
ಬೆಂಗಳೂರು, 15 ನವೆಂಬರ್ (ಹಿ.ಸ.):
ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯ ಉದ್ದೇಶದೊಂದಿಗೆ ವಿದ್ಯಾಶಿಲ್ಪ ಅಕಾಡೆಮಿಯ ವಿದ್ಯಾರ್ಥಿಗಳು ಐಜೆಎಎಂ ಚಾರಿಟಿ ಸಹಯೋಗದಲ್ಲಿ ಯಲಹಂಕದ ಅವಲಹಳ್ಳಿ ಕೆರೆ ಪುನಶ್ಚೇತನ ಮತ್ತು ಅಭಿವೃದ್ಧಿಗಾಗಿ ನಿಧಿ ಸಂಗ್ರಹ ಕಾರ್ಯಕ್ರಮ ಆಯೋಜಿಸಿದರು.
ನವೆಂಬರ್ 14ರಂದು ನಡೆದ ಈ ಕಾರ್ಯಕ್ರಮದಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್ ಅವರು ವಾಕಥಾನ್ಗೆ ಚಾಲನೆ ನೀಡಿದರು. ಕಾರ್ಯಕ್ರಮದ ಆರಂಭದಲ್ಲಿ ಕೆರೆಯ ವಾಯುವಿಹಾರ ಪಥದ ಉದ್ದಕ್ಕೂ ಸಸಿಗಳನ್ನು ನೆಡಲಾಯಿತು. ಬಳಿಕ ಶಾಸಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕೆರೆಯ ಸುತ್ತ ವಾಕಥಾನ್ನಲ್ಲಿ ಪಾಲ್ಗೊಂಡರು.
ಅವಲಹಳ್ಳಿ ಕೆರೆಯ ಪುನರುಜ್ಜೀವನ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಆರ್ಥಿಕ ನೆರವು ಸಂಗ್ರಹಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದವರು ಪರಿಸರ ಸಂರಕ್ಷಣೆಯ ಸಂಕಲ್ಪ ವ್ಯಕ್ತಪಡಿಸಿದರು. ಕೆರೆಯ ಅಭಿವೃದ್ಧಿಗೆ ಹೊಸ ಕ್ರಮಗಳನ್ನು ಕೈಗೊಳ್ಳುವ ಭರವಸೆಗಳನ್ನೂ ನೀಡಲಾಯಿತು. ಇಂತಹ ಪರಿಸರ ಸ್ನೇಹಿ ಉಪಕ್ರಮಗಳನ್ನು ಮತ್ತಷ್ಟು ಪ್ರೋತ್ಸಾಹಿಸುವ ಅಗತ್ಯವನ್ನು ಪ್ರತಿಪಾದಿಸಲಾಯಿತು.
ಸ್ಥಳೀಯ ಮಟ್ಟದಲ್ಲಿ ಕೈಗೊಳ್ಳುವ ಪರಿಸರ ಸಂರಕ್ಷಣಾ ಕಾರ್ಯಗಳು ಜಾಗತಿಕ ಮಟ್ಟದಲ್ಲಿ ಮಹತ್ವದ ಪರಿಣಾಮ ಬೀರಬಲ್ಲವು ಎಂಬ ಆಶಯದೊಂದಿಗೆ ವಿದ್ಯಾಶಿಲ್ಪ ಅಕಾಡೆಮಿಯ ವಿದ್ಯಾರ್ಥಿಗಳು ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿಧಿ ಸಂಗ್ರಹ, ದೇಣಿಗೆ ಅಭಿಯಾನ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ.
ವಿದ್ಯಾಶಿಲ್ಪ ಅಕಾಡೆಮಿಯ ಯುವಜನ ಅಭಿವೃದ್ಧಿ ಕಾರ್ಯಕ್ರಮದ ಸಂಸ್ಥಾಪಕಿಯಾಗಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ವಿವಿಧ ಸಾಮಾಜಿಕ ಹಾಗೂ ಪರಿಸರ ಸಂಬಂಧಿತ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಸಂಬಂಧಿಸಿದ ಹಲವು ಕಾರ್ಯಗಳಿಗೆ ಈವರೆಗೆ ಸುಮಾರು ಒಂದು ಲಕ್ಷ ರೂಪಾಯಿ ಸಂಗ್ರಹಿಸಿ ನೆರವು ನೀಡಲಾಗಿದೆ ಎಂದು 12ನೇ ತರಗತಿಯ ವಿದ್ಯಾರ್ಥಿನಿ ಶೈವಿ ಗುರುರಾಜ ತಿಳಿಸಿದ್ದಾರೆ.
ಪರಿಸರ ಸಂರಕ್ಷಣೆಯನ್ನು ಪ್ರಮುಖ ಆದ್ಯತೆಯನ್ನಾಗಿ ಪರಿಗಣಿಸಿ, ನಿರಂತರ ಬದ್ಧತೆ ಮತ್ತು ಸಂಘಟಿತ ಪ್ರಯತ್ನಗಳ ಮೂಲಕ ಇಂತಹ ಕಾರ್ಯಗಳನ್ನು ಮುಂದುವರಿಸುವುದಾಗಿ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.