಕ ಹಾಗೂ ಆಹಾರ ಮಳಿಗೆಗಳನ್ನು ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ. ಈ ವಿಶೇಷ ಯೋಜನೆಗೆ ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.

ಕಳೆದ ಬಜೆಟ್‌ನಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆ ಆರಂಭಿಸುವುದಾಗಿ ಘೋಷಿಸಿದ್ದರು. ನಂತರ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಟಿ. ರಘುಮೂರ್ತಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಂಡರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಅನುಮೋದನೆ ದೊರೆಯುವಂತೆ ಮುತುವರ್ಜಿ ವಹಿಸಿದರು.

ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಬ್ಯಾಂಕ್‌ ಹಾಗೂ ಹಣಕಾಸು ಸಂಸ್ಥೆಗಳ ಮೂಲಕ ಆರ್ಥಿಕ ಸೌಲಭ್ಯ ಒದಗಿಸುವುದರ ಜತೆಗೆ ಸರ್ಕಾರದಿಂದ ಸಹಾಯಧನ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಕಾರ್ಯದರ್ಶಿ ಎಂ. ಕನಗವಲ್ಲಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಅಶೋಕ್ ಡಿ.ಆರ್. ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಆದಿವಾಸಿಗಳು ಸೇರಿದಂತೆ 50ಕ್ಕೂ ಹೆಚ್ಚು ಸಮುದಾಯಗಳು ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿವೆ. ಈ ಯೋಜನೆಯ ಸೌಲಭ್ಯ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿರುವ ಎಲ್ಲ ಸಮುದಾಯಗಳ ಅರ್ಹ ಫಲಾನುಭವಿಗಳಿಗೆ ಅನ್ವಯವಾಗಲಿದೆ.

ಆರ್ಥಿಕ ಸಬಲೀಕರಣಕ್ಕೆ ಆದ್ಯತೆ

ಈ ಯೋಜನೆಯಿಂದ ಪರಿಶಿಷ್ಟ ಪಂಗಡದ ಸಮುದಾಯದವರ ಆರ್ಥಿಕ ಸಬಲೀಕರಣಕ್ಕೆ ನೆರವಾಗಲಿದೆ. ಅನಿಯಂತ್ರಿತ ಬೀದಿ ವ್ಯಾಪಾರಕ್ಕೆ ಹೋಲಿಸಿದರೆ ಪ್ರಮಾಣೀಕೃತ ಮೊಬೈಲ್ ಆಹಾರ ಘಟಕಗಳ ಮೂಲಕ ಉತ್ತಮ ಗುಣಮಟ್ಟದ ಆಹಾರ ಒದಗಿಸಲು ಸಾಧ್ಯವಾಗಲಿದೆ ಎಂದು ಸಚಿವ ಟಿ. ರಘುಮೂರ್ತಿ ತಿಳಿಸಿದ್ದಾರೆ.

ಪರಿಶಿಷ್ಟ ಪಂಗಡದ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವ ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈ ಯೋಜನೆಯಿಂದ ಸಾವಿರಾರು ಜನರಿಗೆ ನೆರವಾಗುವುದರ ಜತೆಗೆ, ಫಲಾನುಭವಿಗಳು ಮತ್ತಷ್ಟು ಜನರಿಗೆ ಉದ್ಯೋಗ ಕಲ್ಪಿಸುವಂತಾಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande