
ಬೆಂಗಳೂರು, 16 ನವೆಂಬರ್ (ಹಿ.ಸ.):
ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಕೊರತೆಯಿಂದ ಬರದ ತೀವ್ರತೆ ಹೆಚ್ಚಾಗಿದ್ದು, ಬೆಳಗಾವಿ ಸೇರಿದಂತೆ ಹಲವು ಭಾಗಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ಅಭಾವದಿಂದ ರೈತರು ತಾವು ಸಾಕಿದ ಜಾನುವಾರುಗಳನ್ನು ಅನ್ಯರಾಜ್ಯದ ವ್ಯಾಪಾರಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿಕೆ ನೀಡಿರುವ ಅವರು, ರೈತರ ಬದುಕಿಗೆ ಕೃಷಿಯಷ್ಟೇ ಜಾನುವಾರುಗಳೂ ಆಧಾರವಾಗಿವೆ. ಆದರೆ ಕೃಷಿ ಚಟುವಟಿಕೆಗಳಿಗೆ ನೀರಿಲ್ಲ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲ, ಹೊಟ್ಟೆ ತುಂಬಿಸಲು ಮೇವು ಇಲ್ಲದಂತಹ ಪರಿಸ್ಥಿತಿ ಎದುರಾಗಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಿ ಜಾನುವಾರುಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕಾದ ಕಾಂಗ್ರೆಸ್ ಸರ್ಕಾರ ಅಧಿಕಾರದ ಆಟದಲ್ಲಿ ಮುಳುಗಿದೆ ಎಂದು ಟೀಕಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಸರ್ಕಾರ ನಿರತವಾಗಿದ್ದು, ರೈತರ ಸಂಕಷ್ಟದ ಬಗ್ಗೆ ನಿರ್ಲಕ್ಷ್ಯ ವಹಿಸಿದೆ. ರೈತರ ಕಷ್ಟಕ್ಕೆ ಸ್ಪಂದಿಸಬೇಕಾದ ಸರ್ಕಾರ ಬರ ನಿರ್ವಹಣೆಯಲ್ಲಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಮೇವಿನ ಬ್ಯಾಂಕ್ಗಳ ಸ್ಥಾಪನೆ, ಗೋಶಾಲೆಗಳ ಆರಂಭ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಾನುವಾರುಗಳ ಸಂರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಲು ಇನ್ನೆಷ್ಟು ರೈತರು ತಮ್ಮ ಜೀವನಾಧಾರ ಕಳೆದುಕೊಳ್ಳಬೇಕು ಎಂದು ಪ್ರಶ್ನಿಸಿರುವ ಅವರು, ಸರ್ಕಾರ ನೀಡುತ್ತಿರುವ ಅಲ್ಪ ಪ್ರಮಾಣದ ಪರಿಹಾರ ರೈತರ ಸಂಕಷ್ಟಕ್ಕೆ ಸಾಕಾಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೈತರ ಕಣ್ಣೀರು ಒರೆಸಬೇಕಾದ ಸರ್ಕಾರ, ಅವರ ಜಾನುವಾರುಗಳು ಅನ್ಯರಾಜ್ಯಗಳ ಪಾಲಾಗುತ್ತಿದ್ದರೂ ಮೌನ ವಹಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ಪ್ರದೇಶಗಳಲ್ಲಿ ಮೇವು ಬ್ಯಾಂಕ್ಗಳನ್ನು ಆರಂಭಿಸಬೇಕು. ಗೋಶಾಲೆಗಳನ್ನು ಸ್ಥಾಪಿಸಿ ಜಾನುವಾರುಗಳಿಗೆ ಉಚಿತ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ರೈತರಿಗೆ ಅಗತ್ಯ ಬರ ಪರಿಹಾರ ಒದಗಿಸುವ ಮೂಲಕ ಅವರ ಜೀವನೋಪಾಯಕ್ಕೆ ಆಸರೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ರೈತರನ್ನು ಸಂಕಷ್ಟದ ಸಮಯದಲ್ಲಿ ಕೈಬಿಡುವ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಹಿತದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ ಎಂದು ಆರ್. ಅಶೋಕ ಪ್ರಶ್ನಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.