
ಬೆಂಗಳೂರು, 15 ನವೆಂಬರ್ (ಹಿ.ಸ.):
ಮಹಿಳೆಯರಿಗೆ ಸಚಿವ ಸ್ಥಾನ ನೀಡುವ ವಿಚಾರವನ್ನು ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತಂದಿದ್ದು, ಈ ಸಂಬಂಧ ಚರ್ಚಿಸಲು ತಮ್ಮನ್ನು ದೆಹಲಿಗೆ ಆಹ್ವಾನಿಸುವುದಾಗಿ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಸಚಿವರ ಆಯ್ಕೆ ಪ್ರಕ್ರಿಯೆ ನಾಳೆಯೇ ನಡೆಯುತ್ತದೆಯೋ ಇಲ್ಲವೋ ಎಂಬುದು ಗೊತ್ತಿಲ್ಲ. ಆದರೆ, ಈ ವಿಚಾರವಾಗಿ ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದೇನೆ. ಇದು ಆಗಬೇಕಾದ ಕೆಲಸವಾಗಿದ್ದು, ಖಂಡಿತವಾಗಿಯೂ ಮಾಡುತ್ತೇವೆ ಎಂದು ತಿಳಿಸಿದರು.
ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಕುರಿತು ಈಗಾಗಲೇ ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆಯ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಒಡನಾಟ ಬಿಜೆಪಿ ನಾಯಕರಿಗೆ ಮುಜುಗರ ಉಂಟುಮಾಡಿದೆಯೇ ಎಂಬ ಪ್ರಶ್ನೆಗೆ, ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಧಾನಮಂತ್ರಿ ಸ್ಥಾನಕ್ಕೆ ನೀಡಬೇಕಾದ ಗೌರವವನ್ನು ನೀಡಬೇಕು. ಅದೇ ರೀತಿ ಪ್ರಧಾನಿಯವರೂ ರಾಜ್ಯದ ಮುಖ್ಯಮಂತ್ರಿಗೆ ಗೌರವ ನೀಡುತ್ತಾರೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯವಾಗಿ ಸ್ಪರ್ಧೆ ಮಾಡೋಣ. ಆದರೆ, ಈಗ ಒಟ್ಟಾಗಿ ಜನರ ಅಭಿವೃದ್ಧಿಗಾಗಿ ಕೆಲಸ ಮಾಡೋಣ ಎಂದು ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.