
ಗದಗ, 16 ನವೆಂಬರ್ (ಹಿ.ಸ.)
ಭಾರತೀಯ ಜನತಾ ಪಾರ್ಟಿಯ ಎಸ್.ಟಿ. ಮೋರ್ಚಾ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜಯಂತಿಯನ್ನು ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಬಿಜೆಪಿ ಎಸ್.ಟಿ. ಮೋರ್ಚಾ ರೋಣ ಮಂಡಲದ ಅಧ್ಯಕ್ಷ ಸಂತೋಷ ಕಡಿವಾಲರ, ಭಗವಾನ್ ಬಿರ್ಸಾ ಮುಂಡಾ ಅವರ ಜೀವನ ಚರಿತ್ರೆ, ಸ್ವಾತಂತ್ರ್ಯ ಹೋರಾಟ, ಸಾಮಾಜಿಕ ಚಳವಳಿಗಳು ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಜನಜಾತಿ ಸಮುದಾಯದ ಐತಿಹಾಸಿಕ ಕೊಡುಗೆಗಳನ್ನು ಸ್ಮರಿಸಿದರು. ಜನಜಾತಿ ಸಮುದಾಯದ ಅಸ್ಮಿತೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಸಂರಕ್ಷಣೆಯ ಮಹತ್ವವನ್ನು ವಿವರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಜನಜಾತಿ ಸಮುದಾಯಕ್ಕೆ ದೊರೆಯುತ್ತಿರುವ ಗೌರವ, ಪ್ರಾತಿನಿಧ್ಯ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಮುಖ ಯೋಜನೆಗಳ ಕುರಿತು ಮಾತನಾಡಿದರು.
ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜ) ಕುರುಡಗಿ, ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ವಾಯ್.ಪಿ. ಅಡ್ನೂರ, ಮುಖಂಡ ರವಿ ದಂಡಿನ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಅವರು ಭಗವಾನ್ ಬಿರ್ಸಾ ಮುಂಡಾ ಅವರ ಜೀವನ ಸಾಧನೆ ಮತ್ತು ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಶಾಂತ ನಾಯ್ಕರ, ನಾಗರಾಜ ತಳವಾರ, ಸಂತೋಷ ಅಕ್ಕಿ, ಬೂದಪ್ಪ ಹಳ್ಳಿ, ಭದ್ರೇಶ ಕುಸ್ಲಾಪೂರ, ಅನೀಲ ಅಬ್ಬಿಗೇರಿ, ಮಂಜುನಾಥ ಹಳ್ಳೂರಮಠ, ಸುಭಾಸ ಸುಂಕದ, ವಸಂತ ವಾಲ್ಮೀಕಿ, ಮಂಜುನಾಥ ತಳವಾರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಹಲವರು ಉಪಸ್ಥಿತರಿದ್ದರು.
ಎಸ್.ಟಿ. ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ಪ ಬಿಡನಾಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP